ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ 2ನೇ ಆರೋಪಿಯಾಗಿರುವ ದರ್ಶನ್ ಕುರಿತು ಆರೋಪ ಪಟ್ಟಿಯಲ್ಲಿರುವ ಯಾವುದೇ ಗೌಪ್ಯ ಮಾಹಿತಿಯನ್ನು ಪ್ರಸಾರ ಮಾಡದಂತೆ ಮಾಧ್ಯಮಗಳಿಗೆ ಹೈಕೋರ್ಟ್ ತಾತ್ಕಾಲಿಕ ನಿರ್ಬಂಧ ವಿಧಿಸಿದೆ.
ತನ್ನ ವಿರುದ್ಧದ ಮಾಹಿತಿ ಪ್ರಸಾರ ಮಾಡದಂತೆ ನಿರ್ಬಂಧ ವಿಧಿಸುವಂತೆ ಕೋರಿ ದರ್ಶನ್ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಹೇಮಂತ್ ಚಂದನ ಗೌಡರ್ ಅವರಿದ್ದ ಏಕಸದಸ್ಯ ನ್ಯಾಯಪೀಠ ಮಂಗಳವಾರ ಈ ಮಧ್ಯಾಂತರ ಆದೇಶ ನೀಡಿದೆ.
ಅರ್ಜಿಯಲ್ಲಿ ಪ್ರತಿವಾದಿಗಳನ್ನಾಗಿಸಿರುವ ರಾಜ್ಯ ಮತ್ತು ರಾಷ್ಟ್ರ ಮಟ್ಟದ 37ಕ್ಕೂ ಅಧಿಕ ಇಂಗ್ಲಿಷ್, ಕನ್ನಡ ಸುದ್ದಿವಾಹಿನಿಗಳು ಮತ್ತು ಮುದ್ರಣ ಮಾಧ್ಯಮ ಸಂಸ್ಥೆಗಳಿಗೆ ಇದೇ ವೇಳೆ ನ್ಯಾಯಪೀಠ ನೋಟಿಸ್ ಜಾರಿಗೊಳಿಸಿ ವಿಚಾರಣೆಯನ್ನು ಮುಂದೂಡಿದೆ.
ಇದೇ ಪ್ರಕರಣದಲ್ಲಿ ದರ್ಶನ್ ಪತ್ನಿ ಸಲ್ಲಿಸಿದ್ದ ಅರ್ಜಿ ಕುರಿತಂತೆ ವಿಚಾರಣ ನ್ಯಾಯಾಲಯ, ದರ್ಶನ್ ವಿರುದ್ಧ ಯಾವುದೇ ಆಧಾರರಹಿತ ಮಾಹಿತಿ ಪ್ರಸಾರ ಮಾಡದಂತೆ ನಿರ್ಬಂಧಕಾಜ್ಞೆ ವಿಧಿಸಿ ಆದೇಶಿಸಿದೆ. ಆದರೂ ಮಾಧ್ಯಮಗಳು ಆರೋಪಪಟ್ಟಿಯಲ್ಲಿನ ಗೌಪ್ಯ ಮಾಹಿತಿಯನ್ನು ಪ್ರಸಾರ ಮಾಡುತ್ತಿವೆ ಎಂದು ಅರ್ಜಿದಾರರ ಪರ ವಕೀಲರ ವಾದವನ್ನು ಕೋರ್ಟ್ ಆದೇಶದಲ್ಲಿ ಉಲ್ಲೇಖಿಸಿದೆ. ಅರ್ಜಿದಾರ ದರ್ಶನ್ ಪರ ಹಿರಿಯ ವಕೀಲ ಪ್ರಭುಲಿಂಗ ಕೆ. ನಾವದಗಿ ವಾದ ಮಂಡಿಸಿದರು.
ಚಾರ್ಜ್‌ಶೀಟ್‌ನಲ್ಲಿರುವ ಗೌಪ್ಯ ಮಾಹಿತಿಯನ್ನು ಪ್ರಕಟಿಸುವುದು, ಪ್ರಸಾರ ಮಾಡುವುದು, ಮುದ್ರಿಸುವುದು ಮಾಡದಂತೆ ಮಾಧ್ಯಮ ಸಂಸ್ಥೆಗಳಿಗೆ ಮತ್ತು ಸುದ್ದಿವಾಹಿನಿಗಳಿಗೆ ನಿರ್ದೇಶನ ನೀಡುವಂತೆ ಕೇಂದ್ರ ಸರಕಾರದ ವಾರ್ತಾ ಮತ್ತು ಪ್ರಸಾರ ಸಚಿವಾಲಯಕ್ಕೆ ನಿರ್ದೇಶನ ನೀಡಿದೆ.