ಕೋಲ್ಕತಾ: ದಕ್ಷಿಣ ಅಂಡಮಾನ್ ಸಮುದ್ರದಲ್ಲಿನ ಕಡಿಮೆ ಒತ್ತಡದ ಪ್ರದೇಶವು ಚಂಡಮಾರುತವಾಗಿ ತೀವ್ರಗೊಳ್ಳುವ ಸಾಧ್ಯತೆ ಇದ್ದು, ಇನ್ನೆರಡು ದಿನಗಳಲ್ಲಿ ಆಂಧ್ರಪ್ರದೇಶ ಮತ್ತು ಒಡಿಶಾ ಕರಾವಳಿ ಪ್ರದೇಶದಲ್ಲಿ ಚಂಡಮಾರುತ ಬಡಿದಪ್ಪಳಿಸುವ ಸಾಧ್ಯತೆ ಇದ್ದಿರುವುದಾಗಿ ವರದಿ ತಿಳಿಸಿದೆ.
ಇದನ್ನೂ ಓದಿ:ಸಂಬಂಧಕ್ಕೆ ಅಡ್ಡಿಯಾದ ಪ್ರೇಯಸಿಯ ತಾಯಿಯನ್ನೇ ಹತ್ಯೆಗೈದ ಪ್ರಿಯಕರ
ಈ ಚಂಡಮಾರುತಕ್ಕೆ ಅಸಾನಿ ಎಂದು ಹೆಸರಿಡಲಾಗಿದ್ದು, ಚಂಡಮಾರುತದ ಪರಿಣಾಮ ಹಲವು ಪ್ರದೇಶಗಳಲ್ಲಿ ಮಳೆಯಾಗಲಿದೆ ಎಂದು ವರದಿ ಹೇಳಿದೆ. ಕಡಿಮೆ ಒತ್ತಡ ವಾಯುವ್ಯ ದಿಕ್ಕಿನಲ್ಲಿ ಚಲಿಸುವ ಮೂಲಕ ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತಕ್ಕೆ ಕಾರಣವಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆಯ ಡೈರೆಕ್ಟರ್ ಜನರಲ್ ಮೃತ್ಯುಂಜಯ್ ಮೊಹ್ ಪಾತ್ರಾ ತಿಳಿಸಿದ್ದಾರೆ.
ಮೇ 10ರಂದು ಒಡಿಶಾ, ಆಂಧ್ರ ಕರಾವಳಿ ಪ್ರದೇಶದಲ್ಲಿ ಚಂಡಮಾರುತ ಬಡಿದಪ್ಪಳಿಸುವ ಸಾಧ್ಯತೆ ಇದೆ. ಬಂಗಾಳ ಕೊಲ್ಲಿಯಲ್ಲಿ ಚಂಡಮಾರುತ ಎದ್ದೇಳಲಿರುವ ನಿಟ್ಟಿನಲ್ಲಿ ಕರಾವಳಿ ಜಿಲ್ಲೆಗಳಲ್ಲಿರುವ ಜಿಲ್ಲಾಧಿಕಾರಿಗಳು ಮುಂಜಾಗ್ರತಾ ಕ್ರಮ ತೆಗೆದುಕೊಳ್ಳಲು ಸಿದ್ಧತೆ ನಡೆಸಬೇಕೆಂದು ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಪ್ರದೀಪ್ ಕುಮಾರ್ ಜೇನಾ ಮಾಹಿತಿ ನೀಡಿರುವುದಾಗಿ ವರದಿ ಹೇಳಿದೆ.
ಒಡಿಶಾದ 18 ಜಿಲ್ಲೆಗಳಲ್ಲಿ ಮುಂಜಾಗ್ರತಾ ಕ್ರಮ ತೆಗೆದುಕೊಳ್ಳುವಂತೆ ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ಅಂಡಮಾನ್ ಸಮುದ್ರ ಪ್ರದೇಶದಲ್ಲಿ ಮೀನುಗಾರರು ಮೀನುಗಾರಿಕೆಗೆ ತೆರಳದಂತೆ ಸೂಚನೆ ನೀಡಲಾಗಿದೆ. ಮೇ 10 ಮತ್ತು ಮೇ 14ರ ನಡುವೆ ಚಂಡಮಾರುತ ಬಡಿದಪ್ಪಳಿಸುವ ಸಾಧ್ಯತೆ ಇದ್ದಿರುವುದಾಗಿ ಅಧಿಕಾರಿಗಳು ತಿಳಿಸಿದ್ದಾರೆ.