Advertisement

ಎಸ್ಸೆಸ್ಸೆಲ್ಸಿ ಪರೀಕ್ಷೆಗೆ ಸಕಲ ಸಿದ್ಧತೆ

11:51 AM Jun 03, 2020 | Naveen |

ದಾವಣಗೆರೆ: ಕೋವಿಡ್ ವೈರಸ್‌ ಹಿನ್ನೆಲೆಯಲ್ಲಿ ಎಲ್ಲಾ ಮುಂಜಾಗ್ರತಾ ಕ್ರಮಗಳೊಂದಿಗೆ ಎಸ್ಸೆಸ್ಸೆಲ್ಸಿ ಪರೀಕ್ಷೆ ನಡೆಸಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಯೂ ಆಗಿರುವ ಪ್ರಾಥಮಿಕ ಮತ್ತು ಪ್ರೌಢಶಾಲಾ ಶಿಕ್ಷಣ ಇಲಾಖೆಯ ಪ್ರಧಾನ ಕಾರ್ಯದರ್ಶಿ ಎಸ್‌.ಆರ್‌. ಉಮಾಶಂಕರ್‌ ತಿಳಿಸಿದ್ದಾರೆ.

Advertisement

ಜಿಲ್ಲಾಡಳಿತ ಭವನದ ತುಂಗಭದ್ರಾ ಸಭಾಂಗಣದಲ್ಲಿ ಮಂಗಳವಾರ ಎಸ್ಸೆಸ್ಸೆಲ್ಸಿ ಪರೀಕ್ಷೆಯ ಪೂರ್ವಸಿದ್ಧತೆಗಾಗಿ ಆಯೋಜಿಸಲಾಗಿದ್ದ ಶಿಕ್ಷಣ ಇಲಾಖೆಯ ಅಧಿಕಾರಿಗ ಸಭೆ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಜೂ.25ರಿಂದ ಆರಂಭವಾಗುವ ಎಸ್ಸೆಸ್ಸೆಲ್ಸಿ ಪರೀಕ್ಷೆಯಿಂದ ಯಾವುದೇ ವಿದ್ಯಾರ್ಥಿ ವಂಚಿತರಾಗದಂತೆ ಅಗತ್ಯ ಕ್ರಮ ಕೈಗೊಳ್ಳಬೇಕು. ಎಸ್ಸೆಸ್ಸೆಲ್ಸಿ ಪರೀಕ್ಷೆ ವಿದ್ಯಾರ್ಥಿ ಜೀವನದಲ್ಲಿ ಬಹಳ ಮುಖ್ಯವಾದ ಘಟ್ಟ. ವಿದ್ಯಾರ್ಥಿಗಳು ಯಾವುದೇ ಆತಂಕವಿಲ್ಲದೆ ಪರೀಕ್ಷೆ ಬರೆಯಲು ಮಾನಸಿಕವಾಗಿ ಸಿದ್ಧರಾಗಿರುವಂತೆ ಶಿಕ್ಷಣ ಇಲಾಖೆ ಅಗತ್ಯ ಸಿದ್ಧತೆ ಮಾಡಿಕೊಳ್ಳಬೇಕು ಎಂದು ಸೂಚಿಸಿದರು.

ಜೂ.25 ರಿಂದ ಜು.4ರವರೆಗೆ ನಡೆಯುವ ಪರೀಕ್ಷೆಯಲ್ಲಿ ಒಂದು ಕೊಠಡಿಯಲ್ಲಿ 18ರಿಂದ 20 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ. ಪ್ರತಿ ವಿದ್ಯಾರ್ಥಿಗೆ 2 ಮಾಸ್ಕ್ ಹಾಗೂ ಸ್ಯಾನಿಟೈಸರ್‌ ವಿತರಣೆ ಮಾಡಲಾಗುವುದು. ಎಲ್ಲಾ ಪರೀಕ್ಷಾ ಕೇಂದ್ರಗಳಲ್ಲಿ ಥರ್ಮಲ್‌ ಸ್ಕ್ರೀನಿಂಗ್‌ ವ್ಯವಸ್ಥೆ ಮಾಡಲಾಗುವುದು, ಸಾಮಾಜಿಕ ಅಂತರ ಒಳಗೊಂಡಂತೆ ಎಲ್ಲ ಅಗತ್ಯ ಕ್ರಮ ತೆಗೆದುಕೊಳ್ಳಲಾಗುವುದು ಎಂದು ತಿಳಿಸಿದರು.

ಬಹುದಿನಗಳಿಂದ ವಿದ್ಯಾರ್ಥಿಗಳು ಪರೀಕ್ಷೆ ಎದುರು ನೋಡುತ್ತಿದ್ದರು. ಈಗ ಪರೀಕ್ಷೆ ದಿನಾಂಕ ಪ್ರಕಟಗೊಂಡಿದೆ. ಬೇರೆ ರಾಜ್ಯಗಳಿಗೆ ಹೋಲಿಸಿದರೆ ರಾಜ್ಯದಲ್ಲಿ ಕೋವಿಡ್ ಸಂಖ್ಯೆ ಹೆಚ್ಚಿಲ್ಲ. ಕೆಲ ರಾಜ್ಯಗಳಲ್ಲಿ ಈಗಾಗಲೇ ಪರೀಕ್ಷೆ ನಡೆಸಲಾಗುತ್ತಿದೆ. ರಾಜ್ಯದಲ್ಲೂ ಪರೀಕ್ಷೆ ನಡೆಸಲು ಎಲ್ಲಾ ರೀತಿಯಿಂದಲೂ ಚರ್ಚಿಸಿ ಹಾಗೂ ಶಿಕ್ಷಣ ತಜ್ಞರ ಅಭಿಪ್ರಾಯ ಸಂಗ್ರಹಿಸಿ ಜೊತೆಗೆ ಅಧಿಕಾರಿಗಳ ಸಭೆ ನಡೆಸಿ ಸರ್ಕಾರ ನಿರ್ಧಾರ ಕೈಗೊಂಡಿದೆ. ಕೋವಿಡ್ ಬಗ್ಗೆ ವಿದ್ಯಾರ್ಥಿಗಳಲ್ಲಿ ಯಾವುದೇ ಆತಂಕ ಬೇಡ. ಬದಲಾಗಿ ಎಚ್ಚರಿಕೆಯಿಂದ ಇರಬೇಕು ಎಂದು ಎಂದು ತಿಳಿಸಿದರು.

ಲಾಕ್‌ಡೌನ್‌ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳಿಗೆ ತೊಂದರೆ ಆಗದಂತೆ ಖಾಸಗಿ ಶಾಲಾ ವಾಹನ ಬಳಸಿಕೊಳ್ಳಲು ತೀರ್ಮಾನಿಸಲಾಗಿದೆ. ಬಸ್  ಸಂಚಾರ ಇಲ್ಲದಿರುವೆಡೆ ವಿದ್ಯಾರ್ಥಿಗಳನ್ನು ಕರೆದುಕೊಂಡು ಪರೀಕ್ಷಾ ಕೇಂದ್ರಗಳಿಗೆ ಬಿಡಬೇಕು. ಬಳಿಕ ಅವರ ಕೇಂದ್ರಸ್ಥಾನದಿಂದ ಕರೆದುಕೊಂಡ ಹೋಗಬೇಕು ಎಂದರು.

Advertisement

ಬಹುತೇಕ ಜಿಲ್ಲೆಗಳಲ್ಲಿ ಹಾಗೂ ಗಡಿಭಾಗದಲ್ಲಿನ ಶಾಲೆಗಳು ಕ್ವಾರಂಟೈನ್‌ ಕೇಂದ್ರಗಳಾಗಿದ್ದುವು. ಅಂತಹ ಶಾಲೆಗಳು ಪರೀಕ್ಷಾ ಕೇಂದ್ರಗಳಾಗಿದ್ದಲ್ಲಿ ಅವುಗಳನ್ನು ಮೂರು ದಿನಗಳ ಮುಂಚಿತವಾಗಿ ಡಿಸ್‌ ಇನ್‌ಫೆಕ್ಷನ್‌ ಮಾಡಬೇಕು. ಜಾಲಿನಗರದ ದುರ್ಗಾಬಿಂಕಾ ಶಾಲೆ ಕಂಟೈನ್‌ಮೆಂಟ್‌ ಝೋನ್‌ನಲ್ಲಿರುವ ಕಾರಣಕ್ಕೆ ಪೂರಕ ಶಾಲೆ ಗೊತ್ತು ಮಾಡಲಾಗಿದೆ ಎಂದರು.

ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ ಮಾತನಾಡಿ, ವಿವಿಧ ಇಲಾಖೆಗಳ ಸಮನ್ವಯ ಸಾಧಿಸಿಕೊಂಡು ಸಹಕಾರದೊಂದಿಗೆ ಯಶಸ್ವಿಯಾಗಿ ಎಸ್ಸೆಸ್ಸೆಲ್ಸಿ ಪರೀಕ್ಷೆ ನಡೆಸಲಾಗುವುದುಎಂದರು.  ಡಿಡಿಪಿಐ ಸಿ.ಆರ್‌. ಪರಮೇಶ್ವರಪ್ಪ  ಮಾತನಾಡಿ, ಒಟ್ಟು 435 ಸರ್ಕಾರಿ ಶಾಲೆಗಳಲ್ಲಿ
1150 ಕೊಠಡಿಗಳ ವ್ಯವಸ್ಥೆ ಇದೆ, ಒಂದು ಕೊಠಡಿಯಲ್ಲಿ 18 ವಿದ್ಯಾರ್ಥಿಗಳಿಗೆ ಮಾತ್ರ ಪರೀಕ್ಷೆ ಬರೆಯಲು ಅವಕಾಶವಿದೆ. ಒಟ್ಟು 20.927 ಪರೀಕ್ಷಾರ್ಥಿಗಳಿದ್ದಾರೆ. 10.311 ಬಾಲಕರು, 10.616 ಬಾಲಕಿಯರಿದ್ದಾರೆ. ಸ್ಕೌಟ್‌ ಆ್ಯಂಡ್‌ ಗೈಡ್ಸ್‌ ಸಂಸ್ಥೆಯಿಂದ 22 ಸಾವಿರ ಮಾಸ್ಕ್ ನೀಡಲಾಗಿದೆ ಎಂದು ಮಾಹಿತಿ ನೀಡಿದರು.

Advertisement

Udayavani is now on Telegram. Click here to join our channel and stay updated with the latest news.

Next