Advertisement

ಸ್ವತಂತ್ರ ದಿನ ಸಂಭ್ರಮದ ಆಚರಣೆಗೆ ಡಿಸಿ ಸೂಚನೆ 

05:41 PM Jul 25, 2018 | Team Udayavani |

ಬೆಳಗಾವಿ: 71ನೇ ಸ್ವಾತಂತ್ರ್ಯೋತ್ಸವವನ್ನು ಸಡಗರ-ಸಂಭ್ರಮದಿಂದ ಹಬ್ಬದ ಮಾದರಿಯಲ್ಲಿ ಆಚರಿಸಲು ಎಲ್ಲ ಸಿದ್ಧತೆ ಮಾಡಿಕೊಳ್ಳುವಂತೆ ಜಿಲ್ಲಾಧಿಕಾರಿ ಜಿಯಾವುಲ್ಲಾ ಎಸ್‌. ಅಧಿಕಾರಿಗಳಿಗೆ ಸೂಚನೆ ನೀಡಿದರು. ಜಿಲ್ಲಾಧಿಕಾರಿ ಸಭಾಂಗಣದಲ್ಲಿ ಸೋಮವಾರ ನಡೆದ ಸ್ವಾತಂತ್ರ್ಯೋತ್ಸವ ದಿನಾಚರಣೆ ಪೂರ್ವಭಾವಿ ಸಿದ್ಧತಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿ, ಅ. 15ರಂದು ಜಿಲ್ಲಾಡಳಿತದಿಂದ ಸ್ವಾತಂತ್ರ್ಯ ದಿನಾಚರಣೆಯನ್ನು ಜಿಲ್ಲಾ ಕ್ರೀಡಾಂಗಣದಲ್ಲಿ ಆಯೋಜಿಸಲಾಗುವುದು ಎಂದು ಹೇಳಿದರು.

Advertisement

ಬೆಳಗ್ಗೆ 9 ಗಂಟೆಗೆ ಸಚಿವರು ಧ್ವಜಾರೋಹಣ ನೆರವೇರಿಸಲಿದ್ದು, ಮೂಲ ಸೌಕರ್ಯಗಳ ವ್ಯವಸ್ಥೆ ಕಲ್ಪಿಸಬೇಕು. ವೇದಿಕೆ ಸಿದ್ಧತೆ, ಗಣ್ಯರಿಗೆ ಹಾಗೂ ನಾಗರಿಕರಿಗೆ ಆಸನ ವ್ಯವಸ್ಥೆ, ಕುಡಿಯುವ ನೀರು, ಶೌಚಾಲಯ, ಸಾಂಸ್ಕೃತಿಕ ಕಾರ್ಯಕ್ರಮ ಹಾಗೂ ಪಥಸಂಚಲನದಲ್ಲಿ ಭಾಗವಹಿಸುವರಿಗೆ ಅಲ್ಪೋಪಹಾರ ವ್ಯವಸ್ಥೆ ಕಲ್ಪಿಸುವಂತೆ ಲೋಕೋಪಯೋಗಿ, ಮಹಾನಗರ ಪಾಲಿಕೆ ಹಾಗೂ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಅಧಿಕಾರಿಗಳಿಗೆ ಸೂಚಿಸಿದರು. ಎಲ್ಲ ಸರ್ಕಾರಿ ಕಟ್ಟಡಗಳಿಗೆ ದೀಪಾಲಂಕಾರ, ಪ್ರಮುಖ ಸ್ಥಳಗಳಲ್ಲಿ ತಳೀರು-ತೋರಣ ಕಟ್ಟಬೇಕು. ಸಾರ್ವಜನಿಕ ಸ್ಥಳಗಳಲ್ಲಿ ಸ್ವತ್ಛತೆ ಕಾಪಾಡಬೇಕು ಎಂದು ಪಾಲಿಕೆಯ ಆಯುಕ್ತರಿಗೆ ನಿರ್ದೇಶನ ನೀಡಿದರು. ಆಸ್ಪತ್ರೆಯಲ್ಲಿ ರೋಗಿಗಳಿಗೆ, ನಿರ್ಗತಿಕ ಮಕ್ಕಳ ವಸತಿ ನಿಲಯಗಳಲ್ಲಿ ಹಣ್ಣು-ಹಂಪಲು, ಸಿಹಿ ವಿತರಿಸಲಾಗುವುದು. ಇದಕ್ಕಾಗಿ ಸಮಿತಿ ರಚಿಸಲಾಗಿದ್ದು, ಸಂಬಂಧಿಸಿದ ಅಧಿಕಾರಿಗಳು ಸೂಕ್ತ ಕ್ರಮ ಕೈಗೊಳ್ಳಬೇಕು. ಶಾಲಾ ಮಕ್ಕಳು ಹಾಗೂ ನಾಗರಿಕರ ಅನುಕೂಲಕ್ಕಾಗಿ ವಿಶೇಷ ಹಾಗೂ ಉಚಿತ ಬಸ್‌ ಸೌಕರ್ಯ ಒದಗಿಸಬೇಕು ಎಂದು ಸೂಚನೆ ನೀಡಿದರು.

ವಿಶೇಷ ಪೂಜೆ: ಅ. 15ರಂದು ಬೆಳಗ್ಗೆ 6ರಿಂದ 7 ಗಂಟೆ ಅವಧಿಯಲ್ಲಿ ಜಿಲ್ಲೆಯ ಎಲ್ಲ ದೇವಸ್ಥಾನ, ಚರ್ಚ್‌, ಮಸೀದಿ, ಗುರುದ್ವಾರ ಸೇರಿದಂತೆ ಎಲ್ಲ ಧಾರ್ಮಿಕ ಕೇಂದ್ರಗಳಲ್ಲಿ ವಿಶೇಷ ಪೂಜೆ ಸಲ್ಲಿಸಲಾಗುವುದು ಎಂದು ಹೇಳಿದರು. ಅಪರ ಜಿಲ್ಲಾಧಿಕಾರಿ ಡಾ| ಎಚ್‌.ಬಿ. ಬೂದೆಪ್ಪ ಮಾತನಾಡಿ, ಬೆಳಗ್ಗೆ 9 ಗಂಟೆಗೆ ಧ್ವಜಾರೋಹಣ, ಸಚಿವರಿಂದ ಸಂದೇಶ, 10:30ಕ್ಕೆ ಹಿರಿಯ ಸ್ವಾತಂತ್ರ್ಯ ಯೋಧರಿಗೆ ಸನ್ಮಾನ ನಡೆಯಲಿದೆ. ಸಂಜೆ 6 ಗಂಟೆಗೆ ಕುಮಾರ ಗಂಧರ್ವ ಕಲಾಮಂದಿರದಲ್ಲಿ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು
ನಡೆಯಲಿವೆ ಎಂದು ತಿಳಿಸಿದರು. ನಗರ ಪೊಲೀಸ್‌ ಆಯುಕ್ತ ಡಾ| ಡಿ.ಸಿ. ರಾಜಪ್ಪ, ಪ್ರೊಬೇಷನರಿ ಐಎಎಸ್‌ ಅಧಿಕಾರಿ ಮೀನಾ, ಪಾಲಿಕೆ ಆಯುಕ್ತ ಶಶಿಧರ ಕುರೇರ, ಹೆಚ್ಚುವರಿ ಜಿಲ್ಲಾ ಪೊಲೀಸ್‌ ವರಿಷ್ಠಾ ಧಿಕಾರಿ ರವೀಂದ್ರ ಗಡಾದಿ ಇದ್ದರು. ಮುಖಂಡರಾದ ಶ್ರೀನಿವಾಸ್‌ ತಾಳೂರಕರ, ಮಲ್ಲೇಶಪ್ಪ ಚೌಗುಲೆ, ಅರವಿಂದ ದೇಶಪಾಂಡೆ ಹಾಗೂ ವಿವಿಧ ಸಂಘ-ಸಂಸ್ಥೆಗಳ ಪದಾಧಿಕಾರಿಗಳು ಸಲಹೆ ಸೂಚನೆ ನೀಡಿದರು.

Advertisement

Udayavani is now on Telegram. Click here to join our channel and stay updated with the latest news.

Next