ಹಾಸನ: ಜಿಲ್ಲೆಯಲ್ಲಿ ಮರಳು ದಂಧೆ ಹಾಗೂ ಅಕ್ರಮ ಮದ್ಯ ಮಾರಾಟಕ್ಕೆ ಕಡಿವಾಣ ಹಾಕಬೇಕು ಎಂದು ಜೆಡಿಎಸ್ ಮುಖಂಡ, ಮಾಜಿ ಸಚಿವ ಎಚ್.ಡಿ.ರೇವಣ್ಣ ಅವರು ಒತ್ತಾಯಿಸಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸಕಲೇಶಪುರ ಮತ್ತು ಬೇಲೂರು ತಾಲೂಕಿನಲ್ಲಿ ಮರಳು ದಂಧೆ ಅವ್ಯಾಹತವಾಗಿ ನಡೆಯುತ್ತಿದೆ.
ಸರ್ಕಾರಿ ಕಟ್ಟಡಗಳ ನಿರ್ಮಾಣ, ಪ್ರವಾಹ ಸಂತ್ರಸ್ತರ ಮನೆಗಳ ನಿರ್ಮಾಣ, ವಿವಿಧ ವಸತಿ ಯೋಜನೆಗಳಡಿ ಮನೆಗಳ ನಿರ್ಮಾಣ ಹಾಗೂ ದೇವಾಲಗಳ ನಿರ್ಮಾಣ ಕಾರ್ಯಗಳಿಗೂ ಮರಳು ಸಿಗುತ್ತಿಲ್ಲ. ಆದರೆ ಹೇಮಾವತಿ ಹಾಗೂ ಯಗಚಿ ನದಿಯಿಂದ ಹಗಲು – ರಾತ್ರಿ ಮರಳು ಸಾಗಣೆಯಾಗುತ್ತಿದೆ. ಈ ಬಗ್ಗೆ ಜಿಲ್ಲಾಧಿಕಾರಿ, ಜಿಲ್ಲಾ ಪೊಲೀಸ್ ಮುಖ್ಯಾಧಿಕಾರಿ ಹಾಗೂ ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಅಧಿಕಾರಿಗಳು ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಳ್ಳಬೇಕು ಎಂದರು.
ಅಕ್ರಮ ಮದ್ಯದಿಂದ ನೆಮ್ಮದಿ ಹಾಳು: ಗ್ರಾಮೀಣ ಪ್ರದೇಶಗಳಲ್ಲಿ ಅಕ್ರಮ ಮದ್ಯ ಮಾರಾಟ ಮಿತಿ ಮೀರಿದೆ. ಹಳ್ಳಿಗಳ ಗೂಡಂಗಡಿಗಳಲ್ಲಿ ಅಕ್ರಮ ಮದ್ಯ ಮಾರಾಟ ನಿರಂತರವಾಗಿ ನಡೆಯುತ್ತಿದೆ. ಕಾಫಿ, ಟೀ ಸಿಗದಿದ್ದರೂ ಮದ್ಯವಂತೂ ಹಳ್ಳಿಗಳಲ್ಲಿ ಸಿಗುವ ಪರಿಸ್ಥಿತಿ ನಿರ್ಮಾಣವಾಗಿದೆ. ಅಕ್ರಮ ಮದ್ಯ ಮಾರಾಟದಿಂದಾಗಿ ಗ್ರಾಮೀಣ ಪ್ರದೇಶದಲ್ಲಿ ನೆಮ್ಮದಿ ಹಾಳಾಗಿದ್ದು ಮಹಿಳೆಯರು ಹಿಡಿಶಾಪ ಹಾಕುತ್ತಿದ್ದಾರೆ ಎಂದು ಹೇಳಿದರು.
ಅಬಕಾರಿ ಇಲಾಖೆ ಅಧಿಕಾರಿಗಳು, ಪೊಲೀಸರು ದಿಢೀರ್ ದಾಳಿ ನಡೆಸಿ ಅಕ್ರಮ ಮದ್ಯ ಮಾರಾಟ ಮಾಡುವವರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ರೇವಣ್ಣ ಅವರು, ಸಾರಾಯಿ ಮಾರಾಟದ ದಿನಗಳಿಗಿಂತಲೂ ಈಗ ಅಕ್ರಮ ಮದ್ಯ ಮಾರಾಟ ಗ್ರಾಮೀಣ ಪ್ರದೇಶಗಳಲ್ಲಿ ಅನಾಹುತ ಸೃಷ್ಟಿಸುತ್ತಿದೆ ಎಂದು ಆತಂಕ ವ್ಯಕ್ತಪಡಿಸಿದರು.
ಸರ್ಕಾರದಲ್ಲಿ ಕಮಿಷನ್ ವ್ಯವಹಾರ: ಸರ್ಕಾರದಲ್ಲಿ ಭ್ರಷ್ಟಾಚಾರ ಮಿತಿ ಮೀರಿದೆ. ಭ್ರಷ್ಟಚಾರ ತುಂಬಿ ತುಳುಕುತ್ತಿದೆ ಎಂದು ಸ್ವತಃ ಮುಖ್ಯಮಂತ್ರಿ ಯಡಿಯೂರಪ್ಪ ಅವರೇ ಒಪ್ಪಿಕೊಂಡಿದ್ದಾರೆ. ದೊಡ್ಡ ಕಂಟ್ರಾಕ್ಟರ್‌ಗಳು ಮುಂಗಡವಾಗಿ ಕಮಿಷನ್ ಕೊಟ್ಟ ಮೇಲೆ ಕಾಮಗಾರಿಗಳಿಗೆ ಹಣ ಬಿಡುಗಡೆಯಾಗುತ್ತಿದೆ. ಶೇ.30 ರಷ್ಟು ಕಮಿಷನ್ ವಸೂಲಿ ಮಾಡಿಕೊಂಡು ಕಾಮಗಾರಿಗಳಿಗೆ ಹಣ ಬಿಡುಗಡೆ ಮಾಡುತ್ತಿದ್ದಾರೆ. ಚನ್ನರಾಯಪಟ್ಟಣದ ಒಬ್ಬ ಗುತ್ತಿಗೆದಾರರು 30 ಲಕ್ಷ ರೂ. ಕಮಿಷನ್ ಕೊಟ್ಟು 6 ಕೋಟಿ ರೂ. ಎಲ್‌ಒಸಿ ( ಹಣ) ಬಿಡುಗಡೆ ಮಾಡಿಸಿಕೊಂಡು ಬಂದಿದ್ದಾರೆ ಎಂದೂ ಹೇಳಿದರು.
ಎಚ್.ಡಿ. ಕುಮಾರಸ್ವಾಮಿ ಅವರು ಕಣ್ಣೀರು ಹಾಕುತ್ತಿದ್ದರು. ಆದರೆ ಯಡಿಯೂರಪ್ಪ ಅವರು ಜನರ ಕಣ್ಣೀರು ಒರೆಸುತ್ತಿದ್ದಾರೆ ಎಂದು ರಾಜ್ಯ ಬಿಜೆಪಿ ಅಧ್ಯಕ್ಷ ನಳೀನ್ ಕುಮಾರ್ ಕಟೀಲ್ ಅವರ ಹೇಳಿಕೆಗೆ ಪ್ರತಿಕ್ರಿಯಿಸಿದ ಎಚ್.ಡಿ.ರೇವಣ್ಣ ಅವರು, ಹೌದು ಕುಮಾರಸ್ವಾಮಿ ಅವರು ಹೊಟ್ಟೆಗೆ ಅನ್ನ ಇಲ್ಲದ ಜನರನ್ನು ಕಂಡು ಕಣ್ಣೀರು ಹಾಕುತ್ತಿದ್ದರು. ಆದರೆ ಯಡಿಯೂರಪ್ಪ ಅವರು ಹಣವಂತರ ಕಣ್ಣೀರು ಒರೆಸುತ್ತಿದ್ದಾರೆ ಎಂದು ತಿರುಗೇಟು ನೀಡಿದರು.
ವಿಧಾನ ಸಭೆಯಲ್ಲಿ ಪ್ರಸ್ತಾಪಿಸುವೆ: ಭ್ರಷ್ಟಾಚಾರದ ಬಗ್ಗೆ ವಿಧಾನಸಭೆಯಲ್ಲೂ ಪ್ರಸ್ತಾಪ ಮಾಡುವೆ. ಯಾವ, ಯಾವ ಕಾಮಗಾರಿಗಳಿಗೆ ಎಷ್ಟೆಷ್ಟು ಹಣ ಬಿಡುಗಡೆಯಾಗಿದೆ ಎಂಬುದರ ಬಗ್ಗೆ ಮಾಹಿತಿ ಹಕ್ಕಿನಲ್ಲಿ ಮಾಹಿತಿ ಪಡೆದುಕೊಳ್ಳುತ್ತಿದ್ದೇನೆ ಎಂದೂ ಹೇಳಿದ ರೇವಣ್ಣ ಅವರು, ಪ್ರಧಾನಿ ನರೇಂದ್ರ ಮೋದಿ ಹಾಗೂ ಅಮಿತ್ ಶಾ ನವ ಭಾರತ ನಿರ್ಮಾಣ ಮಾಡುತಿದ್ದರೆ, ಇಲ್ಲಿ ಯಡಿಯೂರಪ್ಪ ಮತ್ತು ಅವರ ಪುತ್ರವಿಜಯೇಂದ್ರ ಅವರು ಕಲ್ಯಾಣ ಕರ್ನಾಟಕ ನಿರ್ಮಾಣ ಮಾಡುತ್ತಿದ್ದಾರೆ ಎಂದು ವ್ಯಂಗ್ಯವಾಡಿದರು.