ನವದೆಹಲಿ: ಸತತ ಬರಗಾಲ, ಭಾರೀ ಪ್ರವಾಹ ಹಾಗೂ ರೋಗಗಳಿಂದ ತತ್ತರಿಸಿ ಹೋಗಿರುವ ಚಿಕ್ಕಮಗಳೂರು ಜಿಲ್ಲೆಯ ಕಾಫಿ, ಅಡಿಕೆ, ಮೆಣಸು ಮತ್ತು ಏಲಕ್ಕಿ ಬೆಳೆಗಾರರು ಮತ್ತು ರೈತರು ತೀವ್ರ ಸಂಕಷ್ಟದಲ್ಲಿದ್ದು, ಕೇಂದ್ರ ಸರ್ಕಾರ ತಕ್ಷಣವೇ ವಿಶೇಷ ಪ್ಯಾಕೇಜ್ ಘೋಷಣೆ ಮಾಡಬೇಕೆಂದು ಸಚಿವ ಸಿ.ಟಿ.ರವಿ ಅವರು ಒತ್ತಾಯಿಸಿದ್ದಾರೆ.
ಮಂಗಳವಾರ ನವದೆಹಲಿಯಲ್ಲಿ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರನ್ನು ಭೇಟಿಯಾಗಿ ಜಿಲ್ಲೆಯ ಕಾಫಿ ಬೆಳೆಗಾರರು ಮತ್ತು ರೈತರು ಎದುರಿಸುತ್ತಿರುವ ಸಂಕಷ್ಟಗಳನ್ನು ವಿವರಿಸಿದ ಸಚಿವ ರವಿ ಅವರು, ಕೂಡಲೇ ವಿಶೇಷ ಪ್ಯಾಕೇಜ್ ಘೋಷಿಸಿ ಹಿತ ಕಾಪಾಡುವಂತೆ ಮನವಿ ಮಾಡಿದರು.
ಜಿಲ್ಲೆಯ ಪ್ರಮುಖ ವಾಣಿಜ್ಯ ಬೆಳೆಗಳಾದ ಕಾಫಿ, ಅಡಿಕೆ, ಮೆಣಸು ಮತ್ತು ಏಲಕ್ಕಿ ಬೆಳೆಗಾರರು ಸತತ ಎರಡು ವರ್ಷದಿಂದ ಪ್ರವಾಹ ಉಂಟಾಗಿ ಬೆಳೆಗಳು ಸಂಪೂರ್ಣವಾಗಿ ಕೊಚ್ಚಿ ಹೋಗಿವೆ. ಇದರಿಂದ ಸಾವಿರಾರು ಕುಟುಂಬಗಳ ಬದುಕು ಮೂರಾಬಟ್ಟೆಯಾಗಿದೆ ಎಂದು ಮನವರಿಕೆ ಮಾಡಿಕೊಟ್ಟರು.
ಈ ಹಿಂದೆ 2015-16, 2016-17, 2017-18ರಲ್ಲಿ ಉಂಟಾದ ಸತತ ಬರಗಾಲ ಹಾಗೂ 2019-20 ಹಾಗೂ ಪ್ರಸಕ್ತ ವರ್ಷವೂ ಜಿಲ್ಲೆಯಲ್ಲಿ ಭಾರೀ ಪ್ರವಾಹ ಉಂಟಾಗಿ ಬೆಳೆದು ನಿಂತಿದ್ದ ಕಾಫಿ, ಅಡಿಕೆ, ಮೆಣಸು, ಏಲಕ್ಕಿ, ಬಾಳೆ, ಭತ್ತ ಸೇರಿದಂತೆ ಪ್ರಮುಖ ವಾಣಿಜ್ಯ ಬೆಳೆಗಳು ನೀರಿನಲ್ಲಿ ಕೊಚ್ಚಿ ಹೋಗಿವೆ ಎಂದು ಸಿ.ಟಿ.ರವಿ ವಿವರಿಸಿದರು.
ಇದರ ಜತೆಗೆ ಈ ಬಾರಿ ರಾಜ್ಯದಲ್ಲಿ ಕೋವಿಡ್-19 ಸೋಂಕು ಬಂದ ಪರಿಣಾಮ ರೈತರ ಪರಿಸ್ಥಿತಿ ಹೇಳತೀರದಾಗಿದೆ. ಒಂದಾದ ಮೇಲೊಂದರಂತೆ ಸಂಕಷ್ಟಗಳು ಎದುರಾಗುತ್ತಲೇ ಇರುವುದರಿಂದ ಸರ್ಕಾರ ನೆರವಿಗೆ ಧಾವಿಸಬೇಕೆಂದು ಅವರು ಮನವಿ ಮಾಡಿದ್ದಾರೆ.