ದೇವನಹಳ್ಳಿ: 2017ರಲ್ಲಿ ದಾಖಲಾದ ದೌರ್ಜನ್ಯ ಪ್ರಕರಣಗಳು ಇನ್ನೂ ಇತ್ಯರ್ಥಗೊಂಡಿರುವುದಿಲ್ಲ. ಪೊಲೀಸ್ ಅಧಿಕಾರಿಗಳು ಆದಷ್ಟು ಶೀಘ್ರವಾಗಿ ತನಿಖೆ ನಡೆಸಬೇಕು ಹಾಗೂ ಸಮಾಜ ಕಲ್ಯಾಣ ಇಲಾಖೆಯ ಅಧಿಕಾರಿಗಳು ಜಿಲ್ಲಾ ಹಾಗೂ ತಾಲೂಕು ಮಟ್ಟದಲ್ಲಿ ಪೊಲೀಸ್ ಇಲಾಖೆಯ ಸಂಪರ್ಕದಲ್ಲಿದ್ದು, ಸಹಕಾರ ನೀಡಬೇಕು ಮತ್ತು ಪರಿಹಾರವನ್ನು ಸಂತ್ರಸ್ತರಿಗೆ ತ್ವರಿತವಾಗಿ ಮಂಜೂರು ಮಾಡುವ ನಿಟ್ಟಿನಲ್ಲಿ ಕ್ರಮವಹಿಸಬೇಕು ಎಂದು ಜಿಲ್ಲಾಧಿಕಾರಿ ಕರೀಗೌಡ ತಿಳಿಸಿದರು.
ತಾಲೂಕಿನ ಚಪ್ಪರದ ಕಲ್ಲು ಸರ್ಕಲ್ ಬಳಿ ಇರುವ ಜಿಲ್ಲಾ ಸಂಕೀರ್ಣ ಜಿಲ್ಲಾಧಿಕಾರಿ ಸಭಾಂಗಣದಲ್ಲಿ ನಡೆದ ಅನುಸೂಚಿತ ಜಾತಿಗಳು ಮತ್ತು ಅನುಸೂಚಿತ ಬುಡಕಟ್ಟುಗಳ (ದೌರ್ಜನ್ಯ ಪ್ರತಿಬಂಧ) ನಿಯಮಗಳು 1995ರ ನಿಯಮ 17ರಂತೆ ರಚಿಸಿರುವ ಜಿಲ್ಲಾ ಮಟ್ಟದ ಜಾಗೃತಿ ಮತ್ತು ಉಸ್ತುವಾರಿ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಪರಿಶಿಷ್ಟ ಜಾತಿ ಹಾಗೂ ಪಂಗಡದ ಜನರ ಮೇಲೆ ನಡೆದಿರುವ ದೌರ್ಜನ್ಯಕ್ಕೆ ಸಂಬಂಧಿಸಿದಂತೆ ದಾಖಲಾಗಿರುವ ಪ್ರಕರಣಗಳು ತ್ವರಿತವಾಗಿ ಇತ್ಯರ್ಥಗೊಳಿಸಿ, ಸಂತ್ರಸ್ತರಿಗೆ ಶೀಘ್ರ ಪರಿಹಾರ ಕೊಡಿಸುವ ನಿಟ್ಟಿನಲ್ಲಿ ಅಧಿಕಾರಿಗಳು ಕ್ರಮವಹಿಸಬೇಕು ಎಂದರು.
ಸಾಕಷ್ಟು ದೌರ್ಜನ್ಯ ಪ್ರಕರಣಗಳು ದಾಖಲಾಗಿದರೂ ಸಹ, ಕಡಿಮೆ ಸಂಖ್ಯೆಯಲ್ಲಿ ಪರಿಹಾರಗಳು ನೀಡಲಾಗಿದೆ. ಸರ್ಕಾರದ ಪರಿಹಾರ, ಸೌಲಭ್ಯ ಅನ್ಯಾಯಕ್ಕೆ ಒಳಗಾದವರಿಗೆ ಸಿಗಬೇಕು. ಪ್ರಕರಣಗಳು ಶೀಘ್ರ ಇತ್ಯರ್ಥಗೊಂಡರೆ, ಅನ್ಯಾಯವಾದವರಿಗೆ ನ್ಯಾಯ ಕೊಡಿಸುವುದರೊಂದಿಗೆ, ಕಾನೂನು ಹಾಗೂ ಆಡಳಿತ ನಡೆಸುವವರ ಮೇಲೆ ನಂಬಿಕೆ ಹೆಚ್ಚಾಗುತ್ತದೆ ಎಂದು ಹೇಳಿದರು.
ಉಪ ವಿಭಾಗ ಹಾಗೂ ತಾಲೂಕು ಮಟ್ಟದಲ್ಲಿ ಜಾಗೃತಿ ಮತ್ತು ಉಸ್ತುವಾರಿ ಸಮಿತಿ ಸಭೆಗಳು ನಿಗದಿಪಡಿಸಿದಂತೆ ನಡೆಯುತ್ತಿಲ್ಲ ಎಂದು ಸಮಿತಿ ಸದಸ್ಯರು ಹಾಗೂ ಸಾರ್ವಜನಿಕರಿಂದ ದೂರುಗಳು ಕೇಳಿಬಂದಿವೆ. ಪ್ರತಿ 3 ತಿಂಗಳಿಗೊಮ್ಮೆ ವರ್ಷದಲ್ಲಿ 4 ಸಭೆಯನ್ನು ಕಡ್ಡಾಯವಾಗಿ ಉಪ ವಿಭಾಗ ಮಟ್ಟದಲ್ಲಿ ಉಪವಿಭಾಗಾಧಿಕಾರಿಗಳ ಅಧ್ಯಕ್ಷತೆ ಹಾಗೂ ತಾಲೂಕು ಮಟ್ಟದಲ್ಲಿ ತಹಶೀಲ್ದಾರ್‌ಗಳ ಅಧ್ಯಕ್ಷತೆಯಲ್ಲಿ ನಡೆಯುವಂತೆ ಸಮಾಜ ಕಲ್ಯಾಣ ಇಲಾಖೆ ಅಧಿಕಾರಿಗಳು ಎಚ್ಚರವಹಿಸಬೇಕು ಎಂದು ಹೇಳಿದರು.
ಸಭೆಯಲ್ಲಿ ಜಿಪಂ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಆರ್.ಲತಾ, ಮುಖ್ಯ ಯೋಜನಾಧಿಕಾರಿ ವಿನೂತಾ, ಹೆಚ್ಚವರಿ ಪಲೀಸ್ ವರಿಷ್ಠಾಧಿಕಾರಿ ಸಜಿತ್ ವಿ.ಜೆ, ಉಪವಿಭಾಗಾಧಿಕಾರಿ ಮಂಜುನಾಥ್, ಸಮಾಜ ಕಲ್ಯಾಣ ಇಲಾಖೆ ಉಪ ನಿರ್ದೇಶಕ ಪ್ರೇಮನಾಥ್ ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳು, ಜಿಲ್ಲಾ ಮಟ್ಟದ ಜಾಗೃತಿ ಮತ್ತು ಉಸ್ತುವಾರಿ ಸಮಿತಿಯ ಸದಸ್ಯರು ಭಾಗವಹಿಸಿದ್ದರು.