Advertisement

ನಿಗಮಗಳು ಕಾರ್ಪೋರೇಟ್ ಕಚೇರಿಗಳಂತೆ ಕಾರ್ಯನಿರ್ವಸಬೇಕು :ಡಿಸಿಎಂ ಕಾರಜೋಳ

10:44 PM Jul 30, 2020 | sudhir |

ಬೆಂಗಳೂರು: ಕೊವಿಡ್ 19 ರ ಹಿನ್ನೆಲೆಯಲ್ಲಿ ಪರಿಶಿಷ್ಟ ಜಾತಿ ಮತ್ತು ಪಂಗಡ ಸಮುದಾಯದರು ಸಂಕಷ್ಟದಲ್ಲಿದ್ದು, ಗುಳೇಹೋದವರು ಅವರ ಗ್ರಾಮಗಳಿಗೆ ಹಿಂದಿರುಗಿದ್ದಾರೆ. ಅವರ ಕಲ್ಯಾಣ ಕಾರ್ಯಕ್ರಮಗಳನ್ನು ಸಮರ್ಪಕವಾಗಿ ಅನುಷ್ಟಾನಗೊಳಿಸಬೇಕು. ಸಮರ್ಪಕವಾಗಿ ಯೋಜನೆಗಳನ್ನು ಅನುಷ್ಟಾನಗೊಳಿಸದ ಅಧಿಕಾರಿಗಳು ಹಾಗೂ ಸಿಬ್ಬಂದಿ ವರ್ಗದವರ ವಿರುದ್ಧ ಕ್ರಮಕೈಗೊಳ್ಳಲಾಗುವುದು ಎಂದು ಉಪಮುಖ್ಯಮಂತ್ರಿಗಳಾದ ಶ್ರೀ ಗೋವಿಂದ ಎಂ ಕಾರಜೋಳ ಸೂಚಿಸಿದರು.

Advertisement

ಬೆಂಗಳೂರಿನ ಅಂಬೇಡ್ಕರ್ ಭವನದಲ್ಲಿಂದು ಡಾ. ಬಿ.ಆರ್. ಅಂಬೇಡ್ಕರ್ ಅಭಿವೃದ್ಧಿ ನಿಗಮ, ಲಿಡ್ಕರ್, ಕರ್ನಾಟಕ ಆದಿಜಾಂಬವ ಅಭಿವೃದ್ಧಿ ನಿಗಮದ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆವಹಿಸಿ ಮಾತನಾಡಿದ ಅವರು, ಸಂಕಷ್ಟದಲ್ಲಿರುವವರಿಗೆ ತ್ವರಿತವಾಗಿ ಸ್ವಯಂ ಉದ್ಯೋಗಕ್ಕೆ ಅನುಕೂಲವಾಗುವಂತೆ ಕಿರುಆರ್ಥಿಕ ಚಟುವಟಿಕೆಗಳಿಗೆ ನಿಗಮಗಳಿಂದ ನೇರ ಸಾಲ ಯೋಜನೆಯನ್ನು ಪ್ರಾರಂಭಿಸಲಾಗಿದೆ.

ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಗಳಾದ ಗಂಗಾಕಲ್ಯಾಣ, ಭೂ ಒಡೆತನ, ಸ್ವಯಂ ಉದ್ಯೋಗ ಸೇರಿದಂತೆ ಇತರ ಕಾರ್ಯಕ್ರಮಗಳು ಪ್ರತಿಶತ ಪ್ರಗತಿ ಸಾಧಿಸಬೇಕು. ಕೆಲವು ಕಾರ್ಯಕ್ರಮಗಳ ಪ್ರಗತಿಯು ಮಂದಗತಿಯಲ್ಲಿ ಸಾಗುತ್ತಿರುವುದಕ್ಕೆ ಯಾವುದೇ ಕಾರಣ ಹೇಳದೇ ತ್ವರಿತವಾಗಿ ಪೂರ್ಣಗೊಳಿಸಬೇಕು. ಅದರಲ್ಲೂ ಬಾಕಿ ಇರುವ ಕೊಳವೆ ಬಾವಿಗಳನ್ನು ಕೊರೆಸಲು ಕೂಡಲೇ ಕ್ರಮಕೈಗೊಳ್ಳಬೇಕು ಎಂದು ಸೂಚಿಸಿದರು.

ಸಮಾಜ ಕಲ್ಯಾಣ ಇಲಾಖೆಯ ಆಯುಕ್ತರು ಜಿಲ್ಲಾವಾರು ಸ್ಥಳಪರಿಶೀಲನೆ ನಡೆಸಿ, ಗಂಗಾ ಕಲ್ಯಾಣ, ಭೂ ಒಡೆತನ ಯೋಜನೆಗಳ ಪ್ರಗತಿಪರಿಶೀಲನೆ ನಡೆಸಿ, ಯೋಜನೆಗಳು ತ್ವರಿತವಾಗಿ ಅನುಷ್ಟಾನವಾಗುವಂತೆ ಕ್ರಮಕೈಗೊಳ್ಳಬೇಕು. ಆಯುಕ್ತರ ಅಧ್ಯಕ್ಷತೆಯಲ್ಲಿ ಪ್ರತಿವಾರ ನಿಗಮಗಳ ಪ್ರಗತಿ ಪರಿಶೀಲನೆ ನಡೆಸಬೇಕು. ಇಲಾಖೆಯ ಯೋಜನೆಗಳಿಗೆ ಅನುದಾನದ ಕೊರತೆ ಇಲ್ಲ. ನಿಗಮಗಳ ಕೇಂದ್ರ ಕಚೇರಿಯು ಕಾರ್ಪೋರೇಟ್ ಕಚೇರಿಗಳಂತೆ ಕಾರ್ಯನಿರ್ವಹಿಸಬೇಕು ಎಂದು ಸೂಚಿಸಬೇಕು. ವಿವಿಧ ಯೋಜನೆಗಳಡಿ ಫಲಾನುಭವಿಗಳಿಗೆ ಬ್ಯಾಂಕ್ ಗಳು ಸಾಲಸೌಲಭ್ಯ ನೀಡದಿರುವುದರ ಬಗ್ಗೆ ಜಿಲ್ಲಾಧಿಕಾರಿಗಳಿಗೆ ವರದಿ ನೀಡಿ, ಪ್ರಗತಿ ಪರಿಶೀಲನೆ ನಡೆಸಬೇಕು ಎಂದರು.

ಕರ್ನಾಟಕ ಆದಿಜಾಂಬವ ಅಭಿವೃದ್ಧಿ ನಿಗಮವು ಈ ವರ್ಷದಿಂದ ಸ್ವತಂತ್ರವಾಗಿ ಕಾರ್ಯನಿರ್ವಹಿಸಲಿದ್ದು, ಭೂ ಒಡೆತನ ಯೋಜನೆ, ಗಂಗಾ ಕಲ್ಯಾಣ ಯೋಜನೆ ಸೇರಿದಂತೆ ಎಲ್ಲಾ ಕಾರ್ಯಕ್ರಮಗಳನ್ನು ಕೂಡಲೇ ಅನುಷ್ಠಾನಗೊಳಿಸಬೇಕು. ಲಿಡ್ಕರ್ ವತಿಯಿಂದ ಚರ್ಮ ಕುಶಲಕರ್ಮಿಗಳಿಗೆ ವಿಶೇಷ ಪ್ಯಾಕೇಜ್ ನಡಿ ಎಲ್ಲಾ 11772 ಫಲಾನುಭವಿಗಳಿಗೆ ಪರಿಹಾರ ಧನ ನೀಡಲಾಗಿದೆ. ತರಬೇತಿ ಕಾರ್ಯಕ್ರಮ, ಸ್ವಯಂ ಉದ್ಯೋಗ ಯೋಜನೆ, ಮೂಲಭೂತಸೌಕರ್ಯಗಳ ಅಭಿವೃದ್ಧಿ, ವಾಣಿಜ್ಯ ಉತ್ತೇಜನ ಯೋಜನೆಗಳಿಗೆ ಅನುಮೋದನೆ ನೀಡಲಾಗಿದೆ ಎಂದು ಹೇಳಿದರು.

Advertisement

ಸಭೆಯಲ್ಲಿ ಎಸ್‍ಸಿಎಸ್‍ಪಿ ಮತ್ತು ಟಿಎಸ್‍ಪಿ ಯೋಜನೆಯ ಸಲಹೆಗಾರರಾದ ಶ್ರೀ ಇ. ವೆಂಕಟಯ್ಯ, ಸಮಾಜ ಕಲ್ಯಾಣ ಇಲಾಖೆಯ ಆಯುಕ್ತ ಶ್ರೀ ರವಿಕುಮಾರ್ ಸುರಪುರ, ಲಿಡ್ಕರ್ ಮತ್ತು ಕರ್ನಾಟಕ ಆದಿಜಾಂಬವ ಅಭಿವೃದ್ಧಿ ನಿಗಮದ ವ್ಯವಸ್ಥಾಪಕ ನಿರ್ದೇಶಕ ಶ್ರೀ ನಟರಾಜ್, ಡಾ. ಅಂಬೇಡ್ಕರ್ ಅಭಿವೃದ್ಧಿ ನಿಗಮದ ಪ್ರಧಾನ ವ್ಯವಸ್ಥಾಪಕ ಶ್ರೀ ಕುಮಾರ್, ಡಿಸಿಎ ಅವರ ಆಪ್ತಕಾರ್ಯದರ್ಶಿ ಶ್ರೀ ಇ.ಶ್ರೀನಿವಾಸ, ಮತ್ತಿತರ ಅಧಿಕಾರಿಗಳು ಉಪಸ್ಥಿತರಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next