ವಿಜಯಪುರ: ಶನಿವಾರದಿಂದ ಜಿಲ್ಲೆಯಲ್ಲಿ ಆರಂಭಗೊಂಡಿರುವ ಪದವೀಧರ ಪ್ರಾಥಮಿಕ ಶಿಕ್ಷಕರ (6 ರಿಂದ 8ನೇ ತರಗತಿ) ನೇಮಕಾತಿ ಸ್ಪರ್ಧಾತ್ಮಕ ಪರೀಕ್ಷಾ ಕೇಂದ್ರಗಳಿಗೆ ಜಿಲ್ಲಾಧಿಕಾರಿ ವಿ.ಬಿ.ದಾನಮ್ಮವರ ಹಗೂ ಎಸ್ಪಿ ಆನಂದಕುಮಾರ ಭೇಟಿ ನೀಡಿ ಪರೀಕ್ಷೆಗಳ ನಿರ್ವಹಣೆ ಅವಲೋಕಿಸಿದರು.
ನಗರದಲ್ಲಿ ಪರೀಕ್ಷಾ ಕೇಂದ್ರಗಳಾದ ಸಿದ್ದೇಶ್ವರ ಪ್ರಾಥಮಿಕ-ಮಾಧ್ಯಮಿಕ ಶಾಲೆ, ಕಿರಿಟಮಠ ವೇದಾಂತಚಾರ್ಯ ಮೃತ್ಯುಂಜಯ ಮಹಾಸ್ವಾಮೀಜಿ ಕಲಾ, ವಿಜ್ಞಾನ ಹಾಗೂ ವಾಣಿಜ್ಯ ಸ್ವತಂತ್ರ ಪದವಿ ಪೂರ್ವ ವಿದ್ಯಾಲಯಕ್ಕೆ ಭೇಟಿ ನೀಡಿ ಪರೀಕ್ಷೆ ಕೇಂದ್ರದಲ್ಲಿನ ಸಿದ್ಧತೆಗಳ ಕುರಿತು ಪರಿಶೀಲಿಸಿದರು.
ವಿಜಯಪುರದ 16 ಪರೀಕ್ಷಾ ಕೇಂದ್ರಗಳಲ್ಲಿ ಎಲ್ಲೆಡೆ ಪರೀಕ್ಷೆಗಳು ಸುಗಮವಾಗಿ ಆರಂಭಗೊಂಡಿವೆ. ಪರೀಕ್ಷಾ ಕೇಂದ್ರಗಳ ಸುತ್ತಲು 200 ಮೀ. ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ. ಪರೀಕ್ಷೆಯಲ್ಲಿ ಯಾವುದೇ ಅಕ್ರಮ ನಡೆಯದಂತೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವಂತೆ ಸೂಚಿಸಲಾಗಿದೆ ಎಂದು ಡಿಸಿ ಹೇಳಿದರು.
ಅಭ್ಯರ್ಥಿಗಳು ಎಲ್ಲ ಪರೀಕ್ಷಾ ಕೇಂದ್ರಗಳಲ್ಲಿ ನಿರ್ಭಯದಿಂದ ಪರೀಕ್ಷೆ ಬರೆಯುವಂತೆ ಎಲ್ಲಾ ಕಡೆ ಸೂಕ್ತ ಪೊಲೀಸ್ ವ್ಯವಸ್ಥೆ ಮಾಡಲಾಗಿದೆ. ಯಾವುದೇ ಪರೀಕ್ಷಾ ಕೇಂದ್ರಗಳ ಸುತ್ತಲು ನಿಗದಿಪಡಿಸಿದ ವ್ಯಾಪ್ತಿಯಲ್ಲಿ ಝರಾಕ್ಸ್ ಅಂಗಡಿಗಳು, ಕಂಪ್ಯೂಟರ್, ಸೈಬರ್ ಕೇಂದ್ರಗಳು, ಕೋಚಿಂಗ್ ಕೇಂದ್ರಗಳನ್ನು ಪರೀಕ್ಷಾ ಅವಧಿಯಲ್ಲಿ ಬಂದ್ ಮಾಡಲು ಸೂಚಿಸಲಾಗಿದೆ ಎಂದು ಎಸ್ಪಿ ಆನಂದಕುಮಾರ ತಿಳಿಸಿದರು.