ಚಿಕ್ಕಬಳ್ಳಾಪುರ: ಜಿಲ್ಲಾಧಿಕಾರಿಗಳ ನಡೆ ಹಳ್ಳಿ ಕಡೆ ಅಭಿಯಾನದ ಪ್ರಯುಕ್ತ ಈ ತಿಂಗಳ 18ರಂದು ಚಿಕ್ಕಬಳ್ಳಾಪುರ ತಾಲೂಕಿನ ಮಂಡಿಕಲ್ ಹೋಬಳಿಯ ಕಮ್ಮಗುಟ್ಟಹಳ್ಳಿ ಗ್ರಾಮದಲ್ಲಿ ಜಿಲ್ಲಾಡಳಿತದ ಹಾಗೂ ತಾಲೂಕು ಆಡಳಿತದ ಅಧಿಕಾರಿಗಳು ಗ್ರಾಮ ವಾಸ್ತವ್ಯ ಹೂಡಿ ಗ್ರಾಮಸ್ಥರ ಸಮಸ್ಯೆಗಳನ್ನು ಆಲಿಸಿ ಪರಿಹರಿಸಲಾಗುವುದು ಎಂದು ಜಿಲ್ಲಾಧಿಕಾರಿ ಆರ್.ಲತಾ ತಿಳಿಸಿದ್ದಾರೆ.
ಅವರು ಶನಿವಾರ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಡೆದ ಜಿಲ್ಲಾಧಿಕಾರಿಗಳ ನಡೆ ಹಳ್ಳಿ ಕಡೆ ಕಾರ್ಯ ಕ್ರಮದ ಪೂರ್ವ ಸಿದ್ಧತಾ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಜಿಲ್ಲೆಯಲ್ಲಿ ಕರ್ನಾಟಕ ರೈತ ಸುರಕ್ಷಾ ಪ್ರಧಾನ ಮಂತ್ರಿ ಫಸಲ್ ಬಿಮಾ ಯೋಜನೆಯಡಿ ಕೃಷಿ ಹಾಗೂ ತೋಟಗಾರಿಕಾ ಬೆಳೆಗಳಿಗೆ ರೈತರ ಬೆಳೆ ವಿಮೆ ನೋಂದಣಿ ಕಾರ್ಯ ವನ್ನು ಚಾಲನೆ ಗೊಳಿಸಲಾಗಿದೆ. ಗ್ರಾಮ ವಾಸ್ತವ್ಯದ ಅಂಗವಾಗಿ ಕಮ್ಮಗುಟ್ಟಹಳ್ಳಿಯ ಗ್ರಾಪಂ ವ್ಯಾಪ್ತಿಯಲ್ಲಿನ ರೈತರಿಗೆ ಈ ಯೋಜನೆಯಡಿ ಬೆಳೆವಿಮೆ ನೋಂದಣಿ ಮಾಡಿಸುವಂತೆ ಅಧಿಕಾರಿಗಳು ಮತ್ತು ಸಿಬ್ಬಂದಿ ಮನೆ ಮನೆಗೆ ಭೇಟಿ ನೀಡಿ ಅರಿವು ಮೂಡಿಸುವ ಕಾರ್ಯ ಮಾಡಬೇಕು ಎಂದು ತಿಳಿಸಿದರು.
ಗ್ರಾಮ ವಾಸ್ತವ್ಯ ದಿನದಂದು ಜಿಲ್ಲಾಡಳಿತ ಮತ್ತು ತಾಲೂಕು ಆಡಳಿತದ ಎಲ್ಲಾ ಅಧಿಕಾರಿಗಳು ಕಮ್ಮಗುಟ್ಟಹಳ್ಳಿ ಗ್ರಾಪಂ ವ್ಯಾಪ್ತಿಯ ಎಲ್ಲಾ ಗ್ರಾಮಗಳಿಗೆ ಭೇಟಿ ನೀಡಿ ಸ್ಥಳೀಯರ ಅಹವಾಲು ಹಾಗೂ ಅರ್ಜಿಗಳನ್ನು ಸ್ವೀಕರಿಸಿ ಸ್ಥಳದಲ್ಲೇ ವಿಲೇವಾರಿ ಮಾಡಲು ಅಗತ್ಯ ಕ್ರಮ ವಹಿಸುವರು ಹಾಗೂ ಸರ್ಕಾರದ ವಿವಿಧ ಯೋಜನೆಗಳಡಿ, ಕಾರ್ಯಕ್ರಮಗಳಡಿ ಆಯ್ಕೆಯಾಗಿರುವ ಫಲಾನುಭವಿಗಳಿಗೆ ಹಾಗೂ ಅರ್ಹ ಫಲಾನುಭವಿ ಗಳನ್ನು ಗುರ್ತಿಸಿ ಅವರಿಗೆ ಮಂಜೂರಾತಿ ಪತ್ರಗಳನ್ನು ವಿತರಿಸಲಾಗುವುದು ಎಂದರು.
ಗ್ರಾಮ ವಾಸ್ತವ್ಯ ದಿನದಂದು ಕಮ್ಮಗುಟ್ಟಹಳ್ಳಿ ಗ್ರಾಮದಲ್ಲಿ ಆರೋಗ್ಯ ತಪಾಸಣೆ ಶಿಬಿರ, ರಕ್ತದಾನ ಶಿಬಿರ, ಕೃಷಿ ವಸ್ತು ಪ್ರದರ್ಶನ ಆಯೋಜಿಸಲಾಗುವುದು. ಸರ್ಕಾರಿ ಯೋಜನೆಗಳ ಜಾಗೃತಿ ಮತ್ತು ಅನುಷ್ಟಾನಕ್ಕಾಗಿ ಮಾಹಿತಿ ಕೇಂದ್ರ, ಅರ್ಜಿ ಸ್ವೀಕಾರ ಕೇಂದ್ರ ಮತ್ತು ಮಳಿಗೆಗಳನ್ನು ತೆರೆಯಲು ಅಧಿಕಾರಿಗಳಿಗೆ ಅಗತ್ಯ ಸೂಚನೆಗಳನ್ನು ನೀಡಿದರು.
ಜತೆಗೆ ಸಾಮಾಜಿಕ ಭದ್ರತಾ ಯೋಜನೆಗಳು, ಆಯುಷ್ಮಾನ್ ಭಾರತ್ ಆರೋಗ್ಯ ಕರ್ನಾಟಕ ಯೋಜನೆ, ಇ-ಶ್ರಮ್, ಪಡಿತರ ಯೋಜನೆ, ಎಸ್‌ಸಿಪಿ ಮತ್ತು ಟಿಎಸ್‌ಪಿ ಯೋಜನೆ, ಪೋಡಿ, ಹದ್ದುಬಸ್ತು, ಆಧಾರ್, ಪೌತಿ ಖಾತೆ, ಪಹಣಿ ದೋಷ ತಿದ್ದುಪಡಿ, ಆಶ್ರಯ ವಸತಿ ಯೋಜನೆಗಳು ಸೇರಿದಂತೆ ಸರ್ಕಾರದ ವಿವಿಧ ಯೋಜನೆಯಡಿ ಕಮ್ಮಗುಟ್ಟಹಳ್ಳಿ ಗ್ರಾಪಂ ವ್ಯಾಪ್ತಿಯಲ್ಲಿ ಆಯ್ಕೆಯಾಗಿರುವ ಫಲಾನುಭವಿಗಳಿಗೆ ಮಂಜೂರಾತಿ ಪತ್ರ ವಿತರಿಸುವ ಅಗತ್ಯ ಕ್ರಮವಹಿಸುವಂತೆ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಸೂಚಿಸಿದರು.
ಜಿಪಂ ಸಿಇಒ ಪಿ.ಶಿವಶಂಕರ್, ಹೆಚ್ಚುವರಿ ಜಿಲ್ಲಾಧಿಕಾರಿ ಎಚ್.ಅಮರೇಶ್, ತಹಶೀಲ್ದಾರ್ ಗಣಪತಿಶಾಸ್ತ್ರಿ, ತಾಪಂ ಇಒ ಮಂಜುನಾಥ್ ಇತರರಿದ್ದರು.