Advertisement

ಯುವ ಮತದಾರರ ನೋಂದಣಿ ಪಟ್ಟಿ ಸಿದ್ಧಪಡಿಸಿ

06:29 AM Jan 25, 2019 | Team Udayavani |

ಕಲಬುರಗಿ: 18 ವರ್ಷ ತುಂಬಿದ ಯುವಕ- ಯುವತಿಯರು ಮತದಾರರ ಪಟ್ಟಿಯಲ್ಲಿ ಹೆಸರು ನೋಂದಾಯಿಸಿ ಕೊಳ್ಳದಿರುವ ವಿಷಯವನ್ನು ಭಾರತ ಚುನಾವಣೆ ಆಯೋಗ ಗಂಭೀರವಾಗಿ ಪರಿಗಣಿಸಿದ್ದು, ಜಿಲ್ಲೆಯ ಎಲ್ಲ ಕ್ಷೇತ್ರ ಶಿಕ್ಷಣಾಧಿಕಾರಿಗಳು ಹಿಂದಿನ ಮೂರು ವರ್ಷಗಳ ಎಸ್‌.ಎಸ್‌.ಎಲ್‌.ಸಿ. ವಿದ್ಯಾರ್ಥಿಗಳ ಪಟ್ಟಿಯನ್ನು ಎರಡು ದಿನದೊಳಗಾಗಿ ಸಿದ್ಧಪಡಿಸಿ ಸಲ್ಲಿಸಬೇಕು ಎಂದು ಜಿಲ್ಲಾಧಿಕಾರಿ ಆರ್‌. ವೆಂಕಟೇಶಕುಮಾರ ಕ್ಷೇತ್ರ ಶಿಕ್ಷಣಾಧಿಕಾರಿಗಳಿಗೆ ಸೂಚಿಸಿದರು.

Advertisement

ಜಿಲ್ಲಾಧಿಕಾರಿ ಸಭಾಂಗಣದಲ್ಲಿ ರಾಷ್ಟ್ರೀಯ ಮತದಾರರ ದಿನಾಚರಣೆ ಅಂಗವಾಗಿ ನಡೆದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿ, ಪ್ರಸಕ್ತ 2018-19ನೇ ಸಾಲಿನಲ್ಲಿ ಪದವಿ ಪೂರ್ವ ತರಗತಿಯಲ್ಲಿ ವ್ಯಾಸಾಂಗ ಮಾಡುತ್ತಿರುವ ವಿದ್ಯಾರ್ಥಿಗಳು ಮತದಾರರ ಪಟ್ಟಿಯಲ್ಲಿ ಹೆಸರು ನೋಂದಾಯಿಸಿಕೊಂಡಿದ್ದಾರೆಯೆ ಎನ್ನುವುದರ ಬಗ್ಗೆ ಪರಿಶೀಲಿಸಬೇಕು. ಹೆಸರು ನೋಂದಣಿ ಆಗದಿದ್ದಲ್ಲಿ ನೋಂದಣಿ ಮಾಡಿಸಬೇಕು. ನಂತರ ಎಪಿಕ್‌ಗಾಗಿ ಅರ್ಹರ ಪಟ್ಟಿಯನ್ನು ಪದವಿ ಪೂರ್ವ ಶಿಕ್ಷಣ ಇಲಾಖೆ ಕೂಡಲೆ ಸಲ್ಲಿಸಬೇಕು ಎಂದು ನಿರ್ದೇಶನ ನೀಡಿದರು.

ಜಿಲ್ಲೆಯಲ್ಲಿ ಸರ್ಕಾರಿ ಮತ್ತು ಖಾಸಗಿ ಪದವಿ ಪೂರ್ವ ಕಾಲೇಜು, ಐಟಿಐ ಸಂಸ್ಥೆಗಳು, ಪದವಿ ಕಾಲೇಜುಗಳು ಸೇರಿದಂತೆ ಒಟ್ಟು 257 ಕಾಲೇಜುಗಳಿವೆ. ಈ ಕಾಲೇಜುಗಳಲ್ಲಿ ಈಗಾಗಲೇ ವ್ಯಾಸಂಗ ಮಾಡಿರುವ ಹಾಗೂ 2019 ಜನವರಿ 1ಕ್ಕೆ 18 ವರ್ಷ ಪೂರ್ಣಗೊಂಡಿರುವ ಯುವಕ-ಯುವತಿಯರ ಹೆಸರು, ವಿಳಾಸ ಪತ್ತೆ ಮಾಡಿ ಸ್ಥಳದಲ್ಲಿಯೇ ಅಭ್ಯರ್ಥಿಗಳಿಂದ ನಮೂನೆ-6ರಲ್ಲಿ ಮಾಹಿತಿ ಪಡೆದು ಮತದಾರರ ಪಟ್ಟಿಯಲ್ಲಿ ಹೆಸರು ಸೇರಿಸಲು ಕ್ರಮ ಕೈಗೊಳ್ಳಬೇಕು. ಈ ಸಂಬಂಧ ಅರ್ಹ ವಿದ್ಯಾರ್ಥಿಗಳ ವಿವರವನ್ನು ಶುಕ್ರವಾರ ಸಂಜೆಯೊಳಗೆ ಸಲ್ಲಿಸಬೇಕು ಎಂದು ತಿಳಿಸಿದರು.

ಪ್ರಭಾರಿ ಹೆಚ್ಚುವರಿ ಜಿಲ್ಲಾಧಿಕಾರಿ ರಾಚಪ್ಪ, ಶಿಕ್ಷಣ ಇಲಾಖೆಯ ಜಿಲ್ಲಾ ಮಟ್ಟದ ಅಧಿಕಾರಿಗಳು, ಶಾಲಾ-ಕಾಲೇಜುಗಳ ಪ್ರಾಂಶುಪಾಲರು ಇದ್ದರು.

Advertisement

Udayavani is now on Telegram. Click here to join our channel and stay updated with the latest news.

Next