ಬೆಳಗಾವಿ: ಜಿಲ್ಲೆಯಲ್ಲಿ ಕೋವಿಡ್ ನಿಯಂತ್ರಣಕ್ಕೆ ಸಾಕಷ್ಟು ಅಗತ್ಯ ಕ್ರಮಗಳನ್ನು ಕೈಗೊಂಡಿದ್ದು ಎರಡನೇ ಅಲೆಯ ಸೋಂಕಿನಿಂದ ಗುಣಮುಖರಾದವರ ಪ್ರಮಾಣ ಪ್ರತಿಶತ 75.91 ರಷ್ಟಿದೆ ಎಂದು ಜಿಲ್ಲಾಧಿಕಾರಿ ಎಂ.ಜಿ ಹಿರೇಮಠ ಹೇಳಿದರು.
ನಗರದಲ್ಲಿ ರವಿವಾರ ಪತ್ರಿಕಾಗೋಷ್ಠಿಯಲ್ಲಿ ಈ ಮಾಹಿತಿ ನೀಡಿದ ಅವರು, ಜಿಲ್ಲೆಯಲ್ಲಿ ಕಳೆದ ಮಾರ್ಚ್ ತಿಂಗಳಿಂದ ಇದುವರೆಗೆ 7580 ಜನರು ಸೋಂಕಿನಿಂದ ಗುಣಮುಖರಾಗಿದ್ದಾರೆ. ಈಗ ಒಟ್ಟು 10464 ಸಕ್ರೀಯ ಪ್ರಕರಣಗಳಿವೆ ಎಂದರು.
ಕಳೆದ ಮೂರು ತಿಂಗಳ ಅವಧಿಯಲ್ಲಿ 1,82740 ಜನರ ಗಂಟಲು ದ್ರವ ಮಾದರಿಯನ್ನು ಸಂಗ್ರಹಿಸಲಾಗಿದೆ. ಒಟ್ಟು 17982 ಪ್ರಕರಣಗಳು ದೃಢಪಟ್ಟಿವೆ. ಹೋಮ್ ಐಸೋಲೇಷನ್‌ದಲ್ಲಿ 8320 ಜನರು ಚಿಕಿತ್ಸೆ ಪಡೆಯುತ್ತಿದ್ದರೆ ಕೋವಿಡ್ ಆಸ್ಪತ್ರೆಯಲ್ಲಿ 2144 ಜನರು ಚಿಕಿತ್ಸೆ ಪಡೆಯುತ್ತಿದ್ದಾರೆ. ಈ ಮೂರು ತಿಂಗಳ ಅವಧಿಯಲ್ಲಿ 47 ಜನರು ಮೃತಪಟ್ಟಿದ್ದಾರೆ ಎಂದು ಮಾಹಿತಿ ನೀಡಿದರು.
ಜಿಲ್ಲೆಯಲ್ಲಿ ಕಳೆದ 10 ದಿನಗಳಲ್ಲಿ ಪ್ರತಿಶತ 38.43 ರಷ್ಟು ಸಕಾರಾತ್ಮಕ ಪ್ರಕರಣಗಳು ವರದಿಯಾಗಿದ್ದರೆ ಮರಣ ಪ್ರಮಾಣ ಶೇಕಡಾ 0.26 ರಷ್ಟಿದೆ. ಮರಣ ಪ್ರಮಾಣ ಕಡಿಮೆ ಮಾಡಲು ಸಾಕಷ್ಟು ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಲಾಗಿದ್ದು ಗಂಭೀರ ಸ್ಥಿತಿಯಲ್ಲಿರುವ ಸೋಂಕಿತರ ಮೇಲೆ ಹೆಚ್ಚಿನ ನಿಗಾ ವಹಿಸಲಾಗಿದೆ ಎಂದು ಹೇಳಿದರು.
ಜಿಲ್ಲೆಯ ಸರಕಾರಿ ಮತ್ತು ಖಾಸಗಿ ಆಸ್ಪತ್ರೆಗಳಲ್ಲಿ 4146 ಹಾಸಿಗೆಗಳು ಲಭ್ಯವಿದ್ದು ಇದರಲ್ಲಿರುವ 2144 ಆಮ್ಲಜನಕ ಹಾಸಿಗೆಗಳಲ್ಲಿ ಸೋಂಕಿತರು ಚಿಕಿತ್ಸೆ ಪಡೆಯುತ್ತಿದ್ದಾರೆ. ಜಿಲ್ಲಾ ಕೇಂದ್ರದಲ್ಲಿ ಒಂದು ಹಾಗೂ ಎಲ್ಲ ತಾಲೂಕುಗಳಲ್ಲಿ ಒಂದರಂತೆ ಕೋವಿಡ್ ವಾರ್ ರೂಮ್ ಸ್ಥಾಪಿಸಲಾಗಿದೆ. ಅಲ್ಲಿ ಹೋಮ್ ಐಸೋಲೇಷನ್‌ದಲ್ಲಿರುವ ಸೋಂಕಿತರನ್ನು ದೂರವಾಣಿ ಮೂಲಕ ಸಂಪರ್ಕಿಸಿ ಅವರ ಆರೋಗ್ಯ ಮತ್ತು ಚಿಕಿತ್ಸೆ ಬಗ್ಗೆ ವಿಚಾರಿಸಲಾಗುತ್ತಿದೆ. ಇದಲ್ಲದೆ ಸರಕಾರಿ ಮತ್ತು ಖಾಸಗಿ ಆಸ್ಪತ್ರೆಗಳಲ್ಲಿ ಲಭ್ಯವಿರುವ ಹಾಸಿಗೆಗಳ ವಿವರ ಪಡೆದುಕೊಳ್ಳಲಾಗುತ್ತದೆ ಎಂದರು.