ಮಡಿಕೇರಿ: ಇಂಧನ ಸಚಿವ ಡಿ.ಕೆ.ಶಿವಕುಮಾರ್ ಅವರ ಆಸ್ತಿಗಳ ಮೇಲೆ ಐಟಿ ದಾಳಿ ನಡೆಸಿದ ಕ್ರಮವನ್ನು ಖಂಡಿಸಿ ನಗರ ಕಾಂಗ್ರೆಸ್ ಸಮಿತಿ, ಯುವ ಕಾಂಗ್ರೆಸ್ ಘಟಕ ಹಾಗೂ ಡಿ.ಕೆ.ಶಿವಕುಮಾರ್ ಅಭಿಮಾನಿಗಳ ಸಂಘ ನಗರದ ಜನರಲ್ ತಿಮ್ಮಯ್ಯ ವೃತ್ತದಲ್ಲಿ ರಸ್ತೆ ತಡೆ ಪ್ರತಿಭಟನೆ ನಡೆಸಿದವು.
ಮಾನವ ಸರಪಳಿ ನಿರ್ಮಿಸಿದ ಪ್ರತಿಭಟನಕಾರರು ಬಿಜೆಪಿ ನೇತೃತ್ವದ ಕೇಂದ್ರ ಸರಕಾರದ ವಿರುದ್ಧ ಘೋಷಣೆಗಳನ್ನು ಕೂಗಿದರು.
ಈ ಸಂದರ್ಭ ಮಾತನಾಡಿದ ಕಾಂಗ್ರೆಸ್ ಕಾರ್ಮಿಕ ಘಟಕದ ಅಧ್ಯಕ್ಷರಾದ ವಿ.ಪಿ. ಶಶಿಧರ್ ಕೇವಲ ಕಾಂಗ್ರೆಸ್ ಪ್ರತಿನಿಧಿಗಳನ್ನು ಗುರಿಯಾಗಿಸಿಕೊಂಡು ದಾಳಿ ನಡೆಯುತ್ತಿದ್ದು, ಇದು ದ್ವೇಷ ಮತ್ತು ಹತಾಶ ರಾಜಕಾರಣವಾಗಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.
ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸೇರಿದಂತೆ ಬಿಜೆಪಿ ಪ್ರಮುಖರ ಆಸ್ತಿ, ಪಾಸ್ತಿಗಳ ಮೇಲೆ ದಾಳಿ ಮಾಡಿದರೆ ಸಾಕಷ್ಟು ಅವ್ಯವಹಾರ ಬಯಲಿಗೆ ಬರಲಿದೆ ಎಂದು ಆರೋಪಿಸಿದ ಅವರು ಡಿ.ಕೆ.ಶಿವಕುಮಾರ್ ಅವರ ಮೇಲಿನ ದಾಳಿ ರಾಜಕೀಯ ದುರುದ್ದೇಶದಿಂದ ಕೂಡಿದೆ ಎಂದು ಟೀಕಿಸಿದರು. ಜಿ.ಪಂ. ಸದಸ್ಯರಾದ ಕೆ.ಪಿ.ಚಂದ್ರಕಲಾ ಮಾತನಾಡಿ, ಕೇಂದ್ರ ಸರಕಾರ ಬಂಡವಾಳ ಶಾಹಿಗಳ ಪರವಾಗಿದ್ದು, ರಾಜ್ಯದಲ್ಲಿ ಕಾಂಗ್ರೆಸ್ ಬಲವರ್ಧನೆಯನ್ನು ಸಹಿಸದೆ ರಾಜಕೀಯ ಷಡ್ಯಂತ್ರದಲ್ಲಿ ತೊಡಗಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.
ರಾಜೀವ್ ಗಾಂಧಿ ಪಂಚಾಯತ್ ರಾಜ್ ಸಂಘಟನೆಯ ಸಂಚಾಲಕರಾದ ತೆನ್ನಿರಾ ಮೈನಾ ಮಾತನಾಡಿ, ಕರ್ನಾಟಕದಲ್ಲಿ ಕಾಂಗ್ರೆಸ್ ಪಕ್ಷವನ್ನು ಎದುರಿಸುವಲ್ಲಿ ಬಿಜೆಪಿ ವಿಫಲವಾಗಿದೆ. ಇದರಿಂದ ಹತಾಶಗೊಂಡಿರುವ ಕೇಂದ್ರ ಸರಕಾರ ಅನ್ಯ ಮಾರ್ಗದ ಮೂಲಕ ಪ್ರಜಾಪ್ರಭುತ್ವ ವ್ಯವಸ್ಥೆಗೆ ವಿರುದ್ಧವಾದ ಕಾರ್ಯಾಚರಣೆಯಲ್ಲಿ ತೊಡಗಿದೆ ಎಂದು ಆರೋಪಿಸಿದರು. ದೇಶವನ್ನು ಆಳಲು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಜನಾದೇಶ ನೀಡಲಾಗಿದೆಯೇ ಹೊರತು ಸಾರ್ವಧಿಕಾರ ನಡೆಸಲು ಅಲ್ಲವೆಂದು ಮೈನಾ ಅಸಮಾಧಾನ ವ್ಯಕ್ತಪಡಿಸಿದರು.
ನಗರಸಭಾ ಅಧ್ಯಕ್ಷರಾದ ಕಾಮೇರಮ್ಮ ಸೋಮಣ್ಣ, ಸದಸ್ಯರಾದ ಹೆಚ್.ಎಂ.ನಂದಕುಮಾರ್, ಮೂಡಾ ಅಧ್ಯಕ್ಷರಾದ ಚುಮ್ಮಿ ದೇವಯ್ಯ, ಅಖೀಲ ಕರ್ನಾಟಕ ಡಿ.ಕೆ. ಶಿವಕುಮಾರ್ ಅಭಿಮಾನಿಗಳ ಸಂಘದ ಜಿಲ್ಲಾ ಘಟಕದ ಅಧ್ಯಕ್ಷರಾದ ಎಂ.ಎ. ನವೀದ್ ಖಾನ್, ಉಪಾಧ್ಯಕ್ಷರಾದ ಗಾಯತ್ರಿ, ಖಜಾಂಚಿ ಸಿದ್ದಿಕ್, ಜಿಲ್ಲಾ ಕಾಂಗ್ರೆಸ್ ಸಮಿತಿಯ ಪ್ರಧಾನ ಕಾರ್ಯದರ್ಶಿ ವಿ.ಪಿ.ಸುರೇಶ್, ನಗರಾಧ್ಯಕ್ಷರಾದ ಕೆ.ಯು.ಅಬ್ದುಲ್ ರಜಾ‚ಕ್, ಮಹಿಳಾ ಘಟಕದ ನಗರಾಧ್ಯಕ್ಷರಾದ ಎಚ್.ಬಿ. ಪಾರ್ವತಿ, ಯುವ ಘಟಕದ ಅಧ್ಯಕ್ಷರಾದ ಹನೀಫ್ ಸಂಪಾಜೆ ಹಾಗೂ ಪ್ರಧಾನ ಕಾರ್ಯದರ್ಶಿ ಶಾಫಿ ಕೊಟ್ಟಮುಡಿ, ಪ್ರಮುಖರಾದ ಅಂಬೆಕಲ್ಲು ನವೀನ್ ಕುಶಾಲಪ್ಪ ಮತ್ತಿತರ ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.