ಮೈಸೂರು: ಮೈಸೂರಿನ ಚಾಮರಾಜ, ಕೃಷ್ಣರಾಜ ಕ್ಷೇತ್ರಗಳಲ್ಲಿ ನಡೆದಿರುವ ನಕಲಿ ಮತದಾರರ ಪಟ್ಟಿಯ ಪರಿಶೀಲನೆಗೆ ಆದೇಶ ನೀಡಿರುವ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿ ರಂದೀಪ್ ಡಿ.ಅವರನ್ನು ವರ್ಗಾವಣೆ ಮಾಡಿರುವುದು ಅನುಮಾನಕ್ಕೆ ಕಾರಣವಾಗಿದೆ ಎಂದು ಮಾಜಿ ಸಚಿವ ಎಸ್.ಎ.ರಾಮದಾಸ್ ಆರೋಪಿಸಿದರು.
ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕೃಷ್ಣರಾಜ ಕ್ಷೇತ್ರದಲ್ಲಿ ಕಾನೂನು ಬಾಹಿರವಾಗಿ ಮತದಾರರನ್ನು ಮತಪಟ್ಟಿಯಿಂದ ಕೈಬಿಟ್ಟ ಪ್ರಕರಣ ಕುರಿತು ಜಿಲ್ಲಾಧಿಕಾರಿ ರಂದೀಪ್ ಅವರು ಕ್ರಮಕೈಗೊಳ್ಳಲು ಮುಂದಾಗಿದ್ದರು. ಇದಾದ ಕೇವಲ 24 ಗಂಟೆಯಲ್ಲಿ ರಂದೀಪ್ ಅವರನ್ನು ವರ್ಗಾವಣೆಗೊಳಿಸಿ ರಾಜ್ಯ ಸರ್ಕಾರ ಆದೇಶ ನೀಡಿದೆ.
ಆದರೆ, ರಂದೀಪ್ ಅವರು ಮೈಸೂರಿನ ಜಿಲ್ಲಾಧಿಕಾರಿಯಾಗಿ ನೇಮಕಗೊಂಡು ಕೇವಲ ಒಂದೂವರೆ ವರ್ಷ ಮಾತ್ರ ಕರ್ತವ್ಯ ನಿರ್ವಹಿಸಿದ್ದಾರೆ. ಆದರೂ ಇವರನ್ನು ಏಕಾಏಕಿ ವರ್ಗಾವಣೆ ಮಾಡಿರುವುದರ ಹಿಂದೆ ಸರ್ಕಾರದ ಲೆಕ್ಕಾಚಾರ ಬೇರೆಯಾಗಿದ್ದು, ಇದರಿಂದ ಮುಂದಿನ ವಿಧಾನಸಭಾ ಚುನಾವಣೆ ಪಾರದರ್ಶಕವಾಗಿ ನಡೆಯುವುದಿಲ್ಲ. ಅಧಿಕಾರಿಗಳ ಮೇಲೆ ಸಿಎಂ ದರ್ಪ, ಏಕವಚನ ಪ್ರಯೋಗ, ಐಎಎಸ್, ಐಪಿಎಸ್ ಅಧಿಕಾರಿಗಳ ವರ್ಗಾವಣೆ ಮಾಡುತ್ತಿರುವ ಹಿಂದಿನ ಉದ್ದೇಶವೇನು ಎಂದು ಪ್ರಶ್ನಿಸಿದರು.
ಚುನಾವಣೆ ವೇಳೆ ವರ್ಗ ಆರೋಪ: ದೇಶದ ಇತಿಹಾಸದಲ್ಲಿ ಮೊದಲ ಬಾರಿ ಎಂಬಂತೆ ರಾಜ್ಯದ ಉನ್ನತ ಅಧಿಕಾರಿಗಳು ರಾಜ್ಯ ಸರ್ಕಾರದ ದರ್ಪ, ಕಿರುಕುಳ ವಿರುದ್ಧ ಬಹಿರಂಗ ಪತ್ರ ಬರೆದಿದ್ದು, ಚುನಾವಣೆ ಸಮೀಪಿಸುತ್ತಿರುವಾಗ ಈ ರೀತಿ ಉನ್ನತ ಅಧಿಕಾರಿಗಳನ್ನು ವರ್ಗ ಮಾಡುವ ಮೊದಲು ಕೇಂದ್ರ ಚುನಾವಣಾ ಆಯೋಗಕ್ಕೆ ಮಾಹಿತಿ ನೀಡಬೇಕೆಂಬುದನ್ನು ಸಿಎಂ ನಿರ್ಲಕ್ಷಿಸಿದ್ದಾರೆ. ಚುನಾವಣೆ ಹತ್ತಿರದಲ್ಲಿರುವಾಗ ಸಂಬಂಧಪಟ್ಟ ಅಧಿಕಾರಿಗಳನ್ನು ವರ್ಗಾವಣೆ ಮಾಡುವಾಗ ಕೇಂದ್ರ ಚುನಾವಣಾ ಆಯೋಗಕ್ಕೆ ದೂರನ್ನು ಸಲ್ಲಿಸಲಾಗಿದೆ ಎಂದರು.
ಗೆಲುವಿಗೆ ಬಿಜೆಪಿ ಕಾಯೊನ್ಮುಕ: ಕೆ.ಆರ್.ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಗೆಲ್ಲುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೇ ಸುದ್ದಿ ವಾಹಿನಿಯೊಂದರಲ್ಲಿ ಒಪ್ಪಿದ್ದು, ಬಿಜೆಪಿ ಇಲ್ಲಿ ಎಷ್ಟು ಹೆಚ್ಚುವರಿ ಮತ ಪಡೆಯಲಿದೆ ಎಂಬ ಲೆಕ್ಕಾಚಾರದಲ್ಲಿದೆ. ಜತೆಗೆ ಈ ಕ್ಷೇತ್ರದಿಂದ ವಿಜಯ ಆರಂಭಿಸಿ, ಮೈಸೂರು ಭಾಗದಲ್ಲಿಯೂ ಉಳಿದ ಕ್ಷೇತ್ರಗಳಲ್ಲಿ ಗೆಲುವು ಸಾಧಿಸಲು ಬಿಜೆಪಿ ಕಾಯೊನ್ಮುಖವಾಗಿದೆ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.
ತಾವು ಬಿಜೆಪಿ ಕಾರ್ಯಕರ್ತನಾಗಿದ್ದು, ತಾವು ಟಿಕೆಟ್ ಆಕಾಂಕ್ಷಿಯಾಗಿಲ್ಲ, ಹಿಂದೆಯೂ ಆಗಿರಲಿಲ್ಲ. ಹೀಗಾಗಿ ಪಕ್ಷ ಯಾರಿಗೇ ಟಿಕೆಟ್ ನೀಡಿದರೂ ಅದಕ್ಕೆ ಬದ್ಧವಾಗಿರುವುದಾಗಿ ತಿಳಿಸಿದರು. ಸುದ್ದಿಗೋಷ್ಠಿಯಲ್ಲಿ ಪಾಲಿಕೆ ಸದಸ್ಯ ಬಿ.ವಿ. ಮಂಜುನಾಥ್, ಹೇಮಂತ್‌ಕುಮಾರ, ಸಂತೋಷ್, ಲಕ್ಷ್ಮಣ್ ಹಾಜರಿದ್ದರು.