ಮಂಗಳೂರು: ಏಕ ಬಳಕೆಯ ಪ್ಲಾಸ್ಟಿಕ್ ವಸ್ತುಗಳ ಬಳಕೆ ಯನ್ನು ದೇಶಾದ್ಯಂತ ನಿಷೇಧಿಸಿರುವ ಹಿನ್ನೆಲೆಯಲ್ಲಿ 2016ರಲ್ಲಿ ರಾಜ್ಯ ಸರಕಾರ ಹೊರಡಿಸಿದ ಅಧಿಸೂಚನೆ ಹಾಗೂ 2021ರಲ್ಲಿ ಕೇಂದ್ರ ಸರಕಾರ ಪ್ರಕಟಿಸಿರುವ ಮಾರ್ಗಸೂಚಿಗಳನ್ನು ಸಂಬಂಧಿಸಿದ ಅಧಿಕಾರಿಗಳು ಚಾಚೂ ತಪ್ಪದೆ ಪಾಲಿಸುವಂತೆ ಜಿಲ್ಲಾಧಿಕಾರಿ ಡಾ| ಕೆ.ವಿ. ರಾಜೇಂದ್ರ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.
ಜಿಲ್ಲಾಧಿಕಾರಿ ಕಚೇರಿ ಸಭಾಂಗಣ ದಲ್ಲಿ ಈ ಕುರಿತು ಸೋಮವಾರ ಹಮ್ಮಿಕೊಂಡಿದ್ದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಪ್ಲಾಸ್ಟಿಕ್ ತ್ಯಾಜ್ಯ ನಿರ್ವಹಣೆ ನಿಯಮಗಳು 2016ರಂತೆ ಪ್ಲಾಸ್ಟಿಕ್ ಧ್ವಜಗಳು, ಪ್ಲಾಸ್ಟಿಕ್ ಕ್ಯಾಂಡಿಸ್ಟಿಕ್‌ಗಳು, ಐಸ್‌ಕ್ರೀಮ್ ಸ್ಟಿಕ್‌ಗಳು, ಪ್ಲೇಟ್‌ಗಳು, ಕಪ್‌ಗ್ಳು, ಚಮಚಗಳು, ಫೋರ್ಕ್ ಗಳು, ಟ್ರೇಗಳು, ಸ್ವೀಟ್ ಬಾಕ್ಸ್, ಸಿಗರೇಟ್ ಪ್ಯಾಕ್‌ಗಳು ಇತ್ಯಾದಿ ಉತ್ಪನ್ನಗಳನ್ನು ಅವುಗಳ ತಯಾರಿಕೆ, ಆಮದು, ಸಂಗ್ರಹಣೆ, ವಿತರಣೆ, ಮಾರಾಟ ಹಾಗೂ ಬಳಕೆಯನ್ನು 2022ರ ಜುಲೈ 1ರಿಂದ ಜಾರಿಗೆ ಬರುವಂತೆ ನಿಷೇಧಿಸಲಾಗಿದೆ ಎಂದು ತಿಳಿಸಿದರು.
ಜಾಗೃತಿ ಮೂಡಿಸಿ
ಜಿಲ್ಲೆಯ ಎಲ್ಲ ಗ್ರಾಮ ಪಂಚಾ ಯತ್‌ಗಳು ಹಾಗೂ ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ಪ್ಲಾಸ್ಟಿಕ್ ವಸ್ತುಗಳ ಬಳಕೆಯ ದುಷ್ಪರಿಣಾಮಗಳ ಕುರಿತು ಜಾಗೃತಿ ಕಾರ್ಯಕ್ರಮ ಗಳನ್ನು ಹಮ್ಮಿಕೊಳ್ಳ ಬೇಕು ಹಾಗೂ ನಿಷೇಧಿತ ವಸ್ತುಗಳು ಕಂಡುಬಂದರೆ ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ನಗರ ಸ್ಥಳೀಯ ಸಂಸ್ಥೆಗಳ ಅಧಿಕಾರಿಗಳು ಹಾಗೂ ಗ್ರಾಮ ಪಂಚಾ ಯತ್ ಅಧಿಕಾರಿಗಳಿಗೆ ಸೂಚಿಸಿದರು.
ಶಾಸಕರಾದ ವೇದವ್ಯಾಸ ಕಾಮತ್ ಹಾಗೂ ಡಾ| ಭರತ್ ಶೆಟ್ಟಿ ಸಲಹೆಗಳನ್ನು ನೀಡಿದರು. ಮೇಯರ್ ಪ್ರೇಮಾನಂದ ಶೆಟ್ಟಿ, ಜಿಲ್ಲಾ ಪಂಚಾಯತ್ ಸಿಇಒ ಡಾ| ಕುಮಾರ್, ಮಂಗಳೂರು ಮನಪಾ ಆಯುಕ್ತ ಅಕ್ಷಯ್ ಶ್ರೀಧರ್, ಪರಿಸರ ಇಲಾಖೆ ಅಧಿಕಾರಿ ಕೀರ್ತಿ ಕುಮಾರ್, ಸಂಬಂಧಿಸಿದ ಅಧಿಕಾರಿಗಳು, ಮಾರಾಟಗಾರರರು ಉಪಸ್ಥಿತರಿದ್ದರು.