ದಾವಣಗೆರೆ: ಸರ್ವೋಚ್ಚ ನ್ಯಾಯಾಲಯದ ತೀರ್ಪಿನ ಆದೇಶದಂತೆ ಒಳ ಮೀಸಲಾತಿ ಜಾರಿಗೊಳಿಸಬೇಕು ಎಂದು ಒತ್ತಾಯಿಸಿ ಅ. 23 ರಂದು ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳ ಲಾಗಿದೆ ಎಂದು ಜಿಲ್ಲಾ ಮಾದಿಗ ಛಲವಾದಿ ಸಮುದಾಯಗಳ ಒಕ್ಕೂಟದ ರವಿನಾರಾಯಣ್ ತಿಳಿಸಿದರು.
ಭಾನುವಾರ ಸುದ್ದಿಗೋಷ್ಠಿಯಲ್ಲಿ ಈ ವಿಷಯ ತಿಳಿಸಿದ ಅವರು, ಅಂದು ಬೆಳಗ್ಗೆ 10ಕ್ಕೆ ಡಾ. ಬಿ.ಆರ್. ಅಂಬೇಡ್ಕರ್ ವೃತ್ತದಿಂದ ಪ್ರತಿಭಟನಾ ಮೆರವಣಿಗೆ ಪ್ರಾರಂಭಿಸಲಾಗುವುದು ಎಂದು ತಿಳಿಸಿದರು.
ಜಯದೇವ ವೃತ್ತ, ಅಶೋಕ ರಸ್ತೆ, ಉಪ ವಿಭಾಗಾಧಿಕಾರಿ ಕಚೇರಿಯವರೆಗೆ ಮೆರವಣಿಗೆ ನಡೆಸಿ ಜಿಲ್ಲಾಡಳಿತದ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಲಾಗುವುದು ಎಂದು ತಿಳಿಸಿದರು.
ಮಾದಿಗ ಸಮುದಾಯದ ಜನಸಂಖ್ಯೆ ಆಧಾರದಲ್ಲಿ ಒಳ ಮೀಸಲಾತಿ ವರ್ಗೀಕರಣ ಮಾಡಲು ಒತ್ತಾಯಿಸಿ ಕಳೆದ ಮೂರು ದಶಕದಿಂದ ನಡೆಸಿದ ನಿರಂತರ ಹೋರಾಟದ ಫಲವಾಗಿ ಈಗ ಒಳ ಮೀಸಲಾತಿ ದೊರಕುವ ಸಮಯ ಬಂದಿದೆ. ಸರ್ವೋಚ್ಚ ನ್ಯಾಯಾಲಯ ಅ. 1 ರಂದು ಒಳ ಮೀಸಲಾತಿ ಕಲ್ಪಿಸುವ ಅಧಿಕಾರ ಮತ್ತು ಹೊಣೆಗಾರಿಕೆ ಆಯಾಯ ರಾಜ್ಯ ಸರ್ಕಾರಗಳಿಗೆ ಇದೆ ಎಂಬುದನ್ನು ಸ್ಪಷ್ಟವಾಗಿ ತಿಳಿಸಿದೆ. ಅದರ ಅನ್ವಯ ರಾಜ್ಯ ಸರ್ಕಾರ ಕೂಡಲೇ ಒಳ ಮೀಸಲಾತಿ ಸೌಲಭ್ಯ ಒದಗಿಸಬೇಕು ಎಂದು ಒತ್ತಾಯಿಸಿದರು.
ನಿವೃತ್ತ ಜಿಲ್ಲಾ ಪೊಲೀಸ್ ಅಧೀಕ್ಷಕ ಎನ್. ರುದ್ರಮುನಿ ಮಾತನಾಡಿ, ಒಳ ಮೀಸಲಾತಿ ನೀಡದೇ ಇರುವುದರಿಂದ ಅನೇಕ ಸಮುದಾಯಗಳಿಗೆ ಅನ್ಯಾಯ ಆಗುತ್ತಿದೆ. ತುಟಿ ಮೇಲಿನ ಅನುಕಂಪ ಬೇಕಾಗಿಲ್ಲ. ಸುಪ್ರೀಂ ಕೋರ್ಟ್ ನ ಸಾಂವಿಧಾನಿಕ ಪೀಠ ನೀಡಿರುವ ತೀರ್ಪು ನಂತೆ ಕೂಡಲೇ ಒಳ ಮೀಸಲಾತಿ ಜಾರಿ ಮಾಡಬೇಕು. ಅಲ್ಲಿಯವರೆಗೆ ರಾಜ್ಯದಲ್ಲಿ ನಡೆಯುವ ಎಲ್ಲ ಸರ್ಕಾರಿ ಮತ್ತು ಅರೆ ಸರ್ಕಾರಿ ನೇಮಕಾತಿ ಸ್ಥಗಿತಗೊಳಿಸಬೇಕು. ಹಣಕಾಸಿನ ಮತ್ತು ಇತರೆ ಸೌಲಭ್ಯಗಳನ್ನು ನಿಲ್ಲಿಸಬೇಕು ಎಂದು ಒತ್ತಾಯಿಸಿದರು.
ಈಗಾಗಲೇ ಸರ್ಕಾರದಲ್ಲಿ ಇರುವ ಲಭ್ಯವಿರುವ ದತ್ತಾಂಶಗಳ ಆಧಾರದಲ್ಲಿ ಒಳ ಮೀಸಲಾತಿ ನೀಡುವುದಕ್ಕೆ ಯಾವುದೇ ಅಡ್ಡಿ ಆತಂಕ ಇಲ್ಲ. ಆದರೂ, ಸರ್ಕಾರ ಮೀನಾಮೇಷ ಎಣಿಸುತ್ತಿರುವುದನ್ನು ಒಕ್ಕೂಟ ತೀವ್ರವಾಗಿ ಖಂಡಿಸುತ್ತದೆ. ಸರ್ಕಾರ ಈಗ ನಡೆಸುತ್ತಿರುವ ಹೋರಾಟಕ್ಕೆ ಸ್ಪಂದಿಸದಿ ದ್ದಲ್ಲಿ ಮುಂದಿನ ದಿನಗಳಲ್ಲಿ ಅಮರಣಾಂತ ಉಪವಾಸ ಸತ್ಯಾಗ್ರಹ ಒಳಗೊಂಡಂತೆ ತೀವ್ರ ಸ್ವರೂಪದ ಹೋರಾಟ ನಡೆಸಲಾಗುವುದು ಎಂದು ಎಚ್ಚರಿಸಿದರು.
ಒಳ ಮೀಸಲಾತಿ ಜಾರಿಗೆ ಬರುವವರೆಗೂ ಹೋರಾಟ ನಿಲ್ಲಿಸುವ ಮಾತೇ ಇಲ್ಲ. ಒಳ ಮೀಸಲಾತಿ ಜಾರಿಗೊಳಿಸಲೇಬೇಕು ಎಂದು ಒತ್ತಾಯಿಸಿದರು.
ನಿವೃತ್ತ ಜಿಲ್ಲಾ ಪೊಲೀಸ್ ಅಧೀಕ್ಷಕ ಎನ್. ರುದ್ರಮುನಿ, ಬಿ.ಎಸ್. ಪುರುಷೋತ್ತಮ್, ಎಚ್. ಮಲ್ಲೇಶ್, ಬಿ.ಎಚ್. ಉದಯ್ ಕುಮಾರ್, ಎಂ. ಹಾಲೇಶ್, ಎಲ್.ಎಚ್. ಸಾಗರ್, ಆಲೂರು ನಿಂಗರಾಜ್, ಬಿ.ಎಂ. ನಿರಂಜನ್, ಹೆಗ್ಗೆರೆ ರಂಗಪ್ಪ, ಕೆ.ಎಸ್. ಗೋವಿಂದರಾಜ್, ಎಸ್. ಮಲ್ಲಿಕಾರ್ಜುನ್, ಎಚ್.ಕೆ. ಬಸವರಾಜ್, ಕೆ. ಏಕಾಂತಪ್ಪ, ಕುಂದುವಾಡ ಮಂಜುನಾಥ್, ನಾಗಭೂಷಣ್, ಓಂಕಾರಪ್ಪ, ಸೋಮಲಾಪುರ ಹನುಮಂತಪ್ಪ ಇತರರು ಇದ್ದರು.