ರಾಯಚೂರು: ರಸ್ತೆ ಸುರಕ್ಷತಾ ಕ್ರಮಗಳ ವಿಚಾರದಲ್ಲಿ ಸುಪ್ರೀಂಕೋರ್ಟ್ ನಿರ್ದೇಶನಗಳನ್ನು ಎಲ್ಲರೂ ಕಡ್ಡಾಯವಾಗಿ ಪಾಲಿಸಬೇಕಿದ್ದು, ಈ ಬಗ್ಗೆ ಸಂಬಂಧಿಸಿದ ಇಲಾಖೆಗಳು ಜನಜಾಗೃತಿ ಮೂಡಿಸಬೇಕು ಎಂದು ಜಿಲ್ಲಾಧಿಕಾರಿ ಎಲ್. ಚಂದ್ರಶೇಖರ್ ನಾಯಕ ತಿಳಿಸಿದರು.
ನಗರದ ಡಿಸಿ ಕಚೇರಿ ಸಭಾಂಗಣದಲ್ಲಿ ಶುಕ್ರವಾರ ಜಿಲ್ಲಾಮಟ್ಟದ ರಸ್ತೆ ಸುರಕ್ಷತಾ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ನಗರ ಸೇರಿ ಜಿಲ್ಲೆಯ ಎಲ್ಲಡೆ ರಸ್ತೆ ಸುರಕ್ಷತೆ ಹಾಗೂ ಸಂಚಾರಿ ನಿಯಮಗಳ ಬಗ್ಗೆ ಜನರಿಗೆ ಮಾಹಿತಿ ನೀಡುವ, ಜಾಗೃತಿ ಮೂಡಿಸುವ ಚಟುವಟಿಕೆಗಳನ್ನು ಅನುಷ್ಠಾನಗೊಳಿಸಬೇಕು. ಅನಗತ್ಯವಾಗಿ ಅಳವಡಿಸಿದ ಹಂಪ್‌ಗ್ಳನ್ನು ತೆಗೆಯಬೇಕು. ಹೆಚ್ಚು ಅಪಘಾತಗಳು ನಡೆದಿರುವ ಸ್ಥಳಗಳಲ್ಲಿ ನಿಯಂತ್ರಣ ಕ್ರಮ ಕೈಗೊಳ್ಳಬೇಕು. ಚರಂಡಿಗಳ ಅಳವಡಿಕೆ ಹಾಗೂ ರಸ್ತೆ ಸುರಕ್ಷತಾ ಕ್ರಮಗಳಿಗೆ ಅಗತ್ಯವಿರುವ ಅನುದಾನದ ಬಗ್ಗೆ ಪ್ರಸ್ತಾವನೆ ಸಲ್ಲಿಸಬೇಕು ಎಂದರು.
ಸಮಿತಿಯು ರಸ್ತೆ ಅಪಘಾತ ಕಡಿಮೆ ಮಾಡುವ ಹಾಗೂ ಸುಗಮ ಸಂಚಾರದ ನಿಟ್ಟಿನಲ್ಲಿ ಪ್ರತಿ ತಿಂಗಳು ಸಭೆ ನಡೆಸಿ ಅಗತ್ಯವಿರುವ ಕ್ರಮ ಕೈಗೊಳ್ಳಬೇಕು. ಅಲ್ಲದೆ ಜಿಲ್ಲೆಯಲ್ಲಿ ನಡೆಯುವ ಅಪಘಾತಗಳನ್ನು ಪರಾಮರ್ಶಿಸಿ ಇದು ಯಾವ ಕಾರಣದಿಂದ ಅಪಘಾತವಾಗಿದೆ ಎಂಬ ಬಗ್ಗೆ ಎಲ್ಲ ಹಂತದಲ್ಲಿ ಅಧ್ಯಯನ ನಡೆಸಿ ಸೂಕ್ತ ಕ್ರಮ ಕೈಗೊಳ್ಳುವಂತೆ ಸೂಚಿಸಿದರು.
ರಸ್ತೆ ಸುರಕ್ಷತಾ ಸಮಿತಿಯ ಸಭೆಯನ್ನು ಪ್ರತಿ ತಿಂಗಳು ನಡೆಸಿ, ಕೈಗೊಂಡ ನಿರ್ಣಯಗಳ ಬಗ್ಗೆ ಕೇಂದ್ರ ಸರಕಾರದ ರಸ್ತೆ ಸುರಕ್ಷತೆಗೆ ಸಂಬಂಧಿಸಿದ ವೆಬ್‌ಸೈಟ್‌ನಲ್ಲಿ 48ಗಂಟೆಯೊಳಗೆ ಮಾಹಿತಿ ನೀಡಬೇಕು. ರಸ್ತೆ ಸುರಕ್ಷತಾ ನಿಯಮಗಳ ಜಾಗೃತಿಯಲ್ಲಿ ಸಾರಿಗೆ ಇಲಾಖೆ, ಪೊಲೀಸ್ ಇಲಾಖೆ ಸೇರಿದಂತೆ ಇತರೆ ಇಲಾಖೆಗಳು ಹೆಚ್ಚಿನ ಜವಾಬ್ದಾರಿ ವಹಿಸಬೇಕು. ಎಲ್ಲಾ ಪ್ರಮುಖ ರಸ್ತೆಗಳಲ್ಲಿ ಸುರಕ್ಷತಾ ನಿಯಮಗಳ ಬಗ್ಗೆ ಮಾಹಿತಿ ನೀಡುವ ಪ್ರದರ್ಶನ ಫಲಕಗಳನ್ನು ಹಾಗೂ ಅಗತ್ಯವಿರುವ ಕಡೆಗಳಲ್ಲಿ ಸೂಚನಾ ಫಲಕ ಅಳವಡಿಸಬೇಕು. ನಿರಂತರ ಅರಿವಿನ ಚಟುವಟಿಕೆಗಳು ನಡೆಯಬೇಕು ಎಂದು ನಿರ್ದೇಶನ ನೀಡಿದರು. ಎಸ್‌ಪಿ ನಿಖೀಲ್ ಬಿ. ಮಾತನಾಡಿದರು.
ಸಾರಿಗೆ ಇಲಾಖೆಯ ಅಧಿಕಾರಿ ವಿನಯಾ ಕೋಟೇಕರ್, ಲೋಕೋಪಯೋಗಿ ಇಲಾಖೆಯ ಕಾರ್ಯಪಾಲಕ ಅಭಿಯಂತರ ಚನ್ನಬಸಪ್ಪ, ಜಿಲ್ಲಾ ಆರೋಗ್ಯಾಧಿಕಾರಿ ಡಾ| ಸುರೇಂದ್ರ ಬಾಬು ಸೇರಿ ವಿವಿಧ ಇಲಾಖೆಯ ಅಧಿಕಾರಿಗಳಿದ್ದರು.