Advertisement

ಅನಧಿಕೃತ ಧಾರ್ಮಿಕ ಕಟ್ಟಡಗಳ ತೆರವು

11:29 AM Jan 08, 2020 | Naveen |

ದಾವಣಗೆರೆ: 2009 ಸೆಪ್ಟೆಂಬರ್‌ 29ರ ನಂತರ ಸಾರ್ವಜನಿಕ ರಸ್ತೆ, ಸಾರ್ವಜನಿಕ ಉದ್ಯಾನವನ ಹಾಗೂ ಸಾರ್ವಜನಿಕ ಸ್ಥಳಗಳಲ್ಲಿ ಅನಧಿಕೃತವಾಗಿ ನಿರ್ಮಿಸಲಾಗಿರುವ ಧಾರ್ಮಿಕ ಕಟ್ಟಡಗಳ ಸರ್ವೇ ನಡೆಸುವುದರ ಜೊತೆಗೆ ತೆರವುಗೊಳಿಸಲು ಕ್ರಮ ಕೈಗೊಳ್ಳಬೇಕೆಂದು ಜಿಲ್ಲಾ ಧಿಕಾರಿ ಮಹಾಂತೇಶ ಬೀಳಗಿ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಿದ್ದಾರೆ.

Advertisement

ಸರ್ವೋಚ್ಚ ನ್ಯಾಯಾಲಯದ ನಿರ್ದೇಶನದಂತೆ ಸಾರ್ವಜನಿಕ ಸ್ಥಳಗಳಲ್ಲಿ ಅನಧಿಕೃತವಾಗಿ ನಿರ್ಮಿಸಲಾಗಿರುವ ಧಾರ್ಮಿಕ ಕಟ್ಟಡಗಳ ತೆರವುಗೊಳಿಸುವ ಕುರಿತು ಸಂಬಂಧಿಸಿದ ಅಧಿಕಾರಿಗಳಿಗೆ ಸೂಕ್ತ ನಿರ್ದೇಶನ ನೀಡಲು ಮಂಗಳವಾರ ತಮ್ಮ ಕಚೇರಿ ಸಭಾಂಗಣದಲ್ಲಿ ಏರ್ಪಡಿಸಿದ್ದ ಸಭೆಯಲ್ಲಿ ಈ ಬಗ್ಗೆ ಮಾತನಾಡಿದ ಅವರು, ಸರ್ವೋಚ್ಚ ನ್ಯಾಯಾಲಯದ ಸುತ್ತೋಲೆಯಂತೆ ಜ.7ರಿಂದಲೇ ಅನಧಿಕೃತ ಧಾರ್ಮಿಕ ಕಟ್ಟಡಗಳ ಸರ್ವೇ ಮತ್ತು ತೆರವು ಕಾರ್ಯಾಚರಣೆಯನ್ನು ಕಟ್ಟುನಿಟ್ಟಾಗಿ ಕೈಗೊಳ್ಳಬೇಕೆಂದು ತಿಳಿಸಿದರು.

ಸರ್ವೋಚ್ಚ ನ್ಯಾಯಾಲಯವು 29ನೇ ಸೆಪ್ಟೆಂಬರ್‌ 2009ರ ನಂತರ ಸಾರ್ವಜನಿಕ ರಸ್ತೆಗಳು, ಸಾರ್ವಜನಿಕ ಉದ್ಯಾನವನ ಹಾಗೂ ಸಾರ್ವಜನಿಕ ಸ್ಥಳಗಳಲ್ಲಿ ಅನಧಿಕೃತವಾಗಿ ನಿರ್ಮಿಸಲಾಗಿರುವ ದೇವಸ್ಥಾನ, ಮಸೀದಿ, ಚರ್ಚ್‌ ಸೇರಿದಂತೆ ಯಾವುದೇ ಧಾರ್ಮಿಕ ಕಟ್ಟಡಗಳ ಸರ್ವೇ ಮಾಡಿ ತೆರವುಗೊಳಿಸಲು ವಿವರವಾದ ಮಾರ್ಗಸೂಚಿಗಳನ್ನು ಹೊರಡಿಸಿ ಜಿಲ್ಲಾ ಮಟ್ಟದಲ್ಲಿ ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಸಮಿತಿ ರಚಿಸಲಾಗಿತ್ತು.

ಅನಧಿಕೃತ ಧಾರ್ಮಿಕ ಕಟ್ಟಡಗಳ ತೆರವಿಗೆ ತೆಗೆದುಕೊಂಡ ಕ್ರಮದ ಕುರಿತು ಮಾಹಿತಿ ಕ್ರೋಡೀಕರಿಸಿ, ವರದಿ ನೀಡಲು ತಿಳಿಸಿದ ಪ್ರಕಾರ 2011 ರಿಂದ 2016ರ ವರೆಗೆ ಸಲ್ಲಿಸಲಾಗಿತ್ತು. ರಾಜ್ಯ ಉಚ್ಚ ನ್ಯಾಯಾಲಯ ಸ್ವಯಂ ಪ್ರೇರಿತ ಪ್ರಕರಣದಡಿ ಸರ್ಕಾರ ಸಲ್ಲಿರುವ ವರದಿಯನ್ನು ಮರು ಪರಿಶೀಲಿಸಲು ತಿಳಿಸಿ ಅನಧಿಕೃತ ಧಾರ್ಮಿಕ ಕಟ್ಟಡಗಳನ್ನು ಗುರುತಿಸಲು ಹೊಸದಾಗಿ ಸರ್ವೇಗೆ ಮಾರ್ಗಸೂಚಿ ನೀಡಿದ್ದು, ಅದರನ್ವಯ ಕ್ರಮ ಕೈಗೊಳ್ಳುವಂತೆ ಸರ್ಕಾರಕ್ಕೆ ಸೂಚನೆ ನೀಡಿರುವನ್ವಯ ಸಂಬಂಧಿಸಿದ ಎಲ್ಲರೂ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕೆಂದು ಅವರು ಆದೇಶಿಸಿದರು.

ತಹಶೀಲ್ದಾರರು ಹಾಗೂ ಕಾರ್ಯ ನಿರ್ವಾಹಕ ಅಧಿಕಾರಿಗಳು, ಗ್ರಾಮ ಲೆಕ್ಕಿಗರು, ಪಿಡಿಓಗಳು, ಬಿಲ್‌ ಕಲೆಕ್ಟರ್‌ಗಳನ್ನು ಒಳಗೊಂಡು ಎಲ್ಲ ತಾಲೂಕು ಹಾಗೂ ನಗರ ಸ್ಥಳೀಯ ಸಂಸ್ಥೆಗಳಲ್ಲಿನ ಅಧಿಕಾರಿಗಳು/ಸಿಬ್ಬಂದಿಗಳ ತಂಡ ರಚಿಸಿಕೊಂಡು ಬುಧವಾರದಿಂದಲೇ ವ್ಯವಸ್ಥಿತವಾಗಿ ಯೋಜನೆ ರೂಪಿಸಿಕೊಂಡು ಸರ್ವೇ ಕಾರ್ಯ ನಡೆಸಬೇಕು ಜೊತೆಗೆ ಪೊಲೀಸರ ಭದ್ರತೆಯಲ್ಲಿ ತೆರವು ಕಾರ್ಯ ಕೈಗೊಳ್ಳಬೇಕು ಎಂದು ಹೇಳಿದರು.

Advertisement

ಧಾರ್ಮಿಕ ಭಾವನೆಗಳಿಗೆ ಸಂಬಂಧಿ ಸಿರುವುದರಿಂದ ತೆರವುಗೊಳಿಸುವ ವೇಳೆ ಸ್ಥಳೀಯರು, ಆಯಾ ಧರ್ಮದವರ ಮನವೊಲಿಸಿ ಅಥವಾ ಅಂತಹ ಕಟ್ಟಡಗಳನ್ನು ಬೇರೆಡೆಗೆ ಸ್ಥಳಾಂತರಿಸಿ ಅನಧಿಕೃತ ಕಟ್ಟಡಗಳನ್ನು ತೆರವುಗೊಳಿಸಲು ಕ್ರಮ ಕೈಗೊಳ್ಳಬೇಕು ಎಂದು ಸಲಹೆ ನೀಡಿದರು.

ಬುಧವಾರ ಸರ್ವೇ ಜೊತೆಗೆ ತೆರವು ಕಾರ್ಯಾಚರಣೆ ಆರಂಭಿಸಬೇಕು. ಅವಶ್ಯಕತೆ ಕಂಡು ಬಂದಲ್ಲಿ ತಾವು ಹಾಗೂ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ, ಜಿಪ ಮುಖ್ಯ ಕಾರ್ಯನಿರ್ವಾಹ ಅಧಿಕಾರಿ ಸಹಕರಿಸಲಿದ್ದಾರೆ. ಈ ಕಾರ್ಯಕ್ಕೆ ಅಡ್ಡಿಪಡಿಸುವವರ ವಿರುದ್ಧ ಕ್ರಿಮಿನಲ್‌ ಮೊಕದ್ದಮೆ ದಾಖಲಿಸಬಹುದಾಗಿದ್ದು, ಸರ್ಕಾರ ಹಾಗೂ ಉಚ್ಚ ನ್ಯಾಯಾಲಯ ಈ ವಿಚಾರವನ್ನು ಗಂಭೀರವಾಗಿ ಪರಿಗಣಿಸುವಂತೆ ತಿಳಿಸಿದೆ. ಉಪವಿಭಾಗಾಧಿಕಾರಿ, ತಹಶೀಲ್ದಾರ್‌, ನಗರ ಮತ್ತು ಗ್ರಾಮೀಣ ಸ್ಥಳೀಯ ಸಂಸ್ಥೆಗಳ ಅಧಿ ಕಾರಿ/ಸಿಬ್ಬಂದಿಗಳನ್ನೊಳಗೊಂಡ ತಂಡ ವ್ಯವಸ್ಥಿತವಾಗಿ ಕಾರ್ಯ ನಿರ್ವಹಿಸಬೇಕು.

ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿಗಳು ಅಗತ್ಯ ಪೊಲೀಸ್‌ ಭದ್ರತೆ ಒದಗಿಸುವರು ಎಂದು ಅವರು ತಿಳಿಸಿದರು. ಸರ್ವೇ ಮತ್ತು ತೆರವು ಕಾರ್ಯಾಚರಣೆ ಕುರಿತು ತಮ್ಮ ಅಧ್ಯಕ್ಷತೆಯಲ್ಲಿ ಪ್ರತಿ ತಿಂಗಳ ಮೊದಲನೇ ಸೋಮವಾರದಂದು ಸಭೆ ನಡೆಸಿ, ಪರಿಶೀಲಿಸಲಾಗುವುದು. ಆದ್ದರಿಂದ ಜ.7ರಿಂದಲೇ ಸರ್ವೇ ಕಾರ್ಯ ಆರಂಭಿಸಬೇಕು. ಪ್ರತಿ ದಿನ ಕಟ್ಟುನಿಟ್ಟಾಗಿ ಅಧಿಕಾರಿಗಳು ತಮಗೆ ವರದಿ ಸಲ್ಲಿಸಬೇಕೆಂದು ಜಿಲ್ಲಾಧಿಕಾರಿ ಸೂಚಿಸಿದರು.

ಜಿ.ಪಂ. ಸಿಇಓ ಪದ್ಮಾ ಬಸವಂತಪ್ಪ ಮಾತನಾಡಿ, ಇದು ಎಲ್ಲ ಧರ್ಮದ ಅನ ಧಿಕೃತ ಕಟ್ಟಡಗಳಿಗೆ ಸಂಬಂಧಿಸಿದ್ದಾಗಿದೆ. ಆದ್ದರಿಂದ ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಂಡು ಕಾರ್ಯಾಚರಣೆ ಮಾಡಬೇಕೆಂದು ತಿಳಿಸಿದರು.

ಅಪರ ಜಿಲ್ಲಾಧಿಕಾರಿ ಪೂಜಾರ್‌ ವೀರಮಲ್ಲಪ್ಪ,ಸಾರ್ವಜನಿಕ ಸ್ಥಳಗಳಲ್ಲಿ ನಿರ್ಮಿಸಲಾಗಿರುವ ಅನಧಿಕೃತ ಕಟ್ಟಡಗಳ ತೆರವುಗೊಳಿಸುವ ಬಗ್ಗೆ ಸರ್ವೋಚ್ಚ ನ್ಯಾಯಾಲಯ ಹೊರಡಿಸಿರುವ ಸುತ್ತೋಲೆಯ ಬಗ್ಗೆ ವಿವರಣೆ ನೀಡಿದರು.

ಉಪ ವಿಭಾಗಾ ಧಿಕಾರಿ ಮಮತಾ ಹೊಸಗೌಡರ್‌, ತಹಶೀಲ್ದಾರ್‌ ಸಂತೋಷ್‌ಕುಮಾರ್‌, ಬೇರೆ ತಾಲ್ಲೂಕುಗಳ ತಹಶೀಲ್ದಾರರು, ಇಓಗಳು, ಪಾಲಿಕೆಯ ಸಹಾಯಕ ಕಾರ್ಯಪಾಲಕ ಇಂಜಿನಿಯರ್‌ ಭಾರತಿ, ಇತರೆ ಅಧಿಕಾರಿಗಳು ಸಭೆಯಲ್ಲಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next