Advertisement

Davanagere; ಲಿಂಗಾಯತ ಪಂಚಮಸಾಲಿ ಸಮಾಜಕ್ಕೆ 2ಎ ಮೀಸಲಾತಿಗೆ ಒತ್ತಾಯಿಸಿ ಪ್ರತಿಭಟನೆ

04:08 PM Nov 10, 2023 | Team Udayavani |

ದಾವಣಗೆರೆ: ಲಿಂಗಾಯತ ಪಂಚಮಸಾಲಿ ಸಮಾಜಕ್ಕೆ 2ಎ ಮೀಸಲಾತಿ ಅನುಷ್ಠಾನ ಹಾಗೂ ಲಿಂಗಾಯತ ಉಪಸಮಾಜಗಳನ್ನು ಹಿಂದುಳಿದ ವರ್ಗಗಳ ಪಟ್ಟಿಗೆ ಸೇರ್ಪಡೆ ಮಾಡಲು ಕೇಂದ್ರಕ್ಕೆ ಶಿಫಾರಸು ಮಾಡಬೇಕು ಎಂದು ಒತ್ತಾಯಿಸಿ ಕೂಡಲಸಂಗಮ ಲಿಂಗಾಯತ ಪಂಚಮಸಾಲಿ ಪೀಠದ ಬಸವಜಯ ಮೃತ್ಯುಂಜಯ ಸ್ವಾಮೀಜಿ ನೇತೃತ್ವದಲ್ಲಿ ಶುಕ್ರವಾರ ನಗರದ ಹೊರವಲಯದ  ವಿಶ್ವಾರಾಧ್ಯ ಕ್ಯಾನ್ಸರ್ ಆಸ್ಪತ್ರೆ ಬಳಿ ರಾಷ್ಟ್ರೀಯ ಹೆದ್ದಾರಿ-4 ರಲ್ಲಿ ಸಾಮೂಹಿಕ ಇಷ್ಟಲಿಂಗ ಪೂಜೆ, ಹೆದ್ದಾರಿ ತಡೆ ನಡೆಸಲಾಯಿತು.

Advertisement

ಲಿಂಗಾಯತ ಪಂಚಮಸಾಲಿ ಸಮಾಜಕ್ಕೆ 2ಎ ಮೀಸಲಾತಿ ಅನುಷ್ಠಾನ ಹಾಗೂ ಲಿಂಗಾಯತ ಉಪಸಮಾಜಗಳನ್ನು ಹಿಂದುಳಿದ ವರ್ಗಗಳ ಪಟ್ಟಿಗೆ ಸೇರ್ಪಡೆ ಮಾಡಲು ಕೇಂದ್ರಕ್ಕೆ ಶಿಫಾರಸು ಮಾಡಬೇಕು ಎಂದು ಒತ್ತಾಯಿಸಿ ಆರನೇ ಹಂತದ ಹೋರಾಟವಾಗಿ ರಾಷ್ಟ್ರೀಯ ಹೆದ್ದಾರಿ ತಡೆ ಮತ್ತು ಸಾಮೂಹಿಕ ಇಷ್ಟಲಿಂಗ ಪೂಜೆ ನಡೆಸುವ ಮೂಲಕ ಸರ್ಕಾರದ ಗಮನ ಸೆಳೆಯಲಾಗುತ್ತಿದೆ.

ಬೆಳಗಾವಿಯಲ್ಲಿ ನಡೆಯುವ ಚಳಿಗಾಲದ ಅಧಿವೇಶನದೊಳಗೆ ಮುಖ್ಯಮಂತ್ರಿ ಅವರು ಮೀಸಲಾತಿ ವಿಚಾರವಾಗಿ ಗಮನ ಹರಿಸಬೇಕು. ಇಲ್ಲವಾದಲ್ಲಿ ಅಧಿವೇಶನದ ಒಳಗೇ ಇಷ್ಟಲಿಂಗ ಪೂಜೆ ನಡೆದರೂ ಅಚ್ಚರಿ ಪಡಬೇಕಾಗಿಲ್ಲ ಎಂದು ಶ್ರೀ ಜಯ ಮೃತ್ಯುಂಜಯ ಸ್ವಾಮೀಜಿ ಎಚ್ಚರಿಸಿದರು.

ಕಳೆದ ಮೂರು ವರ್ಷದಿಂದ ಮೀಸಲಾತಿ ಕೋರಿ ವಿವಿಧ ಹಂತದ ಹೋರಾಟ ನಡೆಸಲಾಗಿದೆ. ಈಗ ಸಾಮೂಹಿಕ ಇಷ್ಟಲಿಂಗ ಪೂಜೆ ಮೂಲಕ ಹೋರಾಟ ನಡೆಸಲಾಗುತ್ತಿದೆ. ಎಲ್ಲಿಯೂ ದೇವರ ಪೂಜೆಯ ಮೂಲಕ ಹೋರಾಟ ನಡೆಸಿಲ್ಲ. ಲಿಂಗಾಯತ ಪಂಚಮಸಾಲಿ ಸಮಾಜದವರು ಶಾಂತಿ ಪ್ರಿಯರು. ಹಾಗಾಗಿ ದೇವರ ಪೂಜೆ ಮೂಲಕ ಹೋರಾಟ ನಡೆಸಲಾಗುವುದು. ಶಾಂತಿಯಿಂದ ಕ್ರಾಂತಿ ಮಾಡಲಾಗುವುದು. ಕಾಂಗ್ರೆಸ್ ಸರ್ಕಾರ ಮೀಸಲಾತಿ ನೀಡದೆ ಹೋದಲ್ಲಿ ಮುಂದಿನ ಲೋಕಸಭಾ ಚುನಾವಣೆಯಲ್ಲಿ ವ್ಯತಿರಿಕ್ತ ಪರಿಣಾಮ ಎದುರಿಸಬೇಕಾಗುತ್ತದೆ ಎಂದು ಎಚ್ಚರಿಸಿದರು.

ಸಮಾಜದ ಹಕ್ಕೊತ್ತಾಯ ಪತ್ರ ಸ್ವೀಕರಿಸಿದ ಅರಣ್ಯ ಸಚಿವ ಈಶ್ವರ ಖಂಡ್ರೆ ಮಾತನಾಡಿ, ಲಿಂಗಾಯತ ಪಂಚಮಸಾಲಿ ಸಮಾಜದ ನ್ಯಾಯಯುತ ಬೇಡಿಕೆಯ ಬಗ್ಗೆ ಮುಖ್ಯಮಂತ್ರಿಗಳು, ಪಕ್ಷದ ವರಿಷ್ಠರ ಗಮನಕ್ಕೆ ತರಲಾಗುವುದು.‌ ಸಚಿವ ಸಂಪುಟ ಸಭೆಯಲ್ಲೂ ಚರ್ಚೆ ಮಾಡಲಾಗುವುದು ಎಂಬ ಭರವಸೆ ನೀಡಿದರು.

Advertisement

ಮಾಜಿ ಶಾಸಕ ಎಚ್.ಎಸ್. ಶಿವಶಂಕರ್, ‌ಮಾಜಿ ಮೇಯರ್ ಬಿ.ಜಿ. ಅಜಯ್ ಕುಮಾರ್, ಜಿಲ್ಲಾ ಪಂಚಾಯತ ಮಾಜಿ ಸದಸ್ಯ ತೇಜಸ್ವಿ ಪಟೇಲ್, ಅಶೋಕ್ ಗೋಪನಾಳ್, ಎಸ್‌. ಕೆ. ಚಂದ್ರಶೇಖರ್,‌ ಎಸ್. ಓಂಕಾರಪ್ಪ, ಹುಚ್ಚಪ್ಪ ಮಾಸ್ತರ್ ಇತರರು ಇದ್ದರು. ಅರ್ಧಗಂಟೆಗೂ ಹೆಚ್ಚು ಕಾಲ ರಸ್ತೆ ತಡೆ, ಸಾಮೂಹಿಕ ಇಷ್ಟಲಿಂಗ ಪೂಜೆ ನಡೆಯಿತು.

 

Advertisement

Udayavani is now on Telegram. Click here to join our channel and stay updated with the latest news.

Next