ಬೆಂಗಳೂರು: ಹೈನುಗಾರಿಕೆ ಈಗ ರೈತರಿಗೆ ಲಾಭದಾಯಕವಾಗಿ ಉಳಿದಿಲ್ಲ. ಆ ಹಿನ್ನೆಲೆಯಲ್ಲಿ ಕೆಎಂಎಫ್ ರೈತರಿಗೆ ಮೇವನ್ನು ಉಚಿತವಾಗಿ ನೀಡುವ ಕೆಲಸ ಮಾಡಬೇಕೆಂದು ಸಹಕಾರ ಸಚಿವ ಕೆ.ಎನ್.ರಾಜಣ್ಣ ಹೇಳಿದ್ದಾರೆ.
ಕೆಎಂಎಫ್ ಮತ್ತು ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಲ ರವಿವಾರ ಬೆಂಗಳೂರಿನ ಸೆಂಟ್ರಲ್ ಕಾಲೇಜಿನ ಜ್ಞಾನಜ್ಯೋತಿ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ 70ನೇ ಅಖೀಲ ಭಾರತ ಸಹಕಾರ ಸಪ್ತಾಹ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ಹೈನುಗಾರಿಕೆಯನ್ನೇ ನಂಬಿ ಜೀವನ ಸಾಗಿಸುವ ರೈತರಿಗೂ ತೃಪ್ತಿಕರವಾದ ವರಮಾನ ಬರುತ್ತಿಲ್ಲ. ಹಾಲಿನ ಬೆಲೆಯನ್ನು 5 ರೂ. ಹೆಚ್ಚಿಸುವಂತೆ ಈ ಹಿಂದೆ ಸರಕಾರಕ್ಕೆ ಮನವಿ ಮಾಡಲಾಗಿತ್ತು. ಒಕ್ಕೂಟದ ಮನವಿಯನ್ನು ಒಪ್ಪಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು 3 ರೂ. ಹೆಚ್ಚಿಸಿ ಇದನ್ನು ನೇರವಾಗಿ ರೈತರಿಗೆ ನೀಡಬೇಕೆಂದು ತಾಕೀತು ಮಾಡಿದ್ದರು. ಆದರೆ ಸರಕಾರ ಹೆಚ್ಚಿಸಿರುವ ಹಣವನ್ನು ಕೆಲವು ಹಾಲು ಉತ್ಪಾದಕ ಸಂಸ್ಥೆಗಳು ರೈತರಿಗೆ ತಲುಪಿಸುತ್ತಿಲ್ಲ ಎಂಬುದು ನನ್ನ ಗಮನಕ್ಕೆ ಬಂದಿದೆ. ಕೆಲವು ಸಂಸ್ಥೆಗಳು ನಷ್ಟದಲ್ಲಿರುವುದು ಇದಕ್ಕೆ ಕಾರಣವಾಗಿದ್ದು, ಆದ್ದರಿಂದ ಸುಮ್ಮನಿದ್ದೇನೆ ಎಂದರು.
ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಲದ ಅಧ್ಯಕ್ಷ ಮತ್ತು ಶಾಸಕ ಜಿ.ಟಿ.ದೇವೇಗೌಡ ಮಾತನಾಡಿ, ಸಹಕಾರ ರಂಗದಲ್ಲಿ ಮಹಿಳೆಯರು ಮತ್ತು ಯುವ ಸಮುದಾಯ ಹೆಚ್ಚಿನ ಸಂಖ್ಯೆಯಲ್ಲಿ ತೊಡಗಿಕೊಳ್ಳಬೇಕು. ದೇಶದ ಆರ್ಥಿಕ ಅಭಿವೃದ್ಧಿಗಾಗಿ ಹೆಚ್ಚಿನ ಸಂಖ್ಯೆಯಲ್ಲಿ ಮಹಿಳೆಯರು ಗುಡಿ ಕೈಗಾರಿಕೆಯಲ್ಲಿ ತೊಡಗಿಕೊಳ್ಳಬೇಕು ಎಂದರು.
ಕೆಎಂಎಫ್ನ ವ್ಯವಸ್ಥಾಪಕ ನಿರ್ದೇಶಕ ಎಂ.ಕೆ.ಜಗದೀಶ್, ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಲದ ವ್ಯವಸ್ಥಾಪಕ ನಿರ್ದೇಶಕ ಕೆ.ಎಸ್.ನವೀನ್, ದಕ್ಷಿಣ ಕನ್ನಡ ಹಾಲು ಒಕ್ಕೂಟದ ಕಾಪು ದಿವಾಕರ ಶೆಟ್ಟಿ, ಕರ್ನಾಟಕ ರಾಜ್ಯ ಸಹಕಾರ ಕುಕ್ಕಟ ಮಹಾಮಂಡಲದ ಅಧ್ಯಕ್ಷ ಡಿ.ಕೆ.ಕಾಂತರಾಜು, ಬೆಂಗಳೂರು ನಗರ ಜಿಲ್ಲಾ ಸಹಕಾರ ಒಕ್ಕೂಟದ ಅಧ್ಯಕ್ಷ ಎಚ್.ಟಿ.ನಾಗೇಶ್ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.