ಚಿತ್ರದುರ್ಗ: ಪ್ರಧಾನಮಂತ್ರಿ ಆದರ್ಶ ಗ್ರಾಮ ಯೋಜನೆಯಡಿ ಆಯ್ಕೆಯಾಗಿರುವ ಗ್ರಾಮಗಳಲ್ಲಿ ಅಭಿವೃದ್ಧಿ ಕಾಮಗಾರಿಗಳನ್ನು ಈ ತಿಂಗಳೊಳಗೆ ಪೂರ್ಣಗೊಳಿಸಬೇಕು ಎಂದು ಜಿಲ್ಲಾಧಿಕಾರಿ ಕವಿತಾ ಎಸ್. ಮನ್ನಿಕೇರಿ, ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು.
ಪ್ರಧಾನಮಂತ್ರಿ ಆದರ್ಶ ಗ್ರಾಮ ಯೋಜನೆಯಡಿ ಆಯ್ಕೆಯಾಗಿರುವ ಗ್ರಾಮಗಳಲ್ಲಿ ಅಭಿವೃದ್ಧಿ ಕಾಮಗಾರಿಗಳ ಕ್ರಿಯಾ ಯೋಜನೆಗೆ ಅನುಮೋದನೆ ನೀಡಲು ನಗರದ ಜಿಲ್ಲಾಡಳಿತ ಕಚೇರಿ ಸಭಾಂಗಣದಲ್ಲಿ ನಡೆದ ಜಿಲ್ಲಾ ಮಟ್ಟದ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಪ್ರಧಾನಮಂತ್ರಿ ಆದರ್ಶ ಗ್ರಾಮ ಯೋಜನೆಯಡಿ ಆಯ್ಕೆಯಾಗಿರುವ ಗ್ರಾಮಗಳಲ್ಲಿ ಅಭಿವೃದ್ಧಿ ಕಾಮಗಾರಿಗಳು ಕುಂಠಿತಗೊಂಡಿವೆ. ಅಧಿಕಾರಿಗಳು ಸರ್ಕಾರ ನೀಡಿರುವ ಅನುದಾನವನ್ನು ಸಮರ್ಪಕವಾಗಿ ಬಳಸಿಕೊಂಡು ನಿಗದಿತ ಅವಧಿಯಲ್ಲಿ ಪೂರ್ಣಗೊಳಿಸಬೇಕು ಎಂದರು.
ಸಮಾಜಕಲ್ಯಾಣ ಇಲಾಖೆ ಉಪನಿರ್ದೇಶಕಿ ಮಮತಾ ಮಾತನಾಡಿ, ಭಾರತ ಸರ್ಕಾರದ ಸಾಮಾಜಿಕ ನ್ಯಾಯ ಹಾಗೂ ಸಬಲೀಕರಣ ಇಲಾಖೆಯ ವತಿಯಿಂದ ಅನುಷ್ಠಾನಗೊಳಿಸಲಾಗುತ್ತಿರುವ ಕೇಂದ್ರ ಪುರಸ್ಕೃತ ಯೋಜನೆಯಾದ ಪ್ರಧಾನಮಂತ್ರಿ ಆದರ್ಶ ಗ್ರಾಮ ಯೋಜನೆಯಡಿ ಜಿಲ್ಲೆಯಲ್ಲಿ 2018-19ನೇ ಸಾಲಿನಲ್ಲಿ ಶೇ. 50ಕ್ಕಿಂತ ಹೆಚ್ಚಿನ ಜನಸಂಖ್ಯೆ ಇರುವ ಪರಿಶಿಷ್ಟ ವರ್ಗದವರು ಇರುವ ಗ್ರಾಮಗಳನ್ನು ಆಯ್ಕೆ ಮಾಡಲಾಗಿದೆ. 2018-19ನೇ ಸಾಲಿಗೆ 7 ಗ್ರಾಮಗಳನ್ನು ಹಾಗೂ 2016-17ನೇ ಸಾಲಿನಲ್ಲಿ ಆಯ್ಕೆಯಾಗಿದ್ದ 40 ಗ್ರಾಮಗಳ ಪೈಕಿ ಹೆಚ್ಚುವರಿಯಾಗಿ 3 ಗ್ರಾಮಗಳನ್ನು ಮರು ಆಯ್ಕೆ ಮಾಡಲಾಗಿದೆ. ಹೊಸದಾಗಿ ಆಯ್ಕೆಯಾಗಿರುವ
7 ಗ್ರಾಮಗಳಿಗೆ ಸಂಬಂಧಿಸಿದಂತೆ ಪ್ರತಿ ಗ್ರಾಮದಲ್ಲಿ 40 ಲಕ್ಷ ರೂ. ಅಂದಾಜು ವೆಚ್ಚದಲ್ಲಿ ಹಾಗೂ ಹೆಚ್ಚುವರಿಯಾಗಿ ಆಯ್ಕೆಯಾಗಿರುವ 3 ಗ್ರಾಮಗಳಲ್ಲಿ ಪ್ರತಿ ಗ್ರಾಮಕ್ಕೆ 9.50 ಲಕ್ಷ ರೂ. ಅಂದಾಜು ವೆಚ್ಚದಲ್ಲಿ ಕಾಮಗಾರಿಗಳನ್ನು ಕೈಗೊಳ್ಳಲಾಗುತ್ತಿದೆ ಎಂದು ಮಾಹಿತಿ ನೀಡಿದರು.
2018-19ನೇ ಸಾಲಿನಲ್ಲಿ ಹೊಳಲ್ಕೆರೆ ತಾಲೂಕಿನ ಕಾಲಘಟ್ಟ, ಹಿರಿಯೂರು ತಾಲೂಕಿನ ಭರಮಗಿರಿ, ಮೊಳಕಾಲ್ಮೂರು ತಾಲೂಕಿನ ಚಿಕ್ಕೇರಹಳ್ಳಿ ಗ್ರಾಮಗಳು ಹೆಚ್ಚುವರಿಯಾಗಿ ಆದರ್ಶ ಗ್ರಾಮ ಯೋಜನೆಯಡಿ ಮರು ಆಯ್ಕೆ ಆಗಿವೆ. 2019-20ನೇ ಸಾಲಿಗೆ ಚಿತ್ರದುರ್ಗ, ಚಳ್ಳಕೆರೆ, ಹೊಸದುರ್ಗ, ಹೊಳಲ್ಕೆರೆ, ಹಿರಿಯೂರು ತಾಲೂಕಿನ 14 ಗ್ರಾಮಗಳು ಆಯ್ಕೆ ಆಗಿದ್ದು, ಪ್ರಸ್ತುತ 10 ಗ್ರಾಮಗಳಿಗೆ ಆದೇಶ ನೀಡಲಾಗಿದೆ. ಶಾಲಾ ಕೊಠಡಿ ನಿರ್ಮಾಣ, ಹೊಸ ಅಂಗನವಾಡಿ ಕಟ್ಟಡ ನಿರ್ಮಾಣ, ಅಂಗನವಾಡಿ ಕಟ್ಟಡಗಳ ದುರಸ್ತಿ, ಸಿ.ಸಿ. ರಸ್ತೆ ಮತ್ತು ಬಾಕ್ಸ್ ಚರಂಡಿ ನಿರ್ಮಾಣ, ಸಮುದಾಯ ಭವನ, ಶುದ್ಧ ಕುಡಿಯುವ ನೀರಿನ ಘಟಕ, ಬಯಲು ರಂಗಮಂದಿರ ನಿರ್ಮಾಣ, ಹೈಮಾಸ್ಟ್ ದೀಪ ಅಳವಡಿಕೆ, ಕ್ರೀಡಾ ಸಾಮಗ್ರಿಗಳು ಸೇರಿದಂತೆ ಇತರೆ ಅಭಿವೃದ್ಧಿ ಕಾಮಗಾರಿಗಳಿಗೆ ಅನುಮೋದನೆ ನೀಡಲಾಯಿತು.
ಸಭೆಯಲ್ಲಿ ಡಿಡಿಪಿಐ ಕೆ. ರವಿಶಂಕರ ರೆಡ್ಡಿ, ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಅನುಷ್ಠಾನ ಅಧಿ ಕಾರಿಗಳು ಹಾಜರಿದ್ದರು.