ಬೆಂಗಳೂರು: ಬಹಳಷ್ಟು ಕುತೂಹಲಕ್ಕೆ ಕಾರಣವಾಗಿದ್ದ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಅಧ್ಯಕ್ಷ ಸ್ಥಾನದ ಆಯ್ಕೆಯನ್ನು ಕಾಂಗ್ರೆಸ್ ಹೈಕಮಾಂಡ್ ಅಂತಿಮಗೊಳಿಸಿದ್ದು ರಾಜ್ಯದ ಪ್ರಭಾವಿ ಒಕ್ಕಲಿಗ ನಾಯಕ ಡಿ ಕೆ ಶಿವಕುಮಾರ್ ಅವರನ್ನು ಕೆಪಿಸಿಸಿ ಅಧ್ಯಕ್ಷರನ್ನಾಗಿ ನೇಮಿಸಿ ಇಂದು ಆದೇಶ ಹೊರಡಿಸಿದೆ.
ಕಾಂಗ್ರೆಸ್ ಪಕ್ಷದ ಅಧ್ಯಕ್ಷೆಯಾಗಿರುವ ಸೋನಿಯಾ ಗಾಂಧಿ ಈ ಆದೇಶವನ್ನು ಹೊರಡಿಸಿದ್ದು ಇದರ ಜೊತೆಗೆ ಕೆಪಿಸಿಸಿಗೆ ಇತರೇ ಪದಾಧಿಕಾರಿಗಳನ್ನೂ ನೇಮಿಸಿ ಆದೇಶ ಹೊರಡಿಸಲಾಗಿದೆ. ನೂತನ ಅಧ್ಯಕ್ಷ ಡಿಕೆಶಿ ಅವರ ಕೈ ಬಲಪಡಿಸಲು ಮೂವರು ಕಾರ್ಯಾಧ್ಯಕ್ಷರನ್ನು ನೇಮಿಸಲಾಗಿದೆ. ಈಶ್ವರ ಖಂಡ್ರೆ, ಸತೀಶ್ ಜಾರಕಿಹೊಳಿ ಮತ್ತು ಸಲೀಂ ಅಹಮ್ಮದ್ ಅವರು ಕೆಪಿಸಿಸಿಯ ನೂತನ ಕಾರ್ಯಾಧ್ಯಕ್ಷರಾಗಿ ಜವಾಬ್ದಾರಿಯನ್ನು ನಿರ್ವಹಿಸಲಿದ್ದಾರೆ.
ಮಾಜೀ ಮುಖ್ಯಮಂತ್ರಿ ಮತ್ತು ವಿಧಾನಸಭೆಯಲ್ಲಿ ಪ್ರತಿಪಕ್ಷದ ನಾಯಕರಾಗಿರುವ ಸಿದ್ಧರಾಮಯ್ಯ ಅವರು ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕರಾಗಿಯೂ ಮುಂದುವರಿಯಲಿದ್ದಾರೆ.
ಕೆಪಿಸಿಸಿ ಅಧ್ಯಕ್ಷರಾಗಿದ್ದ ದಿನೇಶ್ ಗುಂಡೂರಾವ್ ಅವರ ರಾಜೀನಾಮೆಯಿಂದ ರಾಜ್ಯದಲ್ಲಿ ಪಕ್ಷಾಧ್ಯಕ್ಷ ಸ್ಥಾನ ತೆರವಾಗಿತ್ತು. ಉಪಚುನಾವಣೆಯಲ್ಲಿ ಪಕ್ಷದ ಹೀನಾಯ ನಿರ್ವಹಣೆಯ ಹಿನ್ನಲೆಯಲ್ಲಿ ಪಕ್ಷಾಧ್ಯಕ್ಷ ಸ್ಥಾನಕ್ಕೆ ದಿನೇಶ್ ಗುಂಡೂರಾವ್ ಅವರು ರಾಜೀನಾಮೆಯನ್ನು ನೀಡಿದ್ದರು.