ದಾವಣಗೆರೆ: ಕೋವಿಡ್ ವೈರಸ್ ಸೋಂಕು ಚಿಕಿತ್ಸೆಗೆಂದೇ ವ್ಯವಸ್ಥೆ ಮಾಡಿಕೊಡಿರುವ ಜಿಲ್ಲಾ ಕೋವಿಡ್ ಆಸ್ಪತ್ರೆಗೆ (ಜಿಲ್ಲಾ ಚಿಗಟೇರಿ ಸರ್ಕಾರಿ ಆಸ್ಪತ್ರೆ) ಶುಕ್ರವಾರ ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹನುಮಂತರಾಯ ಭೇಟಿ ನೀಡಿ ಅಲ್ಲಿನ ಸೌಲಭ್ಯಗಳ ಬಗ್ಗೆ ಪರಿಶೀಲನೆ ನಡೆಸಿದರು.
ಕೋವಿಡ್ ವೈರಸ್ ಸೋಂಕು ಖಚಿತಪಟ್ಟ ಮೂವರು ಈಗಾಗಲೇ ಚಿಕಿತ್ಸೆಯಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಮನೆಗೆ ತೆರಳಿದ್ದಾರೆ. ಸೋಂಕಿತರಲ್ಲಿ ಚಿತ್ರದುರ್ಗ ಜಿಲ್ಲೆಯಿಂದ ಚಿಕಿತ್ಸೆಗೆ ಸ್ಥಳಾಂತರಿಸಿದ್ದ ಒಂದು ಪ್ರಕರಣ ಸಹ ಒಳಗೊಂಡಿದೆ. ಆ ಮೂರು ಪ್ರಕರಣ ಹೊರತಾಗಿ ಜಿಲ್ಲೆಯಲ್ಲಿ ಇದುವರೆಗೂ ಯಾವುದೇ ಹೊಸ ಪ್ರಕರಣ ಪತ್ತೆಯಾಗಿಲ್ಲ. ಹಾಗಾಗಿ ಕೊರೊನಾ ವೈರಸ್ ಸೋಂಕು ಹರಡುವಿಕೆ ನಿಯಂತ್ರಿಸುವ ನಿಟ್ಟಿನಲ್ಲಿ ಸಾರ್ವಜನಿಕರ ಹಿತದೃಷ್ಟಿಯಿಂದ ಹೆಚ್ಚಿನ ರೀತಿ ಮುಂಜಾಗ್ರತಾ ಕ್ರಮ ಕೈಗೊಳ್ಳಲು ಆಸ್ಪತ್ರೆಯಲ್ಲಿನ ವೈದ್ಯರಿಂದ ಜಿಲ್ಲಾಧಿಕಾರಿ ಮಾಹಿತಿ ಪಡೆದರು.
ಕೋವಿಡ್ ವೈರಸ್ ಸೋಂಕಿತರಿಗೆ ಚಿಕಿತ್ಸೆ ನೀಡಲು ಸಿದ್ಧಪಡಿಸಿರುವ ಪ್ರತ್ಯೇಕ ವಿಶೇಷ ವಾರ್ಡ್‌ಗಳಿಗೆ ಭೇಟಿ ನೀಡಿ, ಪರಿಶೀಲಿಸಿದ ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ, ಜಿಲ್ಲಾ ಆಸ್ಪತ್ರೆಯಲ್ಲಿರುವ ಐಸೋಲೇಷನ್ ವಾರ್ಡ್‌ಗಳನ್ನು 100 ಬೆಡ್‌ಗಳ ವಾರ್ಡ್‌ಗಳಾಗಿ ಸಿದ್ಧಪಡಿಸಿಕೊಳ್ಳಬೇಕು. ಈ ಕಾರ್ಯಕ್ಕೆ ಸಂಬಂಧಿಸಿದಂತೆ ಎಷ್ಟೇ ಅನುದಾನ ಬೇಕಿದ್ದರೂ ಒದಗಿಸಲು ಕ್ರಮ ವಹಿಸಲಾಗುವುದು. ಜೊತೆಗೆ ಪ್ರತಿ ತಾಲೂಕುಗಳಲ್ಲಿ ಐಸೊಲೇಷನ್ ವಾರ್ಡ್ಗಳಲ್ಲಿ ಅಗತ್ಯಕ್ಕಿಂತ ಹೆಚ್ಚುವರಿ ಬೆಡ್‌ಗಳ ವ್ಯವಸ್ಥೆ ಮಾಡಿಕೊಳ್ಳಬೇಕು ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳಿಗೆ ಸೂಚಿಸಿದರು.
ಬಳಿಕ ಆಸ್ಪತ್ರೆಯ ತುರ್ತು ಚಿಕಿತ್ಸಾ ಕೇಂದ್ರ, ಪ್ರಯೋಗಾಲಯಗಳಿಗೆ ಭೇಟಿ ನೀಡಿದ ಜಿಲ್ಲಾಧಿಕಾರಿ ಅಲ್ಲಿನ ಸೌಲಭ್ಯ ಪರಿಶೀಲಿಸಿದರು. ನಂತರ ಆಸ್ಪತ್ರೆಯಲ್ಲಿನ ರೋಗಿಗಳನ್ನು ಮಾತನಾಡಿಸಿ ಆರೋಗ್ಯ ವಿಚಾರಿಸಿದರು. ಆಸ್ಪತ್ರೆಯ ಶುಚಿತ್ವಕ್ಕೆ ಒತ್ತು ನೀಡಬೇಕು ಎಂಬುದಾಗಿ ಅಲ್ಲಿನ ಸಿಬ್ಬಂದಿಗಳಿಗೆ ಸೂಚಿಸಿದರಲ್ಲದೆ, ಕೋವಿಡ್-19ರ ನಿಯಂತ್ರಣದಲ್ಲಿ ಕಾರ್ಯನಿರ್ವಹಿಸುತ್ತಿರುವ ಕೊರೊನಾ ಸೈನಿಕರು ನೀವು ಎಂದು ವೈದ್ಯಕೀಯ ಸಿಬ್ಬಂದಿ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು. ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ| ರಾಘವೇಂದ್ರಸ್ವಾಮಿ, ಜಿಲ್ಲಾ ಶಸ್ತ್ರಚಿಕಿತ್ಸಕ ಡಾ| ನಾಗರಾಜ್, ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ| ಜಿ.ಡಿ. ರಾಘವನ್, ಡಾ| ಶಶಿಧರ್ ಈ ಸಂದರ್ಭದಲ್ಲಿದ್ದರು.