ಚಿಕ್ಕಮಗಳೂರು: ಶ್ರೀ ಗುರು ದತ್ತಾತ್ರೇಯ ಬಾಬಾಬುಡನ್ ದರ್ಗಾದಲ್ಲಿ ಪೂಜಾ ಕೈಂಕರ್ಯಗಳ ಸಂಬಂಧ ಸಚಿವ ಸಂಪುಟ ಉಪಸಮಿತಿ ಸಾರ್ವಜನಿಕರಿಂದ ಅಹವಾಲು ಮತ್ತು ದಾಖಲೆ, ಹೇಳಿಕೆಗಳನ್ನು ಪಡೆದುಕೊಂಡಿದ್ದು, ಅವುಗಳನ್ನು ಪರಿಶೀಲಿಸಿ ಶೀಘ್ರದಲ್ಲೇ ಸರ್ಕಾರಕ್ಕೆ ವರದಿ ಸಲ್ಲಿಸುವುದಾಗಿ ಸಂಸದೀಯ ವ್ಯವಹಾರ ಹಾಗೂ ಕಾನೂನು ಸಚಿವ ಜಿ. ಮಾಧುಸ್ವಾಮಿ ತಿಳಿಸಿದರು.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಹೈಕೋರ್ಟ್ ಆದೇಶದಂತೆ ಶ್ರೀ ಗುರು ದತ್ತಾತ್ರೇಯ ಬಾಬಾ ಬುಡನ್ ದರ್ಗಾದಲ್ಲಿ ಪೂಜಾ ಕೈಂಕರ್ಯಗಳ ಕುರಿತು ತೀರ್ಮಾನ ತೆಗೆದುಕೊಳ್ಳುವಂತೆ ರಾಜ್ಯ ಸರ್ಕಾರಕ್ಕೆ ಆದೇಶಿಸಲಾಗಿತ್ತು. ಅದರಂತೆ ರಾಜ್ಯ ಸರ್ಕಾರ ಸಚಿವ ಸಂಪುಟ ಉಪಸಮಿತಿಯನ್ನು ರಚಿಸಿದೆ.
ಸಮಿತಿ ಈಗಾಗಲೇ ಬೆಂಗಳೂರಿನಲ್ಲಿ 3ರಿಂದ 4 ಸಭೆಗಳನ್ನು ನಡೆಸಿದೆ. ಸಾರ್ವಜನಿಕರಿಂದ ಅಭಿಪ್ರಾಯ ಸಂಗ್ರಹ, ದಾಖಲೆಗಳನ್ನು ಪಡೆದುಕೊಳ್ಳಲಾಗಿದೆ.
ಇದನ್ನೂ ಓದಿ:ಮಾಣಿಕನಗರದಲ್ಲಿ ಗಾನಸುಧೆ ಹರಿಸಿದ್ದ ಲತಾ : 1981ರಲ್ಲಿ ಸಂಸ್ಥಾನಕ್ಕೆ ಭೇಟಿ ನೀಡಿದ್ದರು
ಸೋಮವಾರ 67 ಸಂಘ-ಸಂಸ್ಥೆ ಹಾಗೂ 457 ಜನರಿಂದ ಅಭಿಪ್ರಾಯ, ದಾಖಲೆಗಳನ್ನು ಸಂಗ್ರಹಿಸಿದ್ದು, ಮುಂದಿನ ದಿನಗಳಲ್ಲಿ ಸಮಿತಿ 2-3 ಸಭೆಗಳನ್ನು ನಡೆಸಿ ದಾಖಲೆ ಮತ್ತು ಸಾರ್ವಜನಿಕರ ಹೇಳಿಕೆಯನ್ನು ಪರಿಶೀಲಿಸಿ ವರದಿಯನ್ನು ಸರ್ಕಾರಕ್ಕೆ ಸಲ್ಲಿಸುತ್ತೇವೆ. ಶಾಂತಿ ಸೌಹಾರ್ದತೆ ಕದಡದಂತೆ ಧಾರ್ಮಿಕ ವಿಧಿ- ವಿಧಾನಗಳಿಗೆ ಧಕ್ಕೆಯಾಗದಂತೆ ಸರ್ಕಾರ ಪೂಜಾ ಕೈಂಕರ್ಯಗಳ ಬಗ್ಗೆ ತೀರ್ಮಾನ ಕೈಗೊಳ್ಳಲಿದೆ. ಸಾರ್ವಜನಿಕರು ಸಹಕರಿಸಬೇಕೆಂದು ಮನವಿ ಮಾಡಿದರು.
ಧಾರ್ಮಿಕ ದತ್ತಿ ಇಲಾಖೆ ಸಚಿವೆ ಶಶಿಕಲಾ ಜೊಲ್ಲೆ, ಬಂದರು ಮತ್ತು ಮೀನುಗಾರಿಕೆ ಇಲಾಖೆ ಸಚಿವ ಎಸ್.ಅಂಗಾರ, ಧಾರ್ಮಿಕ ದತ್ತಿ ಇಲಾಖೆ ಕಾರ್ಯದರ್ಶಿ ರೋಹಿಣಿ ಸಿಂಧೂರಿ, ಕಾನೂನು ಇಲಾಖೆ ಕಾರ್ಯದರ್ಶಿ ವೆಂಕಟೇಶ್, ಕಂದಾಯ ಇಲಾಖೆ ಕಾರ್ಯದರ್ಶಿ ತುಷಾರ ಗಿರಿನಾಥ್ ಇದ್ದರು.