ದಾವಣಗೆರೆ: ಜಿಲ್ಲೆಯಲ್ಲಿ ಕೋವಿಡ್ ಸೋಂಕಿನ ಚೈನ್‌ಲಿಂಕ್ ಕಡಿತಗೊಳ್ಳುವುದು ನಿಶ್ಚಿತ ಎಂದು ಜಿಲ್ಲಾ ಉಸ್ತುವಾರಿ ಸಚಿವ ಬಿ.ಎ. ಬಸವರಾಜ್ (ಭೈರತಿ) ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಜಿಲ್ಲೆಯಲ್ಲಿ ಕೋವಿಡ್ ಸೋಂಕಿನ ಚೈನ್ ಲಿಂಕ್ ಕಡಿತ ಮಾಡುವಲ್ಲಿ ಯಶಸ್ವಿಯಾಗಿರುವ ಜಿಲ್ಲಾಡಳಿತಕ್ಕೆ ಸರ್ಕಾರದ ಪರ ಅಭಿನಂದನೆ ಸಲ್ಲಿಸಲಾಗುವುದು. ಕಂಟೇನ್ಮೆಂಟ್ ಝೋನ್ ಒಳಗೊಂಡಂತೆ ಎಲ್ಲಾ ಕಡೆ ಕೋವಿಡ್ ಗೆ ಸಂಬಂಧಿಸಿದಂತೆ ಹೆಚ್ಚು ಪರೀಕ್ಷೆ ಹೆಚ್ಚು ನಡೆಸಲು ಅಧಿಕಾರಿಗಳು, ಇನ್ಸಿಡೆಂಟ್ ಕಮಾಂಡರ್‌ಗಳಿಗೆ ಕಟ್ಟೆಚ್ಚರ ನೀಡಲಾಗಿದೆ ಎಂದು ಮಂಗಳವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.
ದಾವಣಗೆರೆ ಜಿಲ್ಲೆಯಲ್ಲಿ ಕೋವಿಡ್ ಸೋಂಕಿನ ಏರಿಕೆ ಪ್ರಮಾಣ ತಡೆಯಲಾಗಿದೆ. ಇದುವರೆಗೆ 51 ಜನರು ಸಂಪೂರ್ಣ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಈಗಾಗಲೇ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವವರಲ್ಲಿ ಅನೇಕರು ಗುಣಮುಖರಾಗುತ್ತಿದ್ದು, ಕೆಲವೇ ದಿನಗಳಲ್ಲಿ ಡಿಸ್ಚಾರ್ಜ್ ಆಗಲಿದ್ದಾರೆ ಎಂಬುದಾಗಿ ಅಧಿಕಾರಿಗಳು ಹೇಳಿದ್ದಾರೆ. ದಾವಣಗೆರೆಯಲ್ಲಿ ಕೋವಿಡ್ ಪ್ರಕರಣಗಳು ಇಳಿಮುಖವಾಗುತ್ತಿವೆ. 2-3 ದಿನಗಳದ್ದು ಸೇರಿ ಮಂಗಳವಾರ 11 ಪಾಸಿಟಿವ್ ಪ್ರಕರಣಗಳ ವರದಿ ಬಂದಿದೆ ಎಂದು ಪ್ರಶ್ನೆಯೊಂದಕ್ಕೆ ಸಚಿವರು ಉತ್ತರಿಸಿದರು.
ಜೆ.ಜೆ.ಎಂ ವೈದ್ಯಕೀಯ ಮಹಾವಿದ್ಯಾಲಯದಲ್ಲಿ ಕೋವಿಡ್-19 ಪರೀಕ್ಷಾ ಪ್ರಯೋಗಾಲಯ ಲೋಕಾರ್ಪಣೆ ಮಾಡಲಾಗಿದೆ. ಜಿಲ್ಲಾ ಚಿಗಟೇರಿ ಆಸ್ಪತ್ರೆಯಲ್ಲಿ ಪ್ರಯೋಗಾಲಯ ಪ್ರಾರಂಭಕ್ಕೆ ಟೆಂಡರ್ ಕರೆದಾಗ ಹಲವಾರು ಕಂಪನಿ, ಏಜೆನ್ಸಿ ಕಾಲಹರಣ ಮಾಡಿದವು. ಹಾಗಾಗಿ ಜೆ.ಜೆ. ಎಂ ವೈದ್ಯಕೀಯ ಮಹಾವಿದ್ಯಾಲಯದಲ್ಲಿ ಪ್ರಯೋಗಾಲಯ ಸಿದ್ಧಪಡಿಸಿದವರಿಗೆ ಗುತ್ತಿಗೆ ನೀಡಲಾಗಿದ್ದು, 2-3 ದಿನಗಳಲ್ಲಿ ಎಲ್ಲಾ ಉಪಕರಣ ಸಜ್ಜುಗೊಳಿಸಲಾಗುವುದು. ಆದಷ್ಟು ಬೇಗ ಪ್ರಯೋಗಾಲಯ ಕಾರ್ಯಾರಂಭ ಮಾಡಲಿದೆ ಎಂದರು.
ಎಸ್.ಎಸ್. ಹೈಟೆಕ್ ಆಸ್ಪತ್ರೆ ಮತ್ತು ಸಂಶೋಧನಾ ಕೇಂದ್ರ, ಜೆ.ಜೆ.ಎಂ ವೈದ್ಯಕೀಯ ಮಹಾವಿದ್ಯಾಲಯದ ಪ್ರಯೋಗಾಲಯಗಳಲ್ಲಿ ದಿನವಹಿ 100 ಗಂಟಲು ಮಾದರಿ ದ್ರವ ಪರೀಕ್ಷೆ ಮಾಡಲಾಗುತ್ತಿದೆ. ಜಿಲ್ಲಾ ಆಸ್ಪತ್ರೆ ಪ್ರಯೋಗಾಲಯ ಪ್ರಾರಂಭವಾದಲ್ಲಿ ಪರೀಕ್ಷಾ ಪ್ರಮಾಣ ಹೆಚ್ಚಳವಾಗಲಿದೆ. ದಾವಣಗೆರೆಯಲ್ಲಿ ಒಂದೇ ಒಂದು ಪ್ರಯೋಗಾಲಯ ಇರಲಿಲ್ಲ. ಎಲ್ಲಾ ಜನಪ್ರತಿನಿಧಿಗಳು, ಅಧಿಕಾರಿಗಳ ಪ್ರಾಮಾಣಿಕ ಪ್ರಯತ್ನದ ಫಲವಾಗಿ ಲ್ಯಾಬ್ ದೊರೆತಿವೆ. ಜಿಲ್ಲಾ ಆಸ್ಪತ್ರೆಯಲ್ಲಿ ಹೆಚ್ಚಿನ ಸೌಲಭ್ಯಕ್ಕೆ 25 ಕೋಟಿ ರೂ. ಖರ್ಚು ಮಾಡಲಾಗುವುದು ಎಂದು ಪ್ರಶ್ನೆಯೊಂದಕ್ಕೆ ಪ್ರತಿಕ್ರಿಯಿಸಿದರು.
ಶಾಸಕರಾದ ಎಸ್.ಎ. ರವೀಂದ್ರನಾಥ್, ಪ್ರೊ| ಎನ್. ಲಿಂಗಣ್ಣ, ದೂಡಾ ಅಧ್ಯಕ್ಷ ರಾಜನಹಳ್ಳಿ ಶಿವಕುಮಾರ್, ಪೌರಾಡಳಿತ ಇಲಾಖೆ ಕಾರ್ಯದರ್ಶಿ ಬಿ.ಬಿ. ಕಾವೇರಿ, ಜಿಲ್ಲಾಧಿಕಾರಿ ಮಹಾಂತೇಶ್ ಜಿ. ಬೀಳಗಿ, ಎಸ್ಪಿ ಹನುಮಂತರಾಯ ಇತರರು ಇದ್ದರು.
ಕೋವಿಡ್ ಹಿನ್ನೆಲೆಯಲ್ಲಿ ಇತಿಮಿತಿಯಲ್ಲಿ ಸಭೆ ನಡೆಸಲಾಗಿದೆ ಹೊರತು ಬೇರೆ ಯಾವ ದೃಷ್ಟಿಯಿಂದಲೂ ಅಲ್ಲ. ಮುಂದಿನ ದಿನಗಳಲ್ಲಿ ನಗರಪಾಲಿಕೆಯ ಎಲ್ಲಾ ಸದಸ್ಯರ ಸಭೆ ನಡೆಸಲಾಗುವುದು.
ಬಿ.ಎ. ಬಸವರಾಜ್,
ಜಿಲ್ಲಾ ಉಸ್ತುವಾರಿ ಸಚಿವ