Advertisement

ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ನಿಷೇಧಾಜ್ಞೆ : ಎಲ್ಲಾ ಶಾಲಾ –ಕಾಲೇಜುಗಳಿಗೆ ನಾಳೆ ರಜೆ

09:52 AM Dec 20, 2019 | Hari Prasad |

ಮಂಗಳೂರು: ಪೌರತ್ವ ತಿದ್ದುಪಡಿ ಕಾಯ್ದೆಯನ್ನು ವಿರೋಧಿಸಿ ಮಂಗಳೂರು ನಗರದಲ್ಲಿ ನಿಷೇಧಾಜ್ಞೆಯನ್ನು ಉಲ್ಲಂಘಿಸಿ ಇಂದು ನಡೆದ ಪ್ರತಿಭಟನೆಯ ವೇಳೆ ಅಹಿತಕರ ಘಟನೆ ನಡೆದು ಪರಿಸ್ಥಿತಿ ವಿಕೋಪಕ್ಕೆ ಹೋದ ಕಾರಣ ನಗರದ ಐದು ಪೊಲೀಸ್ ಠಾಣಾ ವ್ಯಾಪ್ತಿಗಳಲ್ಲಿ ಶುಕ್ರವಾರ ಮಧ್ಯರಾತ್ರಿವರೆಗೆ ಕರ್ಫ್ಯೂ ವಿಧಿಸಿ ಮಂಗಳೂರು ನಗರ ಪೊಲೀಸ್ ಆಯುಕ್ತರು ಆದೇಶ ಹೊರಡಿಸಿರುವ ಹಿನ್ನಲೆಯಲ್ಲಿ ಮುಂಜಾಗರೂಕತಾ ಕ್ರಮವಾಗಿ ಶುಕ್ರವಾರದಂದು ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಎಲ್ಲಾ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿಯವರು ಆದೇಶ ನೀಡಿದ್ದಾರೆ.

Advertisement

ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಸಾರ್ವಜನಿಕ ಶಾಂತಿ, ನೆಮ್ಮದಿ ಹಾಗೂ ಕಾನೂನು ಸುವ್ಯವಸ್ಥೆಗೆ ಧಕ್ಕೆ ಬರುವಂತಹ ಘಟನೆಗಳು ನಡೆಯದಂತೆ ಮುಂಜಾಗರೂಕತಾ ಕ್ರಮವಾಗಿ ಜಿಲ್ಲೆಯಾದ್ಯಂತ ಸೆಕ್ಷನ್ 144 ಅಡಿಯಲ್ಲಿ ನಿಷೇಧಾಜ್ಞೆಯನ್ನು ವಿಧಿಸಲಾಗಿದೆ. ಈ ಹಿನ್ನಲೆಯಲ್ಲಿ ಮುಂಜಾಗರೂಕತಾ ಕ್ರಮವಾಗಿ ಜಿಲ್ಲೆಯಲ್ಲಿ ಕಟ್ಟುನಿಟ್ಟಾಗಿ ಕಾನೂನು ಕ್ರಮ ಕೈಗೊಳ್ಳುವ ಅವಶ್ಯಕತೆ ಇರುತ್ತದೆ.

‘ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ದಿನಾಂಕ 20-12-2019ರಂದು ದಕ್ಷಿಣ ಕನ್ನಡ ಜಿಲ್ಲಾ ವ್ಯಾಪ್ತಿಯಲ್ಲಿ ಎಲ್ಲಾ ಅಂಗನವಾಡಿ ಕೇಂದ್ರಗಳಿಗೆ ಸರಕಾರಿ ಅನುದಾನಿತ ಮತ್ತು ಖಾಸಗಿ ವಿದ್ಯಾಸಂಸ್ಥೆಗಳಿಗೆ (ಐಟಿಐ, ಡಿಪ್ಲೊಮಾ, ವೃತ್ತಿಪರ ಕೋರ್ಸ್, ಪದವಿ ತರಗತಿಯೂ ಸೇರಿ) ಒಂದು ದಿನದ ಮಟ್ಟಿಗೆ ರಜೆಯನ್ನು ಘೋಷಿಸಲಾಗಿದೆ’, ಎಂದು ಜಿಲ್ಲಾಧಿಕಾರಿ ಸಿಂಧು ಬಿ ರೂಪೇಶ್ ಅವರು ತಮ್ಮ ಆದೇಶದಲ್ಲಿ ತಿಳಿಸಿದ್ದಾರೆ.

ಜಿಲ್ಲೆಯಾದ್ಯಂತ ನಿಷೇಧಾಜ್ಞೆ ಜಾರಿಯಲ್ಲಿರುವುದರಿಂದ ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಶುಕ್ರವಾರದಂದು ಎಲ್ಲಾ ಮದ್ಯದಂಗಡಿ, ವೈನ್ ಶಾಪ್, ಬಾರ್ ಆ್ಯಂಡ್ ರೆಸ್ಟೋರೆಂಟ್ ಗಳನ್ನೂ ಸಹ ಮುಚ್ಚುವಂತೆ ಜಿಲ್ಲಾಧಿಕಾರಿಯವರು ಆದೇಶ ನೀಡಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next