ದಾವಣಗೆರೆ: ಜಿಲ್ಲೆಯಲ್ಲಿ ಕೋವಿಡ್-19 ವೈರಸ್ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಹೀಗಾಗಿ ಜಿಲ್ಲೆಯಲ್ಲಿ ಕೋವಿಡ್ ಕೇರ್ ಸೆಂಟರ್ ಗಳನ್ನು ಮತ್ತೆ ಪ್ರಾರಂಭಿಸಲು ಚಿಂತನೆ ನಡೆದಿದ್ದು, ಸರ್ಕಾರಿ ಮತ್ತು ಖಾಸಗಿ ಆಸ್ಪತ್ರೆಗಳಲ್ಲಿ ವೆಂಟಿಲೇಟರ್, ಆಕ್ಸಿಜನ್ ಪೂರೈಕೆ ವ್ಯವಸ್ಥೆ ಮತ್ತು ಉಪಕರಣಗಳನ್ನು ಸುಸ್ಥಿತಿಯಲ್ಲಿಟ್ಟುಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ, ಆರೋಗ್ಯ ಇಲಾಖೆ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಶನಿವಾರ ನಡೆದ ಕೊರೊನಾ ನಿಯಂತ್ರಣ ಕುರಿತ ತುರ್ತು ಸಭೆಯಲ್ಲಿ ಅವರು ಮಾತನಾಡಿದರು. ಪ್ರಸ್ತುತ ಜಿಲ್ಲೆಯಲ್ಲಿ 513 ಕೋವಿಡ್-19 ಸಕ್ರಿಯ ಪ್ರಕರಣಗಳಿವೆ. ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದ್ದು ಪರಿಸ್ಥಿತಿ ಗಂಭೀರತೆ ಪಡೆದುಕೊಳ್ಳುತ್ತಿದೆ. ಕೋವಿಡ್ ಎರಡನೇ ಅಲೆಯ ಸರಪಳಿ ತುಂಡರಿಸುವ ಅಗತ್ಯವಿದೆ. ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ ಹೆಚ್ಚಾಗುವುದನ್ನು ತಡೆಗಟ್ಟಲು ಹಾಗೂ ಸಮರ್ಪಕ ವೈದ್ಯಕೀಯ ನೆರವು ನೀಡಲು ನಾವು ಸಿದ್ಧರಾಗಬೇಕಿದೆ. ಇದಕ್ಕೆ ಸಂಬಂಧಿಸಿದ ಕೆಲಸಗಳಿಗೆ ಯಾವುದೇ ಕಾರಣಗಳನ್ನು ನೀಡದೆ ನಿಗದಿತ ಕಾಲಮಿತಿಯೊಳಗೆ ಮಾಡಿ ಮುಗಿಸಬೇಕು ಎಂದರು.
ಕಳೆದ ವರ್ಷ ಸೋಂಕಿತರ ಸಂಖ್ಯೆ ಹೆಚ್ಚಾದ ಸಂದರ್ಭದಲ್ಲಿ ಜಿಲ್ಲೆಯ ಹಾಸ್ಟೆಲ್ ಗಳಲ್ಲಿ ಕೋವಿಡ್ ಹೆಲ್ತ್ ಕೇರ್ ಸೆಂಟರ್ ಗಳನ್ನು ತೆರೆದು ಸೋಂಕಿತರಿಗೆ ವೈದ್ಯಕೀಯ ನೆರವು ನೀಡಿದ ಅನುಭವ ಇದೆ. ಹೀಗಾಗಿ ಜಿಲ್ಲೆಯಲ್ಲಿ ಮುಂದಿನ 15 ದಿನಗಳಲ್ಲಿ ಕೋವಿಡ್ ಹೆಲ್ತ್ ಕೇರ್ ಸೆಂಟರ್‌ಗಳನ್ನು ಹಾಸ್ಟೆಲ್‌ಗಳಲ್ಲಿ ಪ್ರಾರಂಭಿಸುವ ಅಗತ್ಯ ಬರಬಹುದು. ಈ ನಿಟ್ಟಿನಲ್ಲಿ ಅಗತ್ಯ ಸಿದ್ಧತೆಗಳನ್ನು ಮಾಡಿಕೊಳ್ಳಬೇಕು ಎಂದು ತಿಳಿಸಿದರು. ಇದಕ್ಕೆ ಪ್ರತಿಕ್ರಿಯಿಸಿದ ಹಿಂದುಳಿದ ವರ್ಗ, ಅಲ್ಪಸಂಖ್ಯಾತರ ಹಾಗೂ ಸಮಾಜಕಲ್ಯಾಣ ಇಲಾಖೆ ಅಧಿಕಾರಿಗಳು, ಏ. 22ರ ಬಳಿಕ ಹಾಸ್ಟೆಲ್‌ಗಳು ಬಳಕೆಗೆ ಲಭ್ಯವಾಗಲಿವೆ.
ಬಳಸಿಕೊಳ್ಳಲು ಅಗತ್ಯ ನೆರವು ಒದಗಿಸಲಾಗುವುದು ಎಂದರು. ಕೋವಿಡ್ ಸೋಂಕು ಪ್ರಕರಣಗಳನ್ನು ನಿಯಂತ್ರಿಸುವ ಯಾವುದೇ ವ್ಯವಸ್ಥೆ ಹಾಗೂ ನಿರ್ವಹಣೆ ಕೈಗೊಳ್ಳುವಲ್ಲಿ ಯಾವುದೇ ರೀತಿಯ ಅಡಚಣೆ ಉಂಟಾದಲ್ಲಿ ತಕ್ಷಣ ತಮ್ಮ ಗಮನಕ್ಕೆ ತರಬೇಕು ಮತ್ತು ಅಗತ್ಯವಿರುವ ಎಲ್ಲ ಉಪಕರಣಗಳು ಹಾಗೂ ಆಂಬುಲೆನ್ಸಗಳನ್ನು ಸುಸ್ಥಿತಿಯಲ್ಲಿರುವಂತೆ ನೋಡಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ಹೇಳಿದರು.
ಚಿಗಟೇರಿ ಜಿಲ್ಲಾಸ್ಪತ್ರೆಯಲ್ಲಿ ಸದ್ಯ 23 ಜನ ಐಸೋಲೇಷನ್‌ನಲ್ಲಿದ್ದು, 182 ಜನ ಹೋಂ ಐಸೋಲೇಷನ್ ನಲ್ಲಿದ್ದಾರೆ. ಸರ್ಕಾರಿ ಹಾಗೂ ಖಾಸಗಿ ಆಸ್ಪತ್ರೆಗಳಲ್ಲೂ ಸಹ ನಿಗದಿತ ಪ್ರಮಾಣದಲ್ಲಿ ಕೋವಿಡ್ ರೋಗಿಗಳ ಚಿಕಿತ್ಸಗಾಗಿ ಬೆಡ್‌ಗಳನ್ನು ಕಾಯ್ದಿರಿಸಬೇಕು. ಸರ್ಕಾರಿ ಮತ್ತು ಖಾಸಗಿ ಆಸ್ಪತ್ರೆಗಳಲ್ಲಿ ಕೋವಿಡ್ ರೋಗಿಗಳಿಗಾಗಿ ಅಗತ್ಯ ಬೆಡ್, ಐಸಿಯು ಹಾಗೂ ವೆಂಟಿಲೇಟರ್‌ಗಳು ಮತ್ತು ವೈದ್ಯಕೀಯ ಉಪಕರಣಗಳನ್ನು ಸುಸ್ಥಿತಿಯಲ್ಲಿ ಇರಿಸಿಕೊಳ್ಳಬೇಕು. ಜಿಲ್ಲಾ ಆರೋಗ್ಯ ಅಧಿಕಾರಿಗಳು ಸರ್ಕಾರಿ ಆಸ್ಪತ್ರೆಗಳಿಗೆ ಖುದ್ದಾಗಿ ಭೇಟಿ ನೀಡಿ ಸುಸ್ಥಿತಿಯಲ್ಲಿರುವ ಕುರಿತು ದೃಢೀಕರಣವನ್ನು ಎರಡು ದಿನಗಳ ಒಳಗಾಗಿ ಸಲ್ಲಿಸಬೇಕು. ವೈದ್ಯಕೀಯ ಬಳಕೆಗಾಗಿ ಉಪಯೋಗಿಸಲಾಗುವ ಆಕ್ಸಿಜನ್ ಪೂರೈಕೆಯಲ್ಲಿ ಯಾವುದೇ ವ್ಯತ್ಯಯ ಉಂಟಾಗದಂತೆ ಮುಂಜಾಗ್ರತಾ ಕ್ರಮಗಳನ್ನು ವಹಿಸಬೇಕು ಎಂದು ಸೂಚಿಸಿದರು.
ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಪೂಜಾರ ವೀರಮಲ್ಲಪ್ಪ, ಉಪವಿಭಾಗಾಧಿಕಾರಿ ಮಮತಾ ಹೊಸಗೌಡರ್, ಜಿಲ್ಲಾಸ್ಪತ್ರೆ ಸರ್ಜನ್ ಡಾ| ಜಯಪ್ರಕಾಶ್, ಡಿಎಚ್‌ಒ ಡಾ| ನಾಗರಾಜ್, ಸಮಾಜ ಕಲ್ಯಾಣ ಇಲಾಖೆ ನಿರ್ದೇಶಕಿ ರೇಷ್ಮಾ ಕೌಸರ್, ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕಿ ನಜ್ಮಾ ಸೇರಿದಂತೆ ವಿವಿಧ ಆಸ್ಪತ್ರೆಗಳ ತಜ್ಞ ವೈದ್ಯರು, ನಾನಾ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳು ಭಾಗವಹಿಸಿದ್ದರು.