ಬೆಂಗಳೂರು: ರಾಜ್ಯದಲ್ಲಿ ಕೋವಿಡ್ ವ್ಯಾಪಕವಾಗಿ ಹೆಚ್ಚುತ್ತಿರುವ ಹಿನ್ನಲೆಯಲ್ಲಿ ಸೆಪ್ಟೆಂಬರ್ ಅಂತ್ಯದವರೆಗೂ ಪ್ರೌಢ ಶಾಲೆ ಹಾಗೂ ಪದವಿ ಪೂರ್ವ ಕಾಲೇಜುಗಳ ವಿದ್ಯಾರ್ಥಿಗಳು ಶಾಲಾ ಅಥವಾ ಕಾಲೇಜಿಗೆ ಭೇಟಿ ನೀಡಲು ಅನುಮತಿಯಿಲ್ಲ ಎಂದು ಸರ್ಕಾರದ ಪ್ರಧಾನ ಕಾರ್ಯದರ್ಶಿ ಎಸ್. ಆರ್ ಉಮಾ ಶಂಕರ್ ತಿಳಿಸಿದ್ದಾರೆ.
ಕೇಂದ್ರ ಸರಕಾರದ ಆದೇಶದ ಪ್ರಕಾರ 9, 10, 11, 12ನೇ ತರಗತಿ ವಿದ್ಯಾರ್ಥಿಗಳಿಗೆ ಸೆ. 21ರಿಂದ ಶಾಲೆಗೆ ಹೋಗಿ ಶಿಕ್ಷಕರ ಬಳಿ ಅನುಮಾನಗಳನ್ನು ಬಗೆಹರಿಸಿಕೊಳ್ಳುವ ಅವಕಾಶ ಇತ್ತು. ಆದರೇ ರಾಜ್ಯದಲ್ಲಿ ಕೋವಿಡ್ ಹೆಚ್ಚಳವಾಗುತ್ತಿರುವುದರಿಂದ ಈಗಿನ ಪರಿಸ್ಥಿತಿಯಲ್ಲಿ ವಿದ್ಯಾರ್ಥಿಗಳು ಶಾಲಾ ಕಾಲೇಜಿಗೆ ಬರುವುದು ಕ್ಷೇಮಕರವಲ್ಲ ಎಂದು ತಿಳಿಸಲಾಗಿದೆ.
ಪರಿಸ್ಥಿತಿಯನ್ನು ಅವಲೋಕಿಸಿದ ನಂತರ ಮುಂದಿನ ತೀರ್ಮಾನ ಕೈಗೊಳ್ಳಲಾಗುವುದು ಎಂದು ವರದಿಯಲ್ಲಿ ತಿಳಿಸಲಾಗಿದೆ.