Advertisement
ರವಿವಾರ ನಗರದ ಹಳೆ ಪಿ.ಬಿ.ರಸ್ತೆಯ ಸಾಯಿ ಇಂಟರ್ ನ್ಯಾಷನಲ್ ಹೋಟೆಲ್ ಸಭಾಂಗಣದಲ್ಲಿ ನಡೆದ ಸಭೆಯಲ್ಲಿ ದಾವಣಗೆರೆಯಲ್ಲಿ ಯಡಿಯೂರಪ್ಪ ಅವರ ಜನ್ಮದಿನ ಆಚರಿಸುವ ಮೂಲಕ ರಾಜ್ಯದಲ್ಲಿ ಮತ್ತೊಮ್ಮೆ ಬಿಜೆಪಿಯನ್ನು ಅಧಿಕಾರಕ್ಕೆ ತರುವ ನಿಟ್ಟಿನಲ್ಲಿ ಕಾರ್ಯೋನ್ಮುಖರಾಗಲು, ಕಾರ್ಯಕರ್ತರಲ್ಲಿ ಆತ್ಮವಿಶ್ವಾಸ ಮೂಡಿಸುವ ನಿರ್ಣಯ ಕೈಗೊಳ್ಳಲಾಗಿದೆ ಎಂದು ಸಭೆಯ ನಂತರ ಸುದ್ದಿಗೋಷ್ಠಿಯಲ್ಲಿ ಮಾಜಿ ಸಚಿವ ಎಂ.ಪಿ.ರೇಣುಕಾಚಾರ್ಯ ತಿಳಿಸಿದರು.
ಸಭೆ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ರೇಣುಕಾಚಾರ್ಯ, ಫೆ.27ರಂದು ದಾವಣಗೆರೆಯಲ್ಲಿ ಯಡಿಯೂರಪ್ಪ ಜನ್ಮದಿನ ಆಚರಣೆಗೆ ನಿರ್ಧಾರ ಮಾಡಲಾಗಿದೆ. ಯಡಿಯೂರಪ್ಪ ಅಭಿಮಾನಿಗಳ ಬಳಗದ ಹೆಸರಿನಲ್ಲಿ ಈ ಜನ್ಮದಿನೋತ್ಸವ ಕಾರ್ಯಕ್ರಮ ಆಯೋಜಿಸಲಾಗುತ್ತೆ. ಸಭೆ ಸೇರಿದ ಹತ್ತು ಜನರ ಒಂದು ಸಮಿತಿ ಮಾಡಲಾಗಿದೆ. ಈ ಸಮಿತಿ ರಾಜ್ಯಾದ್ಯಂತ ಪ್ರವಾಸ ಮಾಡಲಿದೆ. ನಮ್ಮಲ್ಲಿ ಭಿನ್ನಮತವಿಲ್ಲ, ಮುಂದಿನ ಚುನಾವಣೆಯಲ್ಲಿ 140 ಸ್ಥಾನ ಗೆಲ್ತೇವೆ. ಸಭೆಯಲ್ಲಿ ದೆಹಲಿಗೆ ಹೋಗುವ ಬಗ್ಗೆ ಅಭಿಪ್ರಾಯ ತಿಳಿಸಲಾಗಿದೆ ಎಂದು ತಿಳಿಸಿದರು. ವಿಜಯೇಂದ್ರ ಹೆಸರಲ್ಲಿ ಪೂಜೆ:
ಸಭೆಗೂ ಮೊದಲು ಮಾಜಿ ಶಾಸಕರು, ಮಾಜಿ ಸಚಿವರು ನಗರದ ಶ್ರೀ ದುಗ್ಗಮ್ಮ ದೇವಿ ದೇವಸ್ಥಾನಕ್ಕೆ ತೆರಳಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಹೆಸರಲ್ಲಿ ವಿಶೇಷ ಪೂಜೆ ಸಲ್ಲಿಸಿದರು. ಮಾಜಿ ಸಚಿವರಾದ ಎಂ.ಪಿ. ರೇಣುಕಾಚಾರ್ಯ, ಎಸ್.ಎ. ರವೀಂದ್ರನಾಥ್, ಕಟ್ಟಾ ಸುಬ್ರಹ್ಮಣ್ಯ ನಾಯ್ಡು, ಹರತಾಳು ಹಾಲಪ್ಪ ಇತರ ಮುಖಂಡರ ನೇತೃತ್ವದಲ್ಲಿ ಸಭೆ ಆಯೋಜಿಸಲಾಗಿತ್ತು.