ಗುಂಡ್ಲುಪೇಟೆ(ಚಾಮರಾಜನಗರ): ತಾಲೂಕಿನ ತೆರಕಣಾಂಬಿ ಸಮೀಪದ ಕರಿಕಲ್ಲು ಕ್ವಾರಿಯಲ್ಲಿ ಕಾರ್ಮಿಕರೊಬ್ಬರ ಮೃತದೇಹ ಸಂಶಯಾಸ್ಪದ ರೀತಿಯಲ್ಲಿ ಗುರುವಾರ ಪತ್ತೆಯಾಗಿದೆ.
ಚಾಮರಾಜನಗರ ತಾಲೂಕಿನ ಕುರುಬರಹುಂಡಿ ಗ್ರಾಮದ ರಘು(35) ಎಂದು ಮೃತ ವ್ಯಕ್ತಿಯನ್ನು ಗುರುತಿಸಲಾಗಿದೆ.
ಶಾಸಕ ಸಿ.ಪುಟ್ಟರಂಗಶೆಟ್ಟಿ ಅವರಿಗೆ ಸೇರಿದ ಕ್ವಾರಿ ಇದಾಗಿದ್ದು, ಕನಕಪುರ ಮೂಲದ ವ್ಯಕ್ತಿಯೊರ್ವನಿಗೆ ಕ್ವಾರಿಯನ್ನು ಗುತ್ತಿಗೆಗೆ ನೀಡಲಾಗಿತ್ತು ಎಂದು ತಿಳಿದುಬಂದಿದೆ.
ಕಾರ್ಮಿಕನ ಶವ ರಕ್ತಸಿಕ್ತವಾಗಿ ಬಂಡೆಯ ಮೇಲೆ ಬಿದ್ದಿದ್ದು, ಸಾವಿಗೆ ನಿಖರ ಕಾರಣ ತಿಳಿದುಬಂದಿಲ್ಲ. ಆದರೆ ಕಾರ್ಮಿಕ ಕಾಲುಜಾರಿ ಬಿದ್ದಿದ್ದಾನೆ ಎಂಬ ಶಂಕೆ ವ್ಯಕ್ತವಾಗಿದೆ.
ಘಟನಾ ಸ್ಥಳಕ್ಕೆ ಸರ್ಕಲ್ ಇನ್ಸ್ ಪೆಕ್ಟರ್ ವನರಾಜು ಹಾಗೂ ಪೊಲೀಸ್ ಇನ್ಸ್ ಪೆಕ್ಟರ್ ಈಶ್ವರ್ ನೇತೃತ್ವದ ತಂಡ ಭೇಟಿ ನೀಡಿ ಪರಿಶೀಲನೆ ನಡೆಸಿ, ಮೃತದೇಹವನ್ನು ಚಾಮರಾಜನಗರ ಜಿಲ್ಲಾಸ್ಪತ್ರೆಗೆ ರವಾನಿಸಿದ್ದಾರೆ.
ಈ ಸಂಬಂಧ ತೆರಕಣಾಂಬಿ ಪೊಲೀಸ್ ಠಾಣೆಯಲ್ಲಿ ಇನ್ನಷ್ಟೇ ಪ್ರಕರಣ ದಾಖಲಾಗಬೇಕಾಗಿದೆ.