ಕುಂದಾಪುರ: ಉದ್ಯಮಿ ಗೋಪಾಲಕೃಷ್ಣ ರಾವ್ ಯಾನೆ ಕಟ್ಟೆ ಭೋಜಣ್ಣ (79) ಆತ್ಮಹತ್ಯೆ ಪ್ರಕರಣದಲ್ಲಿ ಆತ್ಮಹತ್ಯೆಗೆ ಪ್ರಚೋದನೆ ನೀಡಿದ ಆರೋಪದಲ್ಲಿ ಬಂಧಿತ ಆರೋಪಿ ಮೊಳಹಳ್ಳಿ ಗಣೇಶ್ ಶೆಟ್ಟಿ ಜಾಮೀನಿಗಾಗಿ ಸಲ್ಲಿಸಿದ ಅರ್ಜಿಯನ್ನು ಕುಂದಾಪುರದ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಮಂಗಳವಾರ ತಿರಸ್ಕರಿಸಿದೆ.
ಇದು ಬಹುಕೋಟಿ ವ್ಯವಹಾರಕ್ಕೆ ಸಂಬಂಧಿಸಿದ ಪ್ರಕರಣವಾಗಿದ್ದು, ಅದಲ್ಲದೆ ಕಟ್ಟೆ ಭೋಜಣ್ಣ ಅವರು ಆರೋಪಿ ಗಣೇಶ್ ಶೆಟ್ಟಿ ಮನೆಯಲ್ಲಿಯೇ ಪಿಸ್ತೂಲಿನಿಂದ ಗುಂಡಿಕ್ಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮಾತ್ರವಲ್ಲದೆ ಡೆತ್‌ನೋಟ್‌ನಲ್ಲಿ ಠಾಣಾಧಿಕಾರಿಯನ್ನು ಪ್ರಸ್ತಾಪಿಸಿ, ಬರೆದಿರುವುದರಿಂದ ಆರೋಪಿಗೆ ಜಾಮೀನು ನೀಡಬಾರದು ಎನ್ನುವುದಾಗಿ ಸರಕಾರಿ ಅಭಿಯೋಜಕ ಬೇಳೂರು ಪ್ರಕಾಶ್ಚಂದ್ರ ಶೆಟ್ಟಿ ವಾದ ಮಂಡಿಸಿದ್ದರು.
ಇದನ್ನು ಎತ್ತಿ ಹಿಡಿದ ಕುಂದಾಪುರದ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ನ್ಯಾ| ಅಬ್ದುಲ್ ರಹೀಮ್ ಹುಸೇನ್ ಶೇಖ್ ಅವರು ಆರೋಪಿ ಸಲ್ಲಿಸಿದ ಜಾಮೀನು ಅರ್ಜಿಯನ್ನು ತಿರಸ್ಕರಿಸಿದ್ದಾರೆ.
ಕಟ್ಟೆ ಭೋಜಣ್ಣ ಅವರು ಮೇ 26 ರಂದು ಬೆಳಗ್ಗೆ ಮೊಳಹಳ್ಳಿ ಗಣೇಶ್ ಶೆಟ್ಟಿ ಅವರ ಮನೆಯ ಸಿಟೌಟ್‌ನಲ್ಲಿ ತನ್ನದೇ ಪಿಸ್ತೂಲಿನಿಂದ ಗುಂಡಿಕ್ಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದರು.
ಪ್ರಕರಣದ ಇನ್ನೋರ್ವ ಆರೋಪಿ ಎಚ್. ಇಸ್ಮಾಯಿಲ್ ಈವರೆಗೆ ನಾಪತ್ತೆಯಾಗಿದ್ದು, ಆತನಿಗಾಗಿ ಪೊಲೀಸರು ಹುಡುಕಾಟ ಮುಂದುವರಿಸಿದ್ದಾರೆ.