ದಾವಣಗೆರೆ: ಬೇತೂರು ರಸ್ತೆಯ ವೆಂಕಾ ಭೋವಿ ಕಾಲೋನಿಯಲ್ಲಿ ಪ್ರತಿಷ್ಠಾಪನೆ ಮಾಡಿದ್ದ ಗಣೇಶ ಮೂರ್ತಿಯ ಮೆರವಣಿಗೆ ಸಂದರ್ಭದಲ್ಲಿ ಗುರುವಾರ ರಾತ್ರಿ ನಡೆದ ಕಲ್ಲು ತೂರಾಟ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವತ್ತಕ್ಕೂ ಹೆಚ್ಚು ಜನರನ್ನು ವಶಕ್ಕೆ ಪಡೆಯಲಾಗಿದೆ. 14 ಕ್ಕೂ ಹೆಚ್ಚು ಜನರನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.
ಬೇತೂರು ರಸ್ತೆಯ ವೆಂಕಾಭೋವಿ ಕಾಲೋನಿಲ್ಲಿ ಪ್ರತಿಷ್ಠಾಪಿಸಲಾಗಿದ್ದ ಗಣೇಶನ ಮೆರವಣಿಗೆ ಮೇಲೆ ನಡೆದ ಕಲ್ಲು ತೂರಾಟ ನಡೆದಿತ್ತು. ಪೊಲೀಸರು ಸಕಾಲಿಕ ಕಾರ್ಯಾಚರಣೆ ನಡೆಸಿ ಪರಿಸ್ಥಿತಿಯನ್ನು ನಿಯಂತ್ರಣಗೊಳಿಸಿದ್ದರು.
ಗುರುವಾರ ತಡರಾತ್ರಿಯಿಂದಲೇ ಕಾರ್ಯಾಚರಣೆಗೆ ಇಳಿದ ಪೊಲೀಸರು ಮೂವತ್ತಕ್ಕೂ ಹೆಚ್ಚು ಜನರ ವಶಕ್ಕೆ ಪಡೆದು, 14 ಕ್ಕೂ ಹೆಚ್ಚು ಜನರನ್ನು ನ್ಯಾಯಾಧೀಶರ ಮುಂದೆ ಹಾಜರು ಪಡಿಸಿ, ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದರು.
ಶುಕ್ರವಾರ ಬೆಳಗ್ಗೆ ಹೆಚ್ಚುವರಿ ಪೊಲೀಸ್ ಮಹಾ ನಿರ್ದೇಶಕ (ಕಾನೂನು ಮತ್ತು ಸುವ್ಯವಸ್ಥೆ) ಆರ್. ಹಿತೇಂದ್ರ ದಾವಣಗೆರೆಗೆ ಭೇಟಿ ನೀಡಿ, ಪರಿಶೀಲನೆ ನಡೆಸಿದರು. ಪರಿಸ್ಥಿತಿ ಸಂಪೂರ್ಣ ನಿಯಂತ್ರಣದಲ್ಲಿದೆ. ದಾವಣಗೆರೆಯಲ್ಲಿ ಎಂದಿನಂತೆ ಜನಜೀವನ ಇದೆ. ಎಂದಿನಂತೆ ವ್ಯಾಪಾರ ವಹಿವಾಟು ನಡೆದವು. ಶಾಲಾ ಕಾಲೇಜು ನಡೆದವು.
ಪೊಲೀಸರು ಅಮಾಯಕರನ್ನೂ ವಶಕ್ಕೆ ಪಡೆದಿದ್ದಾರೆ ಎಂಬ ಆರೋಪವೂ ಕೇಳಿ ಬಂದಿದೆ. ಗಣೇಶನ ಮೂರ್ತಿ ಪ್ರತಿಷ್ಠಾಪನೆ ಮಾಡಿದ್ದಂತಹ ಐವರನ್ನು ಪೊಲೀಸರು ಕರೆದುಕೊಂಡು ಹೋಗಿದ್ದಾರೆ ಎಂದು ಕುಟುಂಬಸ್ಥರು ಅಳಲು ತೋಡಿಕೊಂಡರು.