ದಾವಣಗೆರೆ : “ಆಜಾದಿ ಕಾ ಅಮೃತ್ ಮಹೋತ್ಸವ’ ಅಂಗವಾಗಿ ಈ ಬಾರಿಯ ಸ್ವಾತಂತ್ರ್ಯ ದಿನಾಚರಣೆಯನ್ನು ಕೋವಿಡ್ ಮಾರ್ಗಸೂಚಿಯೊಂದಿಗೆ ಸರಳ ಮತ್ತು ಅರ್ಥಪೂರ್ಣವಾಗಿ ಆಚರಿಸಲು ಜಿಲ್ಲಾಡಳಿತ ನಿರ್ಧರಿಸಿದೆ.
ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ 75ನೇ ಸ್ವಾತಂತ್ರ್ಯ ದಿನಾಚರಣೆ ಮತ್ತು ಕೋವಿಡ್-19 ನಿಯಂತ್ರಣದ ಕುರಿತು ಏರ್ಪಡಿಸಿದ್ದ ಸಭೆಯಲ್ಲಿ ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ ಮಾತನಾಡಿ, ಈಗಾಗಲೇ ರಾತ್ರಿ 9 ರಿಂದ ಬೆಳಿಗ್ಗೆ 10 ವರೆಗೆ ರಾತ್ರಿ ಕರ್ಫ್ಯೂ ಜಾರಿಯಲ್ಲಿರುವುದರಿಂದ ಸಾರ್ವಜನಿಕರ ಸಹಕಾರ ಮುಖ್ಯ. ಸ್ವಾತಂತ್ರ್ಯ ದಿನಾಚರಣೆಯಂದು ಕೋವಿಡ್ ಮಾರ್ಗಸೂಚಿಗಳ ಅನ್ವಯ ಆ ದಿನ ಸಂಜೆ ಯಾವುದೇ ಸಾಂಸ್ಕೃತಿಕ ಕಾರ್ಯಕ್ರಮಗಳು ಇರುವುದಿಲ್ಲ ಎಂದು ತಿಳಿಸಿದರು.
ಈ ಬಾರಿ ಜಿಲ್ಲೆಯಲ್ಲಿ 20,454 ಮಕ್ಕಳು ಎಸ್ಸೆಸ್ಸೆಲ್ಸಿ ಪರೀಕ್ಷೆ ಬರೆದಿದ್ದು ಎಲ್ಲರೂ ಉತ್ತೀರ್ಣರಾಗಿದ್ದಾರೆ. 4 ಮಕ್ಕಳು 625ಕ್ಕೆ 625 ಅಂಕಗಳನ್ನು ಪಡೆದುಕೊಂಡಿದ್ದು, ಸ್ವಾತಂತ್ರ್ಯ ದಿನಾಚರಣೆಯಂದು ಈ ಮಕ್ಕಳಿಗೆ ಸನ್ಮಾನ ಮಾಡಲಾಗುವುದು. 444 ಶಾಲೆಗಳಲ್ಲಿ 423 ಶಾಲೆಗಳು ಎ ಶ್ರೇಣಿ, 21 ಶಾಲೆಗಳು ಬಿ ಶ್ರೇಣಿಯಲ್ಲಿವೆ ಹಾಗೂ 2732 ವಿದ್ಯಾರ್ಥಿಗಳು ಎ+ ಶ್ರೇಣಿಯಲ್ಲಿ, 7351 ಎ ಶ್ರೇಣಿಯಲ್ಲಿ, 8326 ವಿದ್ಯಾರ್ಥಿಗಳು ಬಿ ಶ್ರೇಣಿಯಲ್ಲಿ, 2045 ವಿದ್ಯಾರ್ಥಿಗಳು ಸಿ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ ಎಂದು ಜಿಲ್ಲಾಧಿಕಾರಿಗಳು ಮಾಹಿತಿ ನೀಡಿದರು.
ಪ್ರಸ್ತುತ ಕೋವಿಡ್‌ಎರಡನೇ ಅಲೆಯ ಭೀತಿ ಇನ್ನೂ ಕಡಿಮೆಯಾಗಿಲ್ಲ. ಮತ್ತೂಂದೆಡೆ ಮೂರನೇ ಅಲೆ ಯಾವುದೇ ಸಂದರ್ಭದಲ್ಲಿ ಜನರ ಜೀವನವನ್ನು ಮತ್ತಷ್ಟು ಹೈರಾಣಗೊಳಿಸುವ ಸಾಧ್ಯತೆಯಿದೆ. ದೇವಸ್ಥಾನಗಳಲ್ಲಿ ದೇವರ ದರ್ಶನ ಹೊರತುಪಡಿಸಿ ಸೇವೆ, ಪ್ರಸಾದ, ಮುಡಿ ತೆಗೆಯುವುದನ್ನು ನಿಷೇಧಿಸಲಾಗಿದೆ. ಜಾತ್ರೆ, ಉತ್ಸವ, ಮೆರವಣಿಗೆ ಮತ್ತು ಧಾರ್ಮಿಕ ಸಭೆ, ಸಮಾರಂಭಗಳನ್ನು ನಿರ್ಬಂಧಿಸಲಾಗಿದೆ ಎಂದರು.
ಅಪರ ಜಿಲ್ಲಾಧಿಕಾರಿ ಪೂಜಾರ್ ವೀರಮಲ್ಲಪ್ಪ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸಿ.ಬಿ. ರಿಷ್ಯಂತ್, ಜಿಲ್ಲಾ ಆರೋಗ್ಯಾಧಿಕಾರಿ ಡಾ| ನಾಗರಾಜ್ ಸೇರಿದಂತೆ ಮತ್ತಿತರರು ಸಭೆಯಲ್ಲಿದ್ದರು.