Advertisement

ಕೋವಿಡ್-19 ವಿಚಾರದಲ್ಲಿ ನಾವು ರಾಜಕೀಯ ಮಾಡುವುದಿಲ್ಲ; ಆದರೆ ಸಚಿವರ ನಡುವೆಯೇ ಸಮನ್ವಯವಿಲ್ಲ

09:07 AM Mar 30, 2020 | keerthan |

ಬೆಂಗಳೂರು: ಬಹಳ ತಡವಾಗಿ ಆದರೂ ಸಿಎಂ ಯಡಿಯೂರಪ್ಪನವರು ಸರ್ವಪಕ್ಷ ಸಭೆ ಕರೆದಿರುವುದು ಅಭಿನಂದನಾರ್ಹ. ಕೋವಿಡ್-19 ವಿಚಾರದಲ್ಲಿ ನಾವು ರಾಜಕೀಯ ಮಾಡಲು ಹೋಗುವುದಿಲ್ಲ. ರಾಜಕೀಯ ಬೇರೆ, ಈ ನಾಡಿನ ಸಮಸ್ಯೆಯೇ ಬೇರೆ. ಒಂದಕ್ಕೊಂದು ಬೆರೆಸಲು ಹೋಗುವುದಿಲ್ಲ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಹೇಳಿದರು.

Advertisement

ವಿಧಾನಸೌಧದಲ್ಲಿ ಸಿಎಂ ಯಡಿಯೂರಪ್ಪನವರು ಕರೆದಿದ್ದ ಸರ್ವಪಕ್ಷ ಸಭೆಯಲ್ಲಿ ಮಾತನಾಡಿದ ಅವರು ಕೋವಿಡ್-19 ಪರಿಸ್ಥಿತಿ ನಿಯಂತ್ರಣ, ನಿರ್ವಹಣೆಗೆ ಸರಕಾರ ಕೈಗೊಳ್ಳುವ ಎಲ್ಲ ಸಕಾರಾತ್ಮಕ ಕ್ರಮಗಳಿಗೆ ನಮ್ಮ ಪಕ್ಷದ, ವೈಯಕ್ತಿಕವಾಗಿ ನನ್ನ ಬೆಂಬಲವಿದೆ ಎಂದರು.

ಕೋವಿಡ್-19 ನಿಯಂತ್ರಣ, ಪರಿಸ್ಥಿತಿ ನಿರ್ವಹಣೆಗೆ ಸರಕಾರದ ಕ್ರಮಗಳು ವಿಶ್ವ ಆರೋಗ್ಯ ಸಂಸ್ಥೆಯ ನಿಯಮಗಳಿಗೆ, ಮಾರ್ಗಸೂಚಿಗಳಿಗೆ ಅನುಗುಣವಾಗಿ ಇರಬೇಕೇ ಹೊರತು ಸರಕಾರದ ಪ್ರತಿನಿಧಿಗಳ, ಯಾವುದೋ ರಾಜಕೀಯ ಪಕ್ಷದ ತತ್ವ, ಸಿದ್ಧಾಂತ, ರಾಜಕೀಯ ಲಾಭಕ್ಕೆ ಬಳಕೆ ಆಗಬಾರದು. ಕೋವಿಡ್-19 ಸೋಂಕು ಇಡೀ ರಾಜ್ಯದ, ದೇಶದ, ವಿಶ್ವದ ಸಮಸ್ಯೆ. ಬರೀ ಆಡಳಿತರೂಢ ಸರಕಾರದ, ಪಕ್ಷದ ಸಮಸ್ಯೆ ಅಲ್ಲ. ಇದು ಎಲ್ಲರ ಸಮಸ್ಯೆ. ಎಲ್ಲರೂ ಒಗ್ಗೂಡಿ ಹೋರಾಡಬೇಕು. ಈ ವಿಚಾರದಲ್ಲಿ ಒಬ್ಬರು ಹೆಚ್ಚು, ಒಬ್ಬರು ಕಡಿಮೆ ಎಂಬುದಿಲ್ಲ ಎಂದರು.

ಮುಂದುವರಿದು ಮಾತನಾಡಿದ ಅವರು ಆತಂಕಕಾರಿ ವಿಚಾರವೆಂದರೆ ಈ ಪಿಡುಗು ನಿವಾರಣೆ ವಿಚಾರದಲ್ಲಿ ಡಿಸಿಎಂಗಳು, ಸಚಿವರ ನಡುವೆ ಸಮನ್ವಯ ಇಲ್ಲ. ಒಬ್ಬೊಬ್ಬರು ಒಂದೊಂದು ಹೇಳಿಕೆ ಕೊಟ್ಟು ಜನರಲ್ಲಿ ಗೊಂದಲ, ಭಯ ಮೂಡಿಸುತ್ತಿದ್ದಾರೆ. ನಾನು ಅವರ ಹೆಸರು ಹೇಳಲು ಹೋಗುವುದಿಲ್ವ. ಆದರೆ ಅವರಲ್ಲಿ ಸಮನ್ವಯ ತರುವ ಜವಾಬ್ದಾರಿ ಸಿಎಂ ಆಗಿ ನಿಮ್ಮದು. ಇಲ್ಲದಿದ್ದರೆ ಜನ ಮತ್ತಷ್ಟು ಹೆದರಿ ಹೋಗುತ್ತಾರೆ ಎಂದರು.

ಸಾಮಾನ್ಯ ಜನರು, ಕೋವಿಡ್-19 ಸೋಂಕು ನಿವಾರಣೆಗೆ ಹೋರಾಡುತ್ತಿರುವ ವೈದ್ಯಕೀಯ, ಅರೆ ವೈದ್ಯಕೀಯ ಸಿಬ್ಬಂದಿ, ಪೊಲೀಸರು, ಪೌರಕಾರ್ಮಿಕರು ಯಾರಿಗೂ ಮಾಸ್ಕ್ ಸಿಗುತ್ತಿಲ್ಲ. ಇದನ್ನು ಉಚಿತವಾಗಿ ಒದಗಿಸಲು ಅಗತ್ಯ ಕ್ರಮ ಕೈಗೊಳ್ಳಬೇಕು. ರಕ್ಷಕರಿಗೇ ಸುರಕ್ಷೆ ಇಲ್ಲದಿದ್ದರೆ ಹೇಗೆ ಎಂದು ಸರಕಾರವನ್ನು ಪ್ರಶ್ನಿಸಿದರು.

Advertisement

ದಿನನಿತ್ಯದ ವಸ್ತುಗಳು, ಆಹಾರ ಸಿಗದೆ ಜನ ಕಂಗಾಲಾಗಿದ್ದಾರೆ. ಇಲ್ಲಿ ಇರಲೂ ಆಗದೆ, ತಮ್ಮೂರಿಗೆ ಹೋಗಲು ಆಗದೆ ಪರಿತಪಿಸುತ್ತಿದ್ದಾರೆ. ಇದಕ್ಕೊಂದು ಸ್ಪಷ್ಟ ಪರಿಹಾರ ಕಲ್ಪಿಸಬೇಕು. ರೈತರು ಬೆಳೆದ ಬೆಳೆಗಳು ವಿಲೇವಾರಿ ಆಗುತ್ತಿಲ್ಲ. ರೇಷ್ಮೆ ಗೂಡುಗಳು ಬಿಕರಿ ಆಗದೆ ರೇಷ್ಮೆ ಬೆಳೆಗಾರರು ಕಂಗಾಲಾಗಿದ್ದಾರೆ. ಅವರು, ಇವರು ಎನ್ನದೇ ಎಲ್ಲ ವರ್ಗದವರ ಸಂಕಷ್ಟಕ್ಕೆ ಪರಿಹಾರ ಸೂತ್ರಗಳನ್ನು ರೂಪಿಸಬೇಕು ಎಂಬ ಸಲಹೆಗಳನ್ನು ಡಿಕೆಶಿ ನೀಡಿದರು.

Advertisement

Udayavani is now on Telegram. Click here to join our channel and stay updated with the latest news.

Next