Advertisement

ಜಿಲ್ಲಾಸ್ಪತ್ರೆಯಲ್ಲಿ ಕೋವಿಡ್‌-19 ಪ್ರಯೋಗಾಲಯ ಉದ್ಘಾಟನೆ

11:25 AM Jun 13, 2020 | Naveen |

ದಾವಣಗೆರೆ: ಜಿಲ್ಲಾ ಚಿಗಟೇರಿ ಆಸ್ಪತ್ರೆಯಲ್ಲಿ ಕೋವಿಡ್‌-19 ಪ್ರಯೋಗಾಲಯ ಪ್ರಾರಂಭದಿಂದ 3 ಶಿಫ್ಟ್‌ನಲ್ಲಿ ಒಟ್ಟು 200 ಸ್ಯಾಂಪಲ್‌ ಪರೀಕ್ಷೆ ಮಾಡುವುದರಿಂದ ಹೆಚ್ಚು ಉಪಯೋಗವಾಗಲಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಭೈರತಿ ಬಸವರಾಜ್‌ ತಿಳಿಸಿದ್ದಾರೆ.

Advertisement

ಶುಕ್ರವಾರ ಜಿಲ್ಲಾಸ್ಪತ್ರೆಯಲ್ಲಿ ಕೋವಿಡ್‌-19 ಪ್ರಯೋಗಾಲಯವನ್ನು ಉದ್ಘಾಟಿಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಹು ದಿನಗಳಿಂದ ಕೋವಿಡ್‌ ಲ್ಯಾಬ್‌ನ ಬೇಡಿಕೆ ಇತ್ತು. ಇಂದು ಪ್ರಯೋಗಾಲಯ ಉದ್ಘಾಟನೆಗೊಂಡಿರುವ ಹಿನ್ನೆಲೆಯಲ್ಲಿ ಸರ್ಕಾರದ ವತಿಯಿಂದ ಜಿಲ್ಲಾಡಳಿತಕ್ಕೆ ಅಭಿನಂದನೆ ಸಲ್ಲಿಸಲಾಗುವುದು ಎಂದರು.

ಜಿಲ್ಲಾ ಉಸ್ತುವಾರಿ ಸಚಿವನಾದ ಮೇಲೆ ದಾವಣಗೆರೆ ಜಿಲ್ಲೆಗೆ 15 ಬಾರಿ ಬಂದು ಹೋಗಿದ್ದೇನೆ. ಹಿಂದಿನ ಬಾರಿ ಬಂದಾಗ ಪರೀಕ್ಷಾ ಕೇಂದ್ರವನ್ನು ಉದ್ಘಾಟನೆ ಮಾಡಬೇಕು ಎಂದು ಹೇಳಿದಂತೆ ನೆರವೇರಿಸಲಾಗಿದೆ. 3 ಶಿಫ್ಟ್‌ನಲ್ಲಿ ಒಟ್ಟು 200 ಸ್ಯಾಂಪಲ್‌ ಪರೀಕ್ಷೆ ಮಾಡಬಹುದಾಗಿದೆ. ಜಿಲ್ಲೆಯಲ್ಲಿ ಒಟ್ಟು 3 ಪರೀಕ್ಷಾ ಕೇಂದ್ರಗಳನ್ನು ತೆರೆಯಲಾಗಿದೆ. ಇದರಿಂದ ಮುಂದಿನ ದಿನಗಳಲ್ಲಿ ಹೆಚ್ಚು ಉಪಯೋಗವಾಗಲಿದೆ ಎಂದರು.

ಹಿರಿಯ ನಾಗರಿಕರಿಗೆ ವಿಶೇಷವಾದ ಚಿಕಿತ್ಸೆಯ ಸೌಲಭ್ಯ ಒದಗಿಸುವ ನಿಟ್ಟಿನಲ್ಲಿ 1 ಕೋಟಿ ರೂ. ವೆಚ್ಚದಲ್ಲಿ 10 ಬೆಡ್‌ಗಳ ಹಿರಿಯ ನಾಗರಿಕರ ವಾರ್ಡ್‌ ನಿರ್ಮಾಣ ಮಾಡುವ ಕಾಮಗಾರಿಗೆ ಭೂಮಿಪೂಜೆ ನೆರವೇರಿಸಲಾಗಿದೆ. ಜಿಲ್ಲಾ ಚಿಗಟೇರಿ ಆಸ್ಪತ್ರೆಯನ್ನು ಮೇಲ್ದರ್ಜೆಗೇರಿಸಲು ಹಾಗೂ ಉನ್ನತೀಕರಿಸಲು 100 ಕೋಟಿ ರೂ. ಬೇಕಾಗುತ್ತದೆ ಎಂದು ಮುಖ್ಯಮಂತ್ರಿಗಳಲ್ಲಿ ಮನವಿ ಮಾಡಲಾಗಿದೆ. ಮುಂದಿನ ದಿನಗಳಲ್ಲಿ ಮಂಜೂರು ಮಾಡುವುದಾಗಿ ಅವರು ಭರವಸೆ ನೀಡಿದ್ದಾರೆ. ಮುಖ್ಯಮಂತ್ರಿಗಳಿಗೂ ಜಿಲ್ಲಾಡಳಿತದ ಪರವಾಗಿ ಧನ್ಯವಾದ ತಿಳಿಸುತ್ತೇನೆ ಎಂದು ಹೇಳಿದರು.

ಮುಂದಿನ 3 ವರ್ಷಗಳಲ್ಲಿ ಜಿಲ್ಲೆಗೆ ಸರ್ಕಾರಿ ಮೆಡಿಕಲ್‌ ಕಾಲೇಜು ತರುವ ಬಗ್ಗೆ ಪ್ರಯತ್ನ ಮಾಡುತ್ತೇನೆ. ಮುಂದಿನ ಬಜೆಟ್‌ನಲ್ಲಿ ಘೋಷಣೆ ಮಾಡಲು ಸಚಿವರು ಹಾಗೂ ಶಾಸಕರೊಂದಿಗೆ ಒಗ್ಗೂಡಿ ಒತ್ತಾಯ ಮಾಡುತ್ತೇನೆ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು. ಜಿಲ್ಲೆಯಲ್ಲಿ ಎಲ್ಲಾ ಕಾರ್ಯಕ್ರಮಗಳನ್ನು ಹಂತ ಹಂತವಾಗಿ ನಡೆಸಲಾಗುತ್ತಿದೆ. ಸಂಸದರು, ಶಾಸಕರು, ಜಿಲ್ಲಾಡಳಿತ ಹಾಗೂ ಇಲಾಖಾ ಅಧಿಕಾರಿಗಳೊಂದಿಗೆ ದಿನ ನಿತ್ಯ ಸಂಪರ್ಕದಲ್ಲಿರುವೆ ಎಂದು ಹೇಳಿದರು.

Advertisement

ಸಹಕಾರ ಸಚಿವ ಎಸ್‌.ಟಿ. ಸೋಮಶೇಖರ್‌, ಸಂಸದ ಜಿ.ಎಂ. ಸಿದ್ದೇಶ್ವರ್‌, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಎಂ.ಪಿ. ರೇಣುಕಾಚಾರ್ಯ, ಶಾಸಕರಾದ ಎಸ್‌.ಎ. ರವೀಂದ್ರನಾಥ್‌, ಪ್ರೊ| ಎನ್‌. ಲಿಂಗಣ್ಣ, ಮಾಡಾಳ್‌ ವಿರೂಪಾಕ್ಷಪ್ಪ, ಮೇಯರ್‌ ಬಿ.ಜಿ. ಅಜಯ್‌ಕುಮಾರ್‌, ದೂಡಾ ಅಧ್ಯಕ್ಷ ರಾಜನಹಳ್ಳಿ ಶಿವಕುಮಾರ್‌, ಜಿಲ್ಲಾಧಿಕಾರಿ ಮಹಾಂತೇಶ್‌ ಬೀಳಗಿ, ಜಿಲ್ಲಾ ರಕ್ಷಣಾಧಿಕಾರಿ  ಹನುಮಂತರಾಯ, ಎಸಿ ಡಾ| ಮಮತಾ ಹೊಸ್‌ಗೌಡರ್‌, ಜಿಲ್ಲಾ ಆರೋಗ್ಯಾಧಿಕಾರಿ ಡಾ| ಎಂ.ಎಸ್‌. ರಾಘವೇಂದ್ರ ಸ್ವಾಮಿ, ಜಿಲ್ಲಾ ಸರ್ಜನ್‌ ಡಾ| ನಾಗರಾಜ ಇತರರು ಇದ್ದರು.

ಮನವರಿಕೆ ಮಾಡಿಕೊಡುವೆ
ಬೆಂಬಲ ಬೆಲೆ ಯೋಜನೆಯಡಿ ಭತ್ತ ಖರೀದಿಗೆ ಜೂ. 30 ರವರೆಗೆ ಕಾಲಾವಕಾಶ ಇದೆ. ದಾವಣಗೆರೆ ಜಿಲ್ಲೆಯಲ್ಲಿ ರೈತರಿಂದ ಭತ್ತ ಖರೀದಿಸುವ ಬಗ್ಗೆ ಮನವರಿಕೆ ಮಾಡಿಕೊಡಲಾಗುವುದು. ಈಗ ಸಮಸ್ಯೆ ಇಲ್ಲ. ಸಮಸ್ಯೆಯಾದರೆ ಬಗೆಹರಿಸಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಭೈರತಿ ಬಸವರಾಜ್‌ ಪ್ರಶ್ನೆಯೊಂದಕ್ಕೆ ಉತ್ತರಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next