ದಾವಣಗೆರೆ: ಕೋವಿಡ್‌ನಿಂದ ಮರಣ ಹೊಂದಿದ ಕುಟುಂಬಗಳಿಗೆ ಸರ್ಕಾರದಿಂದ ಪರಿಹಾರ ಸೌಲಭ್ಯ ಕಲ್ಪಿಸುವ ಯೋಜನೆಗಾಗಿ ಚನ್ನಗಿರಿ ತಾಲೂಕಿನಲ್ಲಿ ಕೋವಿಡ್‌ನಿಂದ ಮರಣ ಹೊಂದಿರುವವರ ಪಟ್ಟಿ ಸಿದ್ಧಪಡಿಸಿ, ಶೀಘ್ರ ಜಿಲ್ಲಾಧಿಕಾರಿಗಳ ಕಚೇರಿಗೆ ಸಲ್ಲಿಸಬೇಕು ಎಂದು ನಗರಾಭಿವೃದ್ಧಿ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಬಿ.ಎ. ಬಸವರಾಜ ತಾಲೂಕು ಆರೋಗ್ಯ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಚನ್ನಗಿರಿಯ ಮೌದ್ಗಲ್ ಆಂಜನೇಯ ಸ್ವಾಮಿ ಕಲ್ಯಾಣ ಮಂದಿರದಲ್ಲಿ ಸೋಮವಾರ ಆಯೋಜಿಸಲಾಗಿದ್ದ ತಾಲೂಕು ಮಟ್ಟದ ವಿವಿಧ ಇಲಾಖೆಗಳ ಪ್ರಗತಿ ಪರಿಶೀಲನೆ ಹಾಗೂ ಕೋವಿಡ್-19 ನಿಯಂತ್ರಣ ಕುರಿತು ಪರಿಶೀಲನಾ ಸಭೆ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ತಾಲೂಕಿನಲ್ಲಿ ಕೋವಿಡ್‌ನಿಂದ ಎಷ್ಟು ಜನ ಮೃತಪಟ್ಟಿದ್ದಾರೆ ಎಂಬ ಅಂಕಿ-ಅಂಶಗಳನ್ನು ಸಮರ್ಪಕವಾಗಿ ಸಂಗ್ರಹಿಸಿ ಮೃತಪಟ್ಟಿರುವವರ ಹೆಸರು, ವಿಳಾಸ, ಕೋವಿಡ್ ಪಾಸಿಟಿವ್ ರಾಜ್ಯ ಮಟ್ಟದ ಗುರುತು ಸಂಖ್ಯೆಯುಳ್ಳ ಮಾಹಿತಿಯ ವಿವರವಾದ ಪಟ್ಟಿಯನ್ನು ಶೀಘ್ರ ಕಳುಹಿಸಬೇಕು. ಯಾವುದೇ ಕಾರಣಕ್ಕೂ ಯಾವುದೇ ಅರ್ಹ ಕುಟುಂಬಗಳ ಹೆಸರು ಬಿಟ್ಟುಹೋಗಬಾರದು ಎಂದು ಸಚಿವರು ತಾಕೀತು ಮಾಡಿದರು.
ತಾಲೂಕು ಆರೋಗ್ಯಾಧಿಕಾರಿ ಡಾ| ಪ್ರಭು ಮಾತನಾಡಿ, ತಾಲೂಕಿನಲ್ಲಿ ಒಟ್ಟು 3551 ಪಾಸಿಟಿವ್ ಪ್ರಕರಣಗಳು ದಾಖಲಾಗಿದ್ದು 59 ಜನ ಕೋವಿಡ್‌ನಿಂದ ಮರಣ ಹೊಂದಿದ್ದಾರೆ. ತಾಲೂಕಿನಲ್ಲಿ ಐದು ಕೋವಿಡ್ ಕೇರ್ ಸೆಂಟರ್ ಗಳನ್ನು ಪ್ರಾರಂಭಿಸಲಾಗಿದ್ದು, 1544ಜನರು ಕೋವಿಡ್ ಕೇರ್ ಸೆಂಟರ್‌ನಲ್ಲಿ ಆರೈಕೆ ಪಡೆದುಕೊಂಡಿದ್ದಾರೆ ಎಂದರು.
ಸಹಾಯಕ ಕೃಷಿ ನಿರ್ದೇಶಕ ಮಾತನಾಡಿ, ತಾಲೂಕಿನಲ್ಲಿ 44 ಸಾವಿರ ಹೆಕ್ಟೆರ್ ಪ್ರದೇಶದಲ್ಲಿ ಪ್ರಮುಖ ಬೆಳೆಗಳಾದ ಮೆಕ್ಕೆಜೋಳ, ಭತ್ತ, ರಾಗಿ, ತೊಗರಿ, ಹತ್ತಿ ಬಿತ್ತನೆ ಮಾಡುವ ಗುರಿ ಇದ್ದು ಈಗಾಗಲೆ 22 ಸಾವಿರ ಹೆಕ್ಟೇರ್ ಬಿತ್ತನೆಯಾಗಿದೆ, ಅಲ್ಲದೆ ಸದ್ಯ ಭತ್ತದ ಕೊಯ್ಲು ನಡೆಯುತ್ತಿದ್ದು, ಬಳಿಕ ಈ ಕ್ಷೇತ್ರದಲ್ಲಿಯೂ ಬಿತ್ತನೆಯಾಗಲಿದೆ. ಈ ವರ್ಷ 4000 ಹೆಕ್ಟರ್ ಪ್ರದೇಶದಲ್ಲಿ ತೊಗರಿಯನ್ನು ಅಂತರಬೆಳೆಯಾಗಿ ಬೆಳೆಯುವ ಮೂಲಕ ಸುಮಾರು 16000 ಕ್ವಿಂ ತೊಗರಿ ಉತ್ಪಾದನೆಯನ್ನು ಹೆಚ್ಚಿಸುವ ಗುರಿ ಹೊಂದಲಾಗಿದೆ. ತಾಲೂಕಿನಲ್ಲಿ ಬಿತ್ತನೆ ಬೀಜ ಹಾಗೂ ರಸಗೊಬ್ಬರಗಳ ಯಾವುದೇ ಕೊರತೆ ಇಲ್ಲ ಎಂದರು.
ಚನ್ನಗಿರಿ ಶಾಸಕ ಮಾಡಾಳ್ ವಿರುಪಾಕ್ಷಪ್ಪ ಮಾತನಾಡಿ, ತಜ್ಞರ ಅಭಿಪ್ರಾಯದಂತೆ ಕೋವಿಡ್‌ನ ಮೂರನೇ ಅಲೆ ಬರುವ ಸಾಧ್ಯತೆಗಳಿದ್ದು ಮೂರನೇ ಅಲೆ ಬಾರದಂತೆ ಅಧಿಕಾರಿಗಳು ಎಚ್ಚರಿಕೆ ಕ್ರಮ ತೆಗೆದುಕೊಳ್ಳಬೇಕು ಎಂದರು. ಸಭೆಯಲ್ಲಿ ಸಂಸದ ಜಿ.ಎಂ. ಸಿದ್ದೇಶ್ವರ್, ಮಾಯಕೊಂಡ ಶಾಸಕ ಪ್ರೊ| ಲಿಂಗಣ್ಣ, ಪುರಸಭೆ ಅಧ್ಯಕ್ಷೆ ಲಕ್ಷಿ ದೇವಮ್ಮ ನರಸಿಂಹಮೂರ್ತಿ, ಜಿಲ್ಲಾಧಿಕಾರಿ ಮಹಾಂತೇಶ್ ಬೀಳಗಿ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ವಿಜಯಮಹಾಂತೇಶ ದಾನಮ್ಮನವರ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸಿ.ಬಿ. ರಿಷ್ಯಂತ್, ಜಿಲ್ಲಾ ಆರೋಗ್ಯಾಧಿಕಾರಿ ಡಾ|ನಾಗರಾಜ್, ಉಪವಿಭಾಗಾಧಿಕಾರಿ ಮಮತ ಹೊಸಗೌಡರ್ ಸೇರಿದಂತೆ ಇನ್ನಿತರ ಅಧಿಕಾರಿಗಳು ಭಾಗವಹಿಸಿದ್ದರು.