ಧಾರವಾಡ: ಮುಂಗಾರು ಹಂಗಾಮಿನ ಸಿದ್ಧತೆಯಲ್ಲಿ ತೊಡಗಿರುವ ರೈತರಿಗೆ ಯಾವುದೇ ಕಾರಣಕ್ಕೂ ಲಾಕ್‌ಡೌನ್ ಅವಧಿಯಲ್ಲಿ ತೊಂದರೆಯಾಗಬಾರದು ಎಂದು ಶಾಸಕ ಅಮೃತ ದೇಸಾಯಿ ಹೇಳಿದರು.
ತಾಲೂಕಿನ ಗರಗ ಗ್ರಾಮದ ಸಮುದಾಯ ಭವನದಲ್ಲಿ ಕೋವಿಡ್ 19 ನಿಯಂತ್ರಣಕ್ಕೆ ಕೈಗೊಂಡ ಕ್ರಮಗಳ ಕುರಿತಂತೆ ನಡೆದ ಗರಗ ಹೋಬಳಿ ಮಟ್ಟದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಮುಂಗಾರು ಮಳೆ ಆರಂಭವಾಗುತ್ತಿದ್ದು, ರೈತರು ಬಿತ್ತನೆಗೆ ಸಿದ್ಧಗೊಳಿಸಲು ಹೋಗುತ್ತಿದ್ದು, ಪೊಲೀಸ್ ಅ ಧಿಕಾರಿಗಳು ಹಾಗೂ ಚೆಕ್‌ಪೋಸ್ಟ್‌ಗಳಲ್ಲಿ ಕರ್ತವ್ಯ ನಿರ್ವಹಿಸುವ ಅಧಿಕಾರಿಗಳು ಯಾವುದೇ ತೊಂದರೆ ನೀಡಬಾರದು. ಸಕಾಲಕ್ಕೆ ಬೀಜ, ಗೊಬ್ಬರ ಸಿಗುವಂತೆ ಮುಂಜಾಗ್ರತೆ ವಹಿಸಬೇಕು. ಇದರ ಜತೆಗೆ ಪಡಿತರ ವಿತರಣೆಯಲ್ಲಿ ಯಾವುದೇ ಲೋಪವಾಗದಂತೆ, ಪಡಿತರ ತೂಕದಲ್ಲಿ ವ್ಯತ್ಯಾಸ-ಮೋಸವಾಗದಂತೆ ಸಂಬಂಧಿಸಿದ ಅಧಿಕಾರಿಗಳು ನೋಡಿಕೊಳ್ಳಬೇಕು. ಗ್ರಾಮೀಣ ಭಾಗದ ಪಡಿತರ ವಿತರಣಾ ಕೇಂದ್ರಗಳಿಗೆ ಭೇಟಿ ನೀಡಿ ಖಚಿತ ಪಡಿಸಿಕೊಳ್ಳಬೇಕೆಂದು ಸೂಚಿಸಿದರು.
ತಹಶೀಲ್ದಾರ್ ಸಂತೋಷ ಬಿರಾದಾರ ಮಾತನಾಡಿ, ಸಾರ್ವಜನಿಕರಿಗೆ ಕಿರಾಣಿ ಹಾಗೂ ತರಕಾರಿ ಸೇರಿದಂತೆ ಅಗತ್ಯ ವಸ್ತುಗಳ ಸರಬರಾಜು ಆಗುತ್ತಿರುವ ಬಗ್ಗೆ ಗಮನಿಸಲಾಗುತ್ತಿದೆ. ಬಿಪಿಎಲ್ ಕಾರ್ಡ್ ಹೊಂದಿರುವವರಿಗೆ ಮುಂದಿನ ಎರಡು ತಿಂಗಳ ಅವಧಿ ಪಡಿತರ ವಿತರಣೆಗೆ ಕ್ರಮ ಕೈಗೊಳ್ಳಲಾಗಿದೆ. ಧಾರವಾಡ ತಾಲೂಕು ವ್ಯಾಪ್ತಿಯಲ್ಲಿ ಸಂತ್ರಸ್ತರ ಕೇಂದ್ರಗಳನ್ನು ತೆರೆಯಲಾಗಿದ್ದು, ಅಲ್ಲಿ ಕಾರ್ಮಿಕರು, ಕೃಷಿ ಕೂಲಿ ಕಾರ್ಮಿಕರು ಹಾಗೂ ಹೊರ ಜಿಲ್ಲೆಯ ವ್ಯಕ್ತಿಗಳಿಗೆ ಆಶ್ರಯ ಕಲ್ಪಿಸಲಾಗಿದೆ. ಅವರಿಗೆ ಉಚಿತ ಊಟ, ವಸತಿ ಹಾಗೂ ಔಷಧ ಸೇರಿದಂತೆ ಅಗತ್ಯ ವಸ್ತುಗಳನ್ನು ನೀಡಲಾಗಿದೆ ಎಂದರು.
ಸಹಾಯಕ ಕೃಷಿ ನಿರ್ದೇಶಕ ಸಿ.ಜಿ. ಮೆತ್ರಿ ಮಾತನಾಡಿ, ಕೃಷಿ ಚಟುವಟಿಕೆ ಆರಂಭಿಸಲು ರೈತರಿಗೆ ಅಗತ್ಯವಿರುವ ಬೀಜ, ರಸಗೊಬ್ಬರ, ಕೃಷಿ ಉಪಕರಣ, ಔಷಧಗಳ ಪೂರೈಕೆಗೆ ಅಗತ್ಯ ಕ್ರಮ ಕೈಗೊಳ್ಳಲಾಗಿದೆ. ಬೀಜ, ರಸಗೊಬ್ಬರ ಸಾಕಷ್ಟು ದಾಸ್ತಾನು ಇದ್ದು, ರೈತರ ಬೇಡಿಕೆಗೆ ಅನುಗುಣವಾಗಿ ಪೂರೈಸಲು ಸಿದ್ಧತೆ ಮಾಡಿಕೊಳ್ಳಲಾಗಿದೆ. ಬೆಂಬಲ ಬೆಲೆ ಯೋಜನೆಯಡಿ ಕಡಲೆ ಖರೀದಿ ಕೇಂದ್ರಗಳನ್ನು ಮರು ಆರಂಭಿಸಲಾಗಿದ್ದು, ರೈತರು ಖರೀದಿ ಕೇಂದ್ರಗಳಿಗೆ ಕಡಲೆ ತರುತ್ತಿದ್ದಾರೆ ಎಂದರು.
ಧಾರವಾಡ ಗ್ರಾಮೀಣ ಸಿಪಿಐ ಎಸ್ .ಸಿ. ಪಾಟೀಲ ಮಾತನಾಡಿ, ಧಾರವಾಡ ಗ್ರಾಮೀಣ ಭಾಗದಲ್ಲಿ ಕೋವಿಡ್ 19 ನಿಯಂತ್ರಣಕ್ಕೆ ಕೈಗೊಂಡ ಕ್ರಮಗಳ ಕುರಿತು ಹಾಗೂ ಲಾಕ್‌ಡೌನ್ ಮತ್ತು ನಿಷೇಧಾಜ್ಞೆ ಉಲ್ಲಂಘಿಸಿ ಅನಗತ್ಯವಾಗಿ ಸಂಚರಿಸುವವರ ಹಾಗೂ ವಾಹನ ಬಳಸುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗಿದ್ದು, ಸಾರ್ವಜನಿಕರಿಗೆ ಧ್ವನಿವರ್ಧಕ ಮೂಲಕ ಮಾಹಿತಿ ನೀಡಲಾಗಿದೆ ಎಂದರು.
ತಾಪಂ ಕಾರ್ಯ ನಿರ್ವಾಹಕ ಅಧಿಕಾರಿ ಎಸ್.ಎಸ್. ಕಾದೊಳ್ಳಿ ಸೇರಿದಂತೆ ಗರಗ ಹೋಬಳಿ ವ್ಯಾಪ್ತಿಯ ವಿವಿಧ ಗ್ರಾಪಂ ಅಭಿವೃದ್ಧಿ ಅಧಿಕಾರಿಗಳು, ಗ್ರಾಪಂ ಕಾರ್ಯದರ್ಶಿಗಳು, ಗ್ರಾಮ ಲೆಕ್ಕಾಧಿಕಾರಿಗಳು ಮತ್ತು ವಿವಿಧ ಇಲಾಖೆಗಳ ಅಧಿಕಾರಿಗಳು ಇದ್ದರು.