ಗದಗ: ಜಿಲ್ಲೆಯಲ್ಲಿ ಮತದಾರರ ಪಟ್ಟಿ ಪರಿಷ್ಕರಣೆಗೆ ಸಂಬಂ ಧಿಸಿದಂತೆ ಬಾಕಿ ಇರುವ ಅರ್ಜಿಗಳನ್ನು ಶೀಘ್ರವೇ ಇತ್ಯರ್ಥಗೊಳಿಸುವಂತೆ ರಾಜ್ಯ ಮುಖ್ಯ ಚುನಾವಣಾಧಿಕಾರಿ ಡಾ|ಸಂಜೀವ ಕುಮಾರ ಸೂಚಿಸಿದರು.
ಜಿಲ್ಲಾಧಿಕಾರಿ ಸಭಾಂಗಣದಲ್ಲಿ ಜರುಗಿದ ಮತದಾರರ ಪಟ್ಟಿ ಪರಿಷ್ಕರಣೆಗೆ ಸಂಬಂಧಿಸಿದ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಅರ್ಹತಾ ದಿನಾಂಕಕ್ಕೆ 18 ವರ್ಷ ಪೂರೈಸಿದ ಪ್ರತಿಯೊಬ್ಬರು ಮತದಾರರ ಪಟ್ಟಿಯಲ್ಲಿ ಸೇರ್ಪಡೆಗೊಳಿಸಲು ಅಗತ್ಯ ಕ್ರಮ ಜರುಗಿಸಬೇಕು. ಮತದಾರರ ಪಟ್ಟಿಯ ಪರಿಷ್ಕರಣೆಗೆ ಸಂಬಂಧಿ ಸಿದಂತೆ ಜಿಲ್ಲೆಯಲ್ಲಿ ಹಮ್ಮಿಕೊಳ್ಳಲಾದ ವಿಶೇಷ ಅಭಿಯಾನದಡಿ ಸ್ವೀಕರಿಸಿದ ಅರ್ಜಿಗಳನ್ನು ಪರಿಶೀಲಿಸಿ, ಅರ್ಹರನ್ನು ಮತದಾರರ ಪಟ್ಟಿಯಲ್ಲಿ ಸೇರ್ಪಡೆಗೊಳಿಸಿ ಎಪಿಕ್ ಕಾರ್ಡ್‌ಗಳನ್ನು ವಿತರಿಸಲು ಕ್ರಮ ಕೈಗೊಳ್ಳಬೇಕು ಎಂದು ಹೇಳಿದರು.
ಮತದಾರರ ಪಟ್ಟಿ ಪರಿಷ್ಕರಣೆ ಸಂದರ್ಭದಲ್ಲಿ ನಿಧನ ಹೊಂದಿದ ಮತದಾರರ ಹೆಸರನ್ನು ಮತದಾರರ ಪಟ್ಟಿಯಿಂದ ತೆಗೆದು ಹಾಕಬೇಕು. ಚುನಾವಣೆಗಳ ಸಂದರ್ಭದಲ್ಲಿ ವಿಕಲಚೇತನರು, ಎಂಬತ್ತು ವರ್ಷ ಮೇಲ್ಪಟ್ಟವರು ಹಾಗೂ ಕೋವಿಡ್ ಸೋಂಕಿತರಿಗೆ ಪೋಸ್ಟಲ್ ಬ್ಯಾಲೆಟ್ ನೀಡಲು ಅವಕಾಶ ಕಲ್ಪಿಸಲಾಗಿದೆ. ಇದಕ್ಕನುಗುಣವಾಗಿ ಪೂರ್ವ ಸಿದ್ಧತೆ ಮಾಡಿಟ್ಟುಕೊಳ್ಳಬೇಕು ಎಂದರು. ಮತದಾರರ ಗುರುತಿನ ಚೀಟಿ ಹೊಂದಿದವರೆಲ್ಲರೂ ಮತದಾರರ ಪಟ್ಟಿಯಲ್ಲಿ ತಮ್ಮ ಹೆಸರು ಇರುವುದರ ಕುರಿತು ಪರಿಶೀಲಿಸಲು ಈ-ಎಪಿಕ್ ತಂತ್ರಾಂಶ ಜಾರಿಗೆ ತರಲಾಗಿದ್ದು, ಈ ಕುರಿತು ಜಾಗೃತಿ ಮೂಡಿಸಲು ತಿಳಿಸಿದರು.
ಹದಿನೆಂಟು ವರ್ಷ ಪೂರೈಸಿದ ಯುವ ಮತದಾರರು ಹಾಗೂ ವಿಕಲಚೇತನ ಮತದಾರರ ಹೆಸರುಗಳನ್ನು ಮತದಾರರ ಪಟ್ಟಿಗೆ ಸೇರಿಸಲು ಆದ್ಯತೆ ನೀಡುವ ಮೂಲಕ ಎಲ್ಲರಿಗೂ ಮತದಾನದ ಹಕ್ಕು ಒದಗಿಸಬೇಕು ಎಂದು ತಿಳಿಸಿದರು.
ಇದನ್ನೂ ಓದಿ :ಕೇತ್ರಗಳ ಪುನರ್ವಿಂಗಡಣೆಗೆ ಡಿಸಿಗಳಿಗೆ ನಿರ್ದೇಶನ
ಜಿಲ್ಲಾಧಿಕಾರಿ ಎಂ.ಸುಂದರೇಶ್ ಬಾಬು ಮಾತನಾಡಿ, ಜಿಲ್ಲೆಯಲ್ಲಿ ನಾಲ್ಕು ಬಾರಿ ವಿಶೇಷ ಮತದಾರರ ನೋಂದಣಿ ಅಭಿಯಾನ ಹಮ್ಮಿಕೊಳ್ಳುವ ಮೂಲಕ 9,711 ಅರ್ಹ ಯುವ ಸಮೂಹವನ್ನು ಮತದಾರರ ಪಟ್ಟಿಗೆ ಸೇರ್ಪಡೆಗೊಳಿಸಲು ಕ್ರಮ ವಹಿಸಲಾಗಿದೆ. ಮತದಾರರ ಪಟ್ಟಿ ಪರಿಷ್ಕರಣೆಯಲ್ಲಿರುವ ತಾಂತ್ರಿಕ ನ್ಯೂನತೆ ಸರಿಪಡಿಸಿಕೊಳ್ಳುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ಮಾಹಿತಿ ನೀಡಿದರು. ಜಿಪಂ ಸಿಇಒ ಡಾ|ಆನಂದ ಕೆ., ಜಂಟಿ ಮುಖ್ಯ ಚುನಾವಣಾಧಿಕಾರಿ ವಿ.ರಾಘವೇಂದ್ರ, ಉಪ ವಿಭಾಗಾಧಿಕಾರಿ ರಾಯಪ್ಪ ಹುಣಸಗಿ, ಚುನಾವಣಾ ತಹಶೀಲ್ದಾರರು ಹಾಗೂ ವಿವಿಧ ತಾಲೂಕಿನ ತಹಶೀಲ್ದಾರರು ಸಭೆಯಲ್ಲಿ ಉಪಸ್ಥಿತರಿದ್ದರು.