ಬೆಂಗಳೂರು: ರಾಜ್ಯದಲ್ಲಿ ನಡೆದ ಉಪಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಹೀನಾಯ ಸೋಲು ಕಂಡ ಹಿನ್ನೆಲೆಯಲ್ಲಿ ನೈತಿಕ ಹೊಣೆ ಹೊತ್ತು ವಿಪಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿರುವುದಾಗಿ ಮಾಜಿ ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.
ಹದಿನೈದು ಕ್ಷೇತ್ರಗಳ ಫಲಿತಾಂಶ ಪ್ರಕಟವಾದ ನಂತರ ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಈಗಾಗಲೇ ಪಕ್ಷದ ರಾಜ್ಯ ಉಸ್ತುವಾರಿ ಕೆಸಿ ವೇಣುಗೋಪಾಲ್ ಅವರಿಗೆ ರಾಜೀನಾಮೆ ಪತ್ರ ರವಾನಿಸಿರುವುದಾಗಿ ಹೇಳಿದರು.
ರಾಜ್ಯದಲ್ಲಿ ಪಕ್ಷದ ಹಿತದೃಷ್ಟಿಯಿಂದ ಪಕ್ಷದ ಸೋಲಿನ ಹೊಣೆ ಹೊತ್ತು ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಸ್ಥಾನಕ್ಕೆ ರಾಜೀನಾಮೆ ಕೊಟ್ಟಿದ್ದು, ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಹಾಗೂ ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಗೂ ಪತ್ರವನ್ನು ರವಾನಿಸಿದ್ದೇನೆ ಎಂದರು.
ಪ್ರಾಮಾಣಿಕ ಶ್ರಮದ ಹೊರತಾಗಿಯೂ ರಾಜ್ಯದ ಉಪಚುನಾವಣೆಯಲ್ಲಿ ತೃಪ್ತಿಕರ ಫಲಿತಾಂಶ ನೀಡಲು ಸಾಧ್ಯವಾಗಿಲ್ಲ. ಜನಪರ ಯೋಜನೆಗಳನ್ನು ಘೋಷಿಸಿದರೂ ಕೂಡಾ ಜನರು ನಮ್ಮನ್ನು ತಿರಸ್ಕರಿಸಿದ್ದಾರೆ ಎಂದು ಈ ಸಂದರ್ಭದಲ್ಲಿ ಹೇಳಿದರು.