ದಾವಣಗೆರೆ: ಕೊರೊನಾ ನಿರ್ಮೂಲನೆ ಮಾಡುವುದರ ಜೊತೆಗೆ ಅನೇಕ ಅಭಿವೃದ್ಧಿ ಯೋಜನೆಗಳನ್ನೂ ಹಮ್ಮಿಕೊಳ್ಳಲಾಗಿದೆ. ಚನ್ನಗಿರಿ ಪಟ್ಟಣದ ಒಳಚರಂಡಿ ವ್ಯವಸ್ಥೆಗೆ 96 ಕೋಟಿ ಹಾಗೂ ನೀರಾವರಿ ಯೋಜನೆಗೆ ¤ 155 ಕೋಟಿ ರೂ. ಬಿಡುಗಡೆ ಮಾಡಲಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಬಿ.ಎ. ಬಸವರಾಜ್ ಹೇಳಿದರು.
ಚನ್ನಗಿರಿ ತಾಲೂಕಿನ ಕಾಕನೂರು ಕಿತ್ತೂರು ರಾಣಿ ಚನ್ನಮ್ಮ ವಸತಿ ಶಾಲೆಯಲ್ಲಿ ಕೋವಿಡ್ ಕೇರ್ ಸೆಂಟರ್ ನಲ್ಲಿ ರೋಗಿಗಳ ಯೋಗಕ್ಷೇಮ ವಿಚಾರಿಸಿ, ರೋಗಿಗಳಿಗೆ ಆರೋಗ್ಯ ಕಿಟ್ ವಿತರಿಸಿ ಅವರು ಮಾತನಾಡಿದರು. ಯಾವುದೇ ಕುಂದು ಕೊರತೆಗಳಿದ್ದಲ್ಲಿ ಜಿಲ್ಲಾಡಳಿತ, ಜನಪ್ರತಿನಿಧಿಗಳು ಮತ್ತು ಸರ್ಕಾರ ಪ್ರಾಮಾಣಿಕವಾಗಿ ಬಗೆಹರಿಸುತ್ತದೆ ಎಂದರು.
ಶಾಸಕರು ಮತ್ತು ಕರ್ನಾಟಕ ರಾಜ್ಯ ಸೋಪು ಮತ್ತು ಮಾರ್ಜಕ ನಿಗಮದ ಅಧ್ಯಕ್ಷ ಮಾಡಾಳ್ ವಿರುಪಾಕ್ಷಪ್ಪ ಮಾತನಾಡಿ, ಕೋವಿಡ್ ಸೋಂಕಿತರಿಗೆ ಚವನ್‌ಪ್ರಾಶ್, ಕಾರ್ಬಾಲಿಕ್ ಸೋಪು ಮತ್ತು ಸಾನಿಟೈಸರ್ ವಿತರಿಸಲಾಗಿದೆ. ಚವನ್‌ಪ್ರಾಶ್ ಅನ್ನು ಬೆಳಗ್ಗೆ ಮತ್ತು ರಾತ್ರಿ ಒಂದು ಚಮಚ ತಿನ್ನುತ್ತಿದ್ದರೆ ನಮ್ಮ ರೋಗನಿರೋಧಕ ಶಕ್ತಿ ಹೆಚ್ಚಾಗುತ್ತದೆ ಎಂದರು. ಸಂಸದ ಜಿ.ಎಂ ಸಿದ್ದೇಶ್ವರ ಮಾತನಾಡಿ, ಜಿಲ್ಲೆಯಲ್ಲಿ ಕೋವಿಡ್ ನಿಯಂತ್ರಣವಾಗುತ್ತಿದ್ದರೂ ಇನ್ನೂ ಸೋಂಕಿತರು ಕಂಡುಬರುತ್ತಿದ್ದಾರೆ.
ಇದು ಸಂಪೂರ್ಣವಾಗಿ ಕಡಿಮೆಯಾಗಬೇಕು. ಸೋಂಕು ನಿಯಂತ್ರಣಕ್ಕೆ ಅಧಿಕಾರಿಗಳು ಶ್ರಮವಹಿಸಬೇಕು. ಯಾರೂ ಉದಾಸೀನ ಮಾಡಬಾರದು ಎಂದರು.
ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ ಮಾತನಾಡಿ, ಕೋವಿಡ್ ಕೇರ್ ಸೆಂಟರ್‌ನಲ್ಲಿ ಪೌಷ್ಟಿಕಾಂಶಯುಕ್ತ ಆಹಾರದ ಜೊತೆ ಉತ್ತಮ ಗುಣಮಟ್ಟದ ಆರೈಕೆ ಪಡೆದುಕೊಂಡು ವೈದ್ಯರ ಸಲಹೆ ಮತ್ತು ಚಿಕಿತ್ಸೆಯಿಂದ ಸೋಂಕಿತರು ಗುಣಮುಖರಾಗಿದ್ದಾರೆ. ತಾಲೂಕಿನಲ್ಲಿ ಸೋಂಕಿತರ ಸಂಖ್ಯೆ ಮತ್ತು ಸೋಂಕಿತರ ಸಾವಿನ ಸಂಖ್ಯೆ ಕಡಿಮೆಯಾಗಿದೆ ಎಂದರು.
ಮಾಯಕೊಂಡ ಶಾಸಕ ಪ್ರೊ| ಲಿಂಗಣ್ಣ, ಗ್ರಾಪಂ ಅಧ್ಯಕ್ಷೆ ಭಾಗ್ಯಮ್ಮ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಿಷ್ಯಂತ್, ಜಿಪಂ ಸಿಇಒ ವಿಜಯಮಹಾಂತೇಶ ದಾನಮ್ಮನವರ್, ಉಪವಿಭಾಗಾಧಿಕಾರಿ ಮಮತ, ಜಿಲ್ಲಾ ಆರೋಗ್ಯಾಧಿಕಾರಿ ಡಾ| ನಾಗರಾಜ್, ನೊಡಲ್ ಅಧಿಕಾರಿ ಡಾ| ಮುರಳಿ ಇತರರು ಭಾಗವಹಿಸಿದ್ದರು.