ಬೆಂಗಳೂರು: ಈ ತಿಂಗಳ 26ರಿಂದ ಪದವಿ ಕಾಲೇಜುಗಳ ಭೌತಿಕ ತರಗತಿಗಳು ಆರಂಭವಾಗುತ್ತಿದ್ದು, ಈವರೆಗೆ ಉನ್ನತ ಶಿಕ್ಷಣ ವಿಭಾಗದ ಶೇ.75ರಷ್ಟು ವಿದ್ಯಾರ್ಥಿಗಳಿಗೆ ಲಸಿಕೆ ನೀಡಲಾಗಿದೆ ಎಂದು ಉನ್ನತ ಶಿಕ್ಷಣ ಖಾತೆ ಸಚಿವರು ಆದ ಉಪ ಮಖ್ಯಮಂತ್ರಿ ಡಾ.ಸಿ.ಎನ್.ಅಶ್ವತ್ಥನಾರಾಯಣ ಹೇಳಿದರು.
ಬೆಂಗಳೂರಿನಲ್ಲಿ ಬುಧವಾರ ಟೊಕಿಯೋ ಒಲಿಂಪಿಕ್-2020 ಕ್ರೀಡಾಕೂಟದಲ್ಲಿ ಪಾಲ್ಗೊಂಡ ಕ್ರೀಡಾಪಟುಗಳಿಗೆ ಶುಭಕೋರುವ ವರ್ಚುಯಲ್ ಕಾರ್ಯಕ್ರಮದಲ್ಲಿ ಭಾಗಿಯಾದ ನಂತರ ಅವರು ಮಾಧ್ಯಮಗಳ ಮಾತನಾಡಿದರು.
ಈಗಾಗಲೇ ವಿದ್ಯಾರ್ಥಿಗಳಿಗೆ ಲಸಿಕೆ ನೀಡುವ ಕಾರ್ಯಕ್ರಮ ವೇಗವಾಗಿ ಸಾಗುತ್ತಿದೆ. ಸರಕಾರಿ ಮತ್ತು ಅನುದಾನಿತ ಕಾಲೇಜುಗಳಲ್ಲಿ ವ್ಯಾಸಂಗ ಮಾಡುತ್ತಿರುವ 18 ವರ್ಷಕ್ಕೂ ಮೇಲ್ಪಟ್ಟ ಎಲ್ಲ ವಿದ್ಯಾರ್ಥಿಗಳಿಗೆ ಲಸಿಕೆ ಕೊಡಲಾಗುತ್ತಿದೆ. ಜತೆಗೆ, ಬೋಧಕರು, ಬೋಧಕೇತರ ಸಿಬ್ಬಂದಿಗೂ ವ್ಯಾಕ್ಸಿನ್ ನೀಡಲಾಗುತ್ತಿದೆ ಎಂದು ಡಿಸಿಎಂ ತಿಳಿಸಿದರು.
ಲಭ್ಯವಿರುವ, ಲಭ್ಯವಾಗುತ್ತಿರುವ ಲಸಿಕೆಯನ್ನು ನ್ಯಾಯೋಚಿತವಾಗಿ ಎಲ್ಲರಿಗೂ ಹಂಚಿ ನೀಡಲಾಗುತ್ತಿದೆ ಎಂದು ಉಪ ಮುಖ್ಯಮಂತ್ರಿಗಳು, ಭೌತಿಕ ತರಗತಿಗಳಿಗೆ ಹಾಜರಾಗ ಬಯಸುವ ವಿದ್ಯಾರ್ಥಿಗಳು ಕಡ್ಡಾಯವಾಗಿ ಮೊದಲ ಡೋಸ್ ಲಸಿಕೆ ಪಡೆದಿರಲೇಬೇಕು ಎಂದರು.
ವಿದ್ಯಾರ್ಥಿಗಳಿಗೆ ಟ್ಯಾಬ್ಲೆಟ್ ಪಿಸಿ:
ಕೋವಿಡ್ ಹಿನ್ನೆಲೆಯಲ್ಲಿ ಉನ್ನತ ಶಿಕ್ಷಣ ಇಲಾಖೆಯಲ್ಲಿ ಅನೇಕ ಸುಧಾರಣೆಗಳನ್ನು ಜಾರಿಗೆ ತರಲಾಗಿದೆ. ನಗರ ಮತ್ತು ಗ್ರಾಮೀಣ ವಿದ್ಯಾರ್ಥಿಗಳ ನಡುವೆ ಡಿಜಿಟಲ್ ಅಂತರ ಅಳಿಸಿ ಹಾಕುವ ಉದ್ದೇಶದಿಂದ ಕಲಿಕಾ ನಿರ್ವಹಣಾ ವ್ಯವಸ್ಥೆ (ಎಲ್‌ಎಂಎಸ್) ಯನ್ನು ಜಾರಿಗೆ ತರಲಾಗಿದೆ. ಅದನ್ನು ಕಲಿಯಲು ಲ್ಯಾಪ್‌ಟಾಪ್ ಮತ್ತು ಟ್ಯಾಬ್ಲೆಟ್ ಪಿಸಿಗಳನ್ನು ವಿದ್ಯಾರ್ಥಿಗಳಿಗೆ ಕೊಡಲಾಗಿದೆ ಎಂದು ಡಿಸಿಎಂ ತಿಳಿಸಿದರು.