ಬೆಂಗಳೂರು: ಕಳೆದ ವರ್ಷ ನಡೆದ ಸಾರಿಗೆ ಇಲಾಖೆ ಸಬ್ ಇನ್ಸ್‌ಪೆಕ್ಟರ್ ನೇಮಕಾತಿಯಲ್ಲಿ ಭಾರೀ ಅವ್ಯವಹಾರ ನಡೆದಿದೆ ಎಂದು ಆರೋಪಿಸಿ ಕನ್ನಡ ಸಂಘಟನೆಗಳ ಒಕ್ಕೂಟ ಗುರುವಾರ ಭ್ರಷ್ಟಾಚಾರ ನಿಗ್ರಹ ದಳಕ್ಕೆ ದೂರು ನೀಡಿದೆ. 2018ರಲ್ಲಿ ನಡೆದ ಸಾರಿಗೆ ಉಪ ಆರಕ್ಷಕ ಹುದ್ದೆ ನೇಮಕಾತಿಯಲ್ಲಿ 50 ರಿಂದ 60 ಅಭ್ಯರ್ಥಿಗಳು ಹಾಲಿ ಸಾರಿಗೆ ಇಲಾಖೆಯಲ್ಲಿ ಕಾರ್ಯ ನಿರ್ವಹಿಸುತ್ತಿರುವ ಅಧಿಕಾರಿಗಳ ಸಂಬಂಧಿಕರೇ ಆಗಿರುವುದು ಹಲವಾರು ಅನುಮಾನಗಳಿಗೆ ಎಡೆ ಮಾಡಿಕೊಟ್ಟಿದೆ.
Advertisement
ಕರ್ನಾಟಕ ಲೋಕಸೇವಾ ಆಯೋಗದ ಮೂಲಕ ನಡೆದಿರುವ ಈ ನೇಮಕಾತಿಯಲ್ಲಿ ಮಾಜಿ ಸಚಿವ ಡಿ.ಸಿ.ತಮ್ಮಣ್ಣ , ಸಾರಿಗೆ ಆಯುಕ್ತ ವಿ.ಪಿ.ಇಕ್ಕೇರಿ ಮತ್ತು ಕೆಪಿಎಸ್‌ಸಿ ಕಾರ್ಯದರ್ಶಿ ಗಳು ಅಕ್ರಮ ಎಸಗಿರುವ ಶಂಕೆಯಿದ್ದು, ಈ ಬಗ್ಗೆ ಸೂಕ್ತ ತನಿಖೆ ನಡೆಸಿ ಕ್ರಮ ಜರುಗಿಸುವಂತೆ ಕೋರಿ ಭ್ರಷ್ಟಾಚಾರ ನಿಗ್ರಹ ದಳಕ್ಕೆ ಕನ್ನಡ ಸಂಘಟನೆಗಳ ಒಕ್ಕೂಟ ದಾಖಲೆಗಳ ಸಮೇತ ದೂರು ನೀಡಿದೆ.
ಸಾರಿಗೆ ಸಬ್ ಇನ್ಸ್‌ಪೆಕ್ಟರ್ ನೇಮಕಾತಿಯಲ್ಲಿ ವರ್ಕ್ ಶಾಪ್ ಸೇವಾನುಭವ ಪ್ರಮಾಣ ಪತ್ರಗಳ ನೈಜತೆ ಪರಿಶೀಲನೆ ಕಾರ್ಯದಲ್ಲಿ ಸಾರಿಗೆ ಇಲಾಖೆ ಅಧಿಕಾರಿಗಳು ಅಧಿಕಾರ ದುರ್ಬಳಕೆ ಮಾಡಿಕೊಂಡಿದ್ದಾರೆ ಎಂದು ದೂರಿನಲ್ಲಿ ನಮೂದಿಸಿದ್ದಾರೆ. ಈ ಕುರಿತು ಪ್ರತಿಕ್ರಿಯಿಸಿದ ದೂರುದಾರ ಹಾಗೂ ಕನ್ನಡ ಸಂಘಟನೆಗಳ ಒಕ್ಕೂಟದ ಅಧ್ಯಕ್ಷ ಎಚ್.ಬಿ.ನಾಗೇಶ್, ಸಾರಿಗೆ ಇಲಾಖೆ ನೇಮಕಾತಿಯಲ್ಲಿ ನಡೆದಿರುವ ಅವ್ಯವಹಾರವನ್ನು ದಾಖಲೆ ಸಮೇತ ಬಹಿರಂಗಪಡಿಸಿದ್ದೇನೆ. ಈ ಸಂಬಂಧ ಭ್ರಷ್ಟಾಚಾರ ನಿಗ್ರಹ ದಳಕ್ಕೆ ದೂರು ನೀಡಿದ್ದು, ಅಂದಿನ ಸಾರಿಗೆ ಸಚಿವ ಡಿ.ಸಿ.ತಮ್ಮಣ್ಣ , ಸಾರಿಗೆ ಆಯುಕ್ತ ವಿ.ಪಿ.ಇಕ್ಕೇರಿ ಮತ್ತು ಕೆಪಿಎಸ್‌ಸಿ ಕಾರ್ಯದರ್ಶಿಗಳನ್ನು ತನಿಖೆಗೆ ಒಳಪಡಿಸಿ ಸೂಕ್ತ ಕ್ರಮ ಜರುಗಿಸಲು ಒತ್ತಾಯಿಸಿದರು.