Advertisement

ಕಾಂಗ್ರೆಸ್‌ ಸರ್ಕಾರದಿಂದಲೇ ಕೋಮು ಗಲಭೆ ಸೃಷ್ಟಿ

03:45 AM Jul 09, 2017 | |

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್‌ ಸರ್ಕಾರವೇ ರಾಜ್ಯದಲ್ಲಿ ಕೋಮು ಗಲಭೆ ಸೃಷ್ಟಿಸುತ್ತಿದ್ದು, ಎಐಸಿಸಿ ರಾಜ್ಯ ಉಸ್ತುವಾರಿ ವೇಣುಗೋಪಾಲ್‌ ಜತೆ ಸೇರಿಕೊಂಡು ಅರಾಜಕತೆ ಹುಟ್ಟುಹಾಕಲು ಹುನ್ನಾರ ನಡೆಸಲಾಗುತ್ತಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್‌.ಯಡಿಯೂರಪ್ಪ ಗಂಭೀರ ಆರೋಪ ಮಾಡಿದ್ದಾರೆ.

Advertisement

ದಕ್ಷಿಣ ಕನ್ನಡ ಜಿಲ್ಲೆ ಬಂಟ್ವಾಳದಲ್ಲಿ ಆರ್‌ಎಸ್‌ಎಸ್‌ ಕಾರ್ಯಕರ್ತ ಶರತ್‌ ಮಡಿವಾಳ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿ ಕೊಲೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲ್ಲೇಶ್ವರದ ಬಿಜೆಪಿ ಕಚೇರಿಯಲ್ಲಿ ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಶರತ್‌ ಮಡಿವಾಳ ಹತ್ಯೆಗೆ ಸಂಬಂಧಿಸಿದಂತೆ ರಾಷ್ಟ್ರೀಯ ತನಿಖಾ ದಳದಿಂದ (ಎನ್‌ಐಎ) ತನಿಖೆ ನಡೆಸಬೇಕು ಎಂದು ಆಗ್ರಹಿಸಿದ್ದಾರೆ.

ರಾಜ್ಯದಲ್ಲಿ ಕಾಂಗ್ರೆಸ್‌ ಅಧಿಕಾರಕ್ಕೆ ಬಂದ ಮೇಲೆ ಕಳೆದ ನಾಲ್ಕು ವರ್ಷದಲ್ಲಿ ಸಂಘ ಪರಿವಾರದ 20 ಕಾರ್ಯಕರ್ತರ ಹತ್ಯೆ ನಡೆದಿದೆ. ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡಲು ರಾಜ್ಯ ಸರ್ಕಾರ ವಿಫ‌ಲವಾಗಿದ್ದು, ಅದರಲ್ಲೂ ಮುಖ್ಯವಾಗಿ ಸಂಘ ಪರಿವಾರದವರನ್ನು ಕೇಂದ್ರವಾಗಿಟ್ಟುಕೊಂಡು ಹತ್ಯೆ, ಕೊಲೆ ಯತ್ನ ನಡೆಯುತ್ತಿದೆ. ಇಷ್ಟೆಲ್ಲಾ ನಡೆಯುತ್ತಿದ್ದರೂ ಸಿಎಂ ಸಿದ್ದರಾಮಯ್ಯ ಮೌನವಾಗಿದ್ದಾರೆ ಎಂದು ಕಿಡಿ ಕಾರಿದರು.

ಪ್ರಭಾಕರ ಭಟ್‌ ವಿರುದ್ಧ ಹುನ್ನಾರ: ಸಂಘ ಪರಿವಾರದ ಮುಖಂಡ ಕಲ್ಲಡ್ಕ ಪ್ರಭಾಕರ ಭಟ್‌ ಹಿಂದೂಗಳ ಪರವಾಗಿದ್ದಾರೆ ಎಂಬ ಕಾರಣಕ್ಕೆ ಫೇಸ್‌ಬುಕ್‌ನಲ್ಲಿ ಅವರಿಗೆ ಬೆದರಿಕೆ ಬಂದಿದ್ದು, ಈ ಬೆದರಿಕೆ ಹಿಂದೆಯೂ ಕಾಂಗ್ರೆಸ್‌ ನಾಯಕರ ಬೆಂಬಲವಿದೆ. ಈ ಹಿಂದೆ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ರಮಾನಾಥ್‌ ರೈ ಅವರು ಪ್ರಭಾಕರ ಭಟ್‌ ಮೇಲೆ 307 ಪ್ರಕರಣ ದಾಖಲಿಸಲು ಒತ್ತಡ ಹೇರಿದ್ದೇ ಇದಕ್ಕೆ ಉದಾಹರಣೆ ಎಂದೂಅವರು ಆರೋಪಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next