ಬೆಂಗಳೂರು: ಗೌರವಧನ ಹೆಚ್ಚಳ, ಆಶಾ ಕ್ಷೇಮಾಭಿವೃದ್ಧಿ ನಿಧಿ ಸ್ಥಾಪನೆ ಸೇರಿದಂತೆ ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಆಶಾ ಕಾರ್ಯಕರ್ತೆಯರು ಶುಕ್ರವಾರ ಬೀದಿಗಿಳಿದು ಪ್ರತಿಭಟನೆ ನಡೆಸಿದ್ದು, ಶನಿವಾರದಿಂದ ಕೆಲಸಕ್ಕೆ ಗೈರಾಗಿ ಮನೆಯಲ್ಲಿಯೇ ಕುಳಿತು ಪ್ರತಿಭಟನೆ ಮುಂದುವರಿಸಲು ನಿರ್ಧರಿಸಿದ್ದಾರೆ.
ಸಾವಿರಾರು ಸಂಖ್ಯೆಯಲ್ಲಿ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ರೈಲು ನಿಲ್ದಾಣದಿಂದ ಸ್ವಾತಂತ್ರ್ಯ ಉದ್ಯಾನವರೆಗೆ ಬೃಹತ್ ರ್ಯಾಲಿ ನಡೆಸುವ ಮೂಲಕ ಆಶಾ ಕಾರ್ಯಕರ್ತೆಯರು ಶಕ್ತಿ ಪ್ರದರ್ಶಿಸಿದರು. ರ್ಯಾಲಿಯುದ್ದಕ್ಕೂ ಮಾಸಿಕ ಕನಿಷ್ಟ 12 ಸಾವಿರ ರೂ. ನೀಡಬೇಕು ಎಂದು ಘೋಷಣೆ ಕೂಗಿದರು. ಸರ್ಕಾರ ಬೇಡಿಕೆ ಈಡೇರಿಸುವವರೆಗೂ ಕೆಲಸಕ್ಕೆ ಹೋಗುವುದಿಲ್ಲ ಎಂದು ತೀರ್ಮಾನಿಸಿದ್ದಾರೆ.
ಹಾವೇರಿ, ರಾಯಚೂರು, ಹುಬ್ಬಳ್ಳಿ, ಹಿರೇಕೆರೂರು ಸೇರಿ ಹಲವು ಜಿಲ್ಲೆಗಳಿಂದ ಆಶಾ ಕಾರ್ಯಕರ್ತೆಯರು ಆಗಮಿಸಿ ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು. 2019ರ ಜೂನ್ ತಿಂಗಳಲ್ಲಿ ತಮ್ಮ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಸ್ವಾತಂತ್ರ್ಯ ಉದ್ಯಾನದಲ್ಲಿ ಆಶಾ ಕಾರ್ಯಕರ್ತೆಯರು ಪ್ರತಿಭಟನೆ ನಡೆಸಿದ್ದರು. ಇದೀಗ ಮತ್ತೆ ಪ್ರತಿಭಟನೆ ನಡೆಸುತ್ತಿದ್ದು, 30 ಸಾವಿರಕ್ಕೂ ಅಧಿಕ ಆಶಾ ಕಾರ್ಯಕರ್ತೆಯರು ಪಾಲ್ಗೊಂಡು ಒಗ್ಗಟ್ಟು ಪ್ರದರ್ಶಿಸಿದರು.
ಪ್ರತಿಭಟನಾ ಸ್ಥಳಕ್ಕೆ ಆರೋಗ್ಯ ಇಲಾಖೆಯ ಪ್ರಧಾನ ಕಾರ್ಯದರ್ಶಿ ಜಾವೇದ್ ಅಖ್ತರ್ ಸೇರಿದಂತೆ ಇಲಾಖೆಯ ಹಿರಿಯ ಅಧಿಕಾರಿಗಳು ಭೇಟಿ ನೀಡಿ ಬೇಡಿಕೆ ಈಡೇರಿಕೆ ಸಂಬಂಧ ಸರ್ಕಾರದ ಜತೆ ಚರ್ಚಿಸಲಾಗುವುದು ಎಂದು ಭರವಸೆ ನೀಡಿದರೂ, ಆಶಾ ಕಾರ್ಯಕರ್ತರು ಪ್ರತಿಭಟನೆ ಹಿಂಪಡೆಯದೇ ಸರ್ಕಾರ ಸುತ್ತೋಲೆ ಹೊರಡಿಸುವವರೆಗೂ ಮುಂದುವರಿಸುವುದಾಗಿ ತಿಳಿಸಿದ್ದಾರೆ.
ಈ ಸಂದರ್ಭದಲ್ಲಿ ಕರ್ನಾಟಕ ರಾಜ್ಯ ಸಂಯುಕ್ತ ಆಶಾ ಕಾರ್ಯಕರ್ತೆಯರ ಸಂಘದ ರಾಜ್ಯ ಕಾರ್ಯದರ್ಶಿ ಡಿ. ನಾಗಲಕ್ಷ್ಮೀ ಮಾತನಾಡಿ, ಆಶಾ ಕಾರ್ಯಕರ್ತೆಯರಿಗೆ ಭದ್ರತೆ ಇಲ್ಲದಂತಾಗಿದ್ದು, ಪ್ರೋತ್ಸಾಹಧನ 4 ಸಾವಿರದಿಂದ 12 ಸಾವಿರ ರೂ. ಗೆ ಹೆಚ್ಚಳ ಮಾಡಬೇಕು.
ಈಗಾಗಲೇ ಆಂಧ್ರ ಪ್ರದೇಶದಲ್ಲಿ ಏಳು ಸಾವಿರ ರೂ. ಹೆಚ್ಚಳ ಮಾಡಿ 10 ಸಾವಿರ ರೂ. ನೀಡಲಾಗುತ್ತಿದೆ. ಇದೇ ಮಾದರಿಯಲ್ಲಿ ಹೆಚ್ಚಳಕ್ಕೆ ಕ್ರಮಕೈಗೊಳ್ಳಬೇಕು. ಈಗಾಗಲೇ ಭರವಸೆ ನೀಡಿರುವಂತೆ ಆಶಾ ಕಾರ್ಯಕರ್ತೆಯರಿಗೆ ದ್ವಿಚಕ್ರ ವಾಹನ ಖರೀದಿಸಲು ಸಹಾಯಧನ ನೀಡಬೇಕು ಎಂದು ಆಗ್ರಹಿಸಿದರು.