Advertisement

ಕೋವಿಡ್‌ ಸಂಖ್ಯೆ ಶೇ.1ಕ್ಕೆ ಇಳಿಕೆ

06:11 PM Nov 07, 2020 | Suhan S |

ಯಾದಗಿರಿ: ಜಿಲ್ಲೆಯಲ್ಲಿ ಕೋವಿಡ್ ಸೋಂಕಿತರ ಸಂಖ್ಯೆ ದಿನೇ ದಿನೇ ಇಳಿಮುಖವಾಗುತ್ತಿದ್ದು, ಪಾಸಿಟಿವ್‌ ಪ್ರಕರಣಗಳು ಶೇ.1ಕ್ಕೆ ಇಳಿದಿದೆ. ಯಾದಗಿರಿ ಶೀಘ್ರದಲ್ಲೇ ಕೋವಿಡ್‌ ಸೋಂಕಿನಿಂದ ಮುಕ್ತವಾಗಲಿದೆ ಎಂದು ಜಿಲ್ಲಾ ಧಿಕಾರಿ ಡಾ| ರಾಗಪ್ರಿಯಾ ಆರ್‌. ಹೇಳಿದರು.

Advertisement

ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ ಜಿಲ್ಲಾ ಮಟ್ಟದ ಕೋವಿಡ್‌ ಟಾಸ್ಕ್ ಫೋರ್ಸ್‌ ಸಮಿತಿ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಕಳೆದ 15 ದಿನದಲ್ಲಿ ಜಿಲ್ಲೆಯಲ್ಲಿ ಕೋವಿಡ್ ದಿಂದ ಸಾವು ಸಂಭವಿಸಿಲ್ಲ. ಕೋವಿಡ್ ನಿಯಂತ್ರಣದಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಅಧಿಕಾರಿಗಳು, ಸಿಬ್ಬಂದಿ ಹಾಗೂ ಆರೋಗ್ಯ ಕಾರ್ಯಕರ್ತರು ಪ್ರಮುಖ ಪಾತ್ರವಹಿಸಿದ್ದಾರೆಂದು ಶ್ಲಾಘಿಸಿದರು. ಜಗತ್ತಿನ ವಿವಿಧ ದೇಶಗಳಲ್ಲಿ ಕೋವಿಡ್ ಸೋಂಕಿನ ಎರಡನೇ ಅಲೆ ಪ್ರಾರಂಭವಾಗಿದೆ. ಹೀಗಾಗಿ ಎರಡನೇ ಅಲೆ ಎದುರಿಸಲು ಸಕಲ ಸಿದ್ಧತೆ ಕೈಗೊಳ್ಳುವಂತೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದರು.

2021ರ ಜನವರಿಯಲ್ಲಿ ಕೋವಿಡ್‌ ಸೋಂಕಿಗೆ ಲಸಿಕೆ ಲಭ್ಯವಾಗುವ ನಿರೀಕ್ಷೆ ಇದೆ. ಕೋವಿಡ್ ಫ್ರಂಟ್‌ ಲೈನ್‌ ವಾರಿಯರ್ಸ್ ಗಳಾದ ವೈದ್ಯರು, ಆರೋಗ್ಯ ಕಾರ್ಯಕರ್ತರಿಗೆ ಮೊದಲು ಲಸಿಕೆ ವಿತರಿಸಲು ಕೇಂದ್ರ ಸರ್ಕಾರ ನಿರ್ಧರಿಸಿದೆ. ಹೀಗಾಗಿ ಸರ್ಕಾರಿ- ಖಾಸಗಿ ವೈದ್ಯಕೀಯ ಸಂಸ್ಥೆಗಳಲ್ಲಿ ಕಾರ್ಯನಿರ್ವಹಿಸುವ ವೈದ್ಯರು, ಸಿಬ್ಬಂದಿಗಳ ವಿವರ ಸಂಗ್ರಹಿಸುವಂತೆ ಆರೋಗ್ಯ ಇಲಾಖೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.

ಮೊದಲ ಹಂತದಲ್ಲಿ ಕೋವಿಡ್ ವ್ಯಾಕ್ಸಿನ್‌ ಪಡೆಯಲು ಜಿಲ್ಲೆಯಲ್ಲಿ ವೈದ್ಯರು, ವೈದ್ಯಕೀಯ ಸಿಬ್ಬಂದಿ, ಆಶಾ ಕಾರ್ಯಕರ್ತೆಯರು ಸೇರಿದಂತೆ ಒಟ್ಟಾರೆ 4,334 ಕಾರ್ಯಕರ್ತರು ಹಾಗೂ 150 ಖಾಸಗಿ ವೈದ್ಯರು, ವೈದ್ಯಕೀಯ ಸಿಬ್ಬಂದಿ ನೋಂದಣಿ ಮಾಡಿಸಿಕೊಂಡಿದ್ದಾರೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟಂಬ ಕಲ್ಯಾಣಾಧಿಕಾರಿ ಡಾ| ಇಂದುಮತಿ ಕಾಮಶೆಟ್ಟಿ ಸಭೆಗೆ ಮಾಹಿತಿ ನೀಡಿದರು. ಈ ವೇಳೆ ಸಮೀಕ್ಷೆ ವೈದ್ಯಾಧಿಕಾರಿ ಡಾ| ಎ.ಎಸ್‌. ತಾಳಿಕೋಟೆ, ಡಾ| ಸೂರ್ಯಪ್ರಕಾಶ್‌, ಐಎಂಎ ಸದಸ್ಯ ವೀರೇಶ್‌ ಜಾಕ ಸೇರಿದಂತೆ ಖಾಸಗಿ ಆಸ್ಪತ್ರೆಗಳ ಮುಖ್ಯಸ್ಥರು, ವೈದ್ಯರು ಇದ್ದರು.

Advertisement

Udayavani is now on Telegram. Click here to join our channel and stay updated with the latest news.

Next