ಬೆಂಗಳೂರು: ಚನ್ನಪಟ್ಟಣ ಉಪ ಚುನಾವಣೆಯ ಮೈತ್ರಿ ಅಭ್ಯರ್ಥಿಯ ಬಗ್ಗೆ ಜೆಡಿಎಸ್ ಮತ್ತು ಬಿಜೆಪಿ ರಾಜ್ಯ, ರಾಷ್ಟ್ರೀಯ ನಾಯಕರು ಚರ್ಚಿಸಿ ತೀರ್ಮಾನ ತೆಗೆದುಕೊಳ್ಳಲಿದ್ದಾರೆ. ಸದ್ಯಕ್ಕೆ ಅಲ್ಲಿ ನನ್ನ ಸ್ಪರ್ಧೆಯ ಬಗೆಗಿನ ಚರ್ಚೆ ಅಪ್ರಸ್ತುತ ಎಂದು ಜೆಡಿಎಸ್ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಹೇಳಿದ್ದಾರೆ.
ಜೆಡಿಎಸ್‌ನ ಪ್ರಧಾನ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಅಲ್ಲಿನ ಅಭ್ಯರ್ಥಿ ಬಗ್ಗೆ ಎರಡೂ ಪಕ್ಷಗಳ ನಾಯಕರ, ಕಾರ್ಯಕರ್ತರ ಅಭಿಪ್ರಾಯ ಪಡೆದು ಅಂತಿಮವಾಗಿ ಆ ವರದಿಯನ್ನು ವರಿಷ್ಠರಿಗೆ ಸಲ್ಲಿಕೆ ಮಾಡುತ್ತೇವೆ. ಮಾಜಿ ಸಚಿವ ಸಿ.ಪಿ.ಯೋಗೇಶ್ವರ್ ಕೂಡ ಮೈತ್ರಿ ಅಭ್ಯರ್ಥಿ ಗೆಲುವಿಗೆ ಕಾರಣರಾಗಿದ್ದಾರೆ. ಹೀಗಾಗಿ ಅಂತಿಮವಾಗಿ ಅಭ್ಯರ್ಥಿ ಯಾರಾಗಬೇಕೆಂದು ಎರಡು ಪಕ್ಷಗಳ ವರಿಷ್ಠರು ನಿರ್ಧಾರ ಮಾಡುತ್ತಾರೆಂದು ನಿಖೀಲ್ ತಿಳಿಸಿದರು. ಜೆಡಿಎಸ್ ರಾಜ್ಯಾಧ್ಯಕ್ಷರ ಹುದ್ದೆ ಬಗ್ಗೆ ಕೇಳಿದ ಪ್ರಶ್ನೆಗೆ, ಸದ್ಯಕ್ಕೆ ರಾಜ್ಯಾಧ್ಯಕ್ಷರ ಬದಲಾವಣೆ ಇಲ್ಲ. ಪಕ್ಷದೊಳಗೆ ಅನೇಕ ಹಿರಿಯರಿದ್ದಾರೆ. ಜಿ.ಟಿ.ದೇವೇಗೌಡ, ಬಂಡೆಪ್ಪ ಕಾಶೆಂಪೂರ್, ನಾಡಗೌಡ ಹೀಗೆ ಹಲವು ನಾಯಕರಿದ್ದಾರೆ. ರಾಜ್ಯಾಧ್ಯಕ್ಷರ ಬಗ್ಗೆ ಪಕ್ಷದ ರಾಷ್ಟ್ರೀಯ ಅಧ್ಯಕ್ಷರು ನಿರ್ಧಾರ ಮಾಡುತ್ತಾರೆ ಎಂದು ಹೇಳಿದ್ದಾರೆ.
ಇಂದು ಕೇಂದ್ರ ಸಚಿವ ಕುಮಾರಸ್ವಾಮಿಗೆ ಅದ್ಧೂರಿ ಸ್ವಾಗತ: ನಿಖಿಲ್
ಬೆಂಗಳೂರು: ಕೇಂದ್ರದ ಬೃಹತ್ ಕೈಗಾರಿಕೆ ಹಾಗೂ ಉಕ್ಕು ಖಾತೆ ಸಚಿವರಾದ ಬಳಿಕ ಮೊದಲ ಬಾರಿಗೆ ರಾಜ್ಯಕ್ಕೆ ಆಗಮಿಸುತ್ತಿರುವ ಎಚ್.ಡಿ. ಕುಮಾರಸ್ವಾಮಿ ಅವರನ್ನು ಅದ್ಧೂರಿಯಾಗಿ ಸ್ವಾಗತಿಸಲು ಜೆಡಿಎಸ್ ಕಾರ್ಯಕರ್ತರು ಸಿದ್ಧತೆ ಮಾಡಿಕೊಂಡಿದ್ದಾರೆ ಎಂದು ಯುವ ಜನತಾದಳ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಅವರು ಹೇಳಿದ್ದಾರೆ.
ಪಕ್ಷದ ರಾಜ್ಯ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಶುಕ್ರವಾರ (ಜೂ. 14) 11.50ಕ್ಕೆ ದೆಹಲಿಯಿಂದ ಬಂದವರೇ ಪಕ್ಷದ ಕಚೇರಿ ಜೆಪಿ ಭವನಕ್ಕೆ ಬಂದು ಕಾರ್ಯಕರ್ತರನ್ನು ಭೇಟಿ ಮಾಡಲಿದ್ದಾರೆ. ನಂತರ ರಾಜ್ಯಪಾಲರ ಭೇಟಿ ಹಾಗೂ ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡರ ಮನೆಗೆ ತೆರಳಿ ಆಶೀರ್ವಾದ ಪಡೆಯಲಿದ್ದಾರೆ. ಬಳಿಕ ತಮ್ಮ ನಿವಾಸಕ್ಕೆ ತೆರಳಿ ಅಲ್ಲಿಂದ ತಿರುಪತಿಗೆ ತೆರಳಲಿದ್ದಾರೆ. ಭಾನುವಾರ ರಾಮನಗರ ಹಾಗೂ ಮಂಡ್ಯಕ್ಕೆ ಭೇಟಿ ನೀಡಿ ಪಕ್ಷದ ಕಾರ್ಯಕರ್ತರಿಂದ ಅಭಿನಂದನೆ ಸ್ವೀಕರಿಸಲಿದ್ದಾರೆ.