ನವದೆಹಲಿ: ಕೇಂದ್ರ ಸರ್ಕಾರ ಮತ್ತು ಅರವಿಂದ ಕೇಜ್ರಿವಾಲ್ ನೇತೃತ್ವದ ಆಮ್ ಆದ್ಮಿ ಪಕ್ಷದ ಸರ್ಕಾರದ ನಡುವೆ ಮತ್ತೂಂದು ಸುತ್ತಿನ ಸಮರ ಆರಂಭವಾಗುವ ಲಕ್ಷಣಗಳು ಕಂಡುಬಂದಿವೆ. ದೆಹಲಿಯಲ್ಲಿ ಗ್ರೂಪ್-ಎ ಅಧಿಕಾರಿಗಳ ವರ್ಗಾವಣೆ ಮತ್ತು ಅವರ ವಿರುದ್ಧ ಶಿಸ್ತು ಕ್ರಮಗಳ ಉಸ್ತುವಾರಿಗಾಗಿ ರಾಷ್ಟ್ರ ರಾಜಧಾನಿ ನಾಗರಿಕ ಸೇವಾ ಪ್ರಾಧಿಕಾರವನ್ನು ರಚಿಸಿ ಕೇಂದ್ರ ಸರ್ಕಾರ ಶುಕ್ರವಾರ ರಾತ್ರಿ ಸುಗ್ರೀವಾಜ್ಞೆ ಹೊರಡಿಸಿದೆ.
ದೆಹಲಿಯಲ್ಲಿ ಪೊಲೀಸ್, ಸಾರ್ವಜನಿಕ ಸುವ್ಯವಸ್ಥೆ ಮತ್ತು ಕಂದಾಯ ಇಲಾಖೆಗೆ ಸಂಬಂಧಿಸಿದ ಸೇವೆಗಳನ್ನು ಹೊರತುಪಡಿಸಿ ಇತರೆ ಎಲ್ಲ ಸರ್ಕಾರಿ ಸೇವೆಗಳ ನಿಯಂತ್ರಣವನ್ನು ಚುನಾಯಿತ ಸರ್ಕಾರಕ್ಕೆ ವಹಿಸಿ ಸರ್ವೋಚ್ಚ ನ್ಯಾಯಾಲಯ ತೀರ್ಪು ನೀಡಿದ ಒಂದೇ ವಾರದಲ್ಲಿ ಈ ಬೆಳವಣಿಗೆ ನಡೆದಿದೆ.
ಸುಪ್ರೀಂ ಕೋರ್ಟ್‌ನ ತೀರ್ಪನ್ನು ರದ್ದುಗೊಳಿಸಲು ಕೇಂದ್ರ ಸರ್ಕಾರ ಸುಗ್ರೀವಾಜ್ಞೆ ಜಾರಿ ಮಾಡಲು ಯೋಜಿಸುತ್ತಿದೆ ಎಂದು ಶುಕ್ರವಾರವಷ್ಟೇ ಸಿಎಂ ಕೇಜ್ರಿವಾಲ್ ಹೇಳಿದ್ದರು. ಈ ಹೇಳಿಕೆ ಹೊರಬಿದ್ದ ಕೆಲವೇ ಗಂಟೆಗಳಲ್ಲಿ ಸುಗ್ರೀವಾಜ್ಞೆ ಜಾರಿ ಮಾಡಲಾಗಿದೆ. “ಗ್ರೂಪ್-ಎ ಅಧಿಕಾರಿಗಳ ವರ್ಗಾವಣೆ, ಅವರ ವಿರುದ್ಧದ ಶಿಸ್ತು ಕ್ರಮ ಪ್ರಕ್ರಿಯೆಗಳ ಉಸ್ತುವಾರಿಗಾಗಿ ರಾಷ್ಟ್ರ ರಾಜಧಾನಿ ನಾಗರಿಕ ಸೇವಾ ಪ್ರಾಧಿಕಾರ ರಚಿಸಲಾಗಿದೆ. ದೆಹಲಿ ಮುಖ್ಯಮಂತ್ರಿಗಳು ಈ ಪ್ರಾಧಿಕಾರದ ಮುಖ್ಯಸ್ಥರಾಗಿದ್ದರೆ, ಮುಖ್ಯ ಕಾರ್ಯದರ್ಶಿ ಮತ್ತು ಪ್ರಧಾನ ಗೃಹ ಕಾರ್ಯದರ್ಶಿಗಳು ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳಾಗಿರುತ್ತಾರೆ. ಇಲ್ಲಿ ಯಾವುದೇ ನಿರ್ಧಾರ ಕೈಗೊಳ್ಳುವುದಿದ್ದರೂ ಬಹುಮತದ ಆಧಾರದಲ್ಲಿ ಕೈಗೊಳ್ಳಬೇಕು. ಪ್ರಾಧಿಕಾರದ ಶಿಫಾರಸುಗಳಿಗೆ ಸದಸ್ಯ ಕಾರ್ಯದರ್ಶಿಯೇ ದೃಢೀಕರಿಸಬೇಕು’ ಎಂದು ಸುಗ್ರೀವಾಜ್ಞೆಯಲ್ಲಿ ತಿಳಿಸಲಾಗಿದೆ.
ಆಪ್ ಕಿಡಿ: ಕೇಂದ್ರದ ಸುಗ್ರೀವಾಜ್ಞೆ ವಿರುದ್ಧ ಕೆಂಡಕಾರಿರುವ ದೆಹಲಿ ಸಿಎಂ ಕೇಜ್ರಿವಾಲ್, “ಇದೊಂದು ವಂಚಕ ನಡೆ’ ಎಂದಿದ್ದಲ್ಲದೆ, ಇದರ ವಿರುದ್ಧ ಸುಪ್ರೀಂ ಕೋರ್ಟ್ ಮೆಟ್ಟಿಲೇರುವುದಾಗಿ ಹೇಳಿದ್ದಾರೆ. ಇದು ನ್ಯಾಯಾಂಗ ನಿಂದನೆ ಎನ್ನುವುದು ಸ್ಪಷ್ಟ ಎಂದು ದೆಹಲಿ ಸಚಿವೆ ಆತಿಷಿ ಹೇಳಿದ್ದಾರೆ.
ಸುಪ್ರೀಂಗೆ ಅರ್ಜಿ
ಇನ್ನೊಂದೆಡೆ, ಮೇ 11ರಂದು ಸುಪ್ರೀಂ ಕೋರ್ಟ್ ನೀಡಿದ್ದ ತೀರ್ಪನ್ನು ಮರುಪರಿಶೀಲಿಸುವಂತೆ ಕೋರಿ ಕೇಂದ್ರ ಸರ್ಕಾರ ಮತ್ತೆ ಸರ್ವೋಚ್ಚ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದೆ.
ಸುಪ್ರೀಂ ಕೋರ್ಟ್‌ನ ಇತ್ತೀಚೆಗಿನ ತೀರ್ಪಿನ ಹೆಸರಿನಲ್ಲಿ ಕೇಜ್ರಿವಾಲ್ ಸರ್ಕಾರವು ತನ್ನ ಅಧಿಕಾರ ದುರ್ಬಳಕೆ ಮಾಡಿಕೊಂಡು, ಅಧಿಕಾರಿಗಳನ್ನು ಬೆದರಿಸುವ ಕೆಲಸ ಮಾಡುತ್ತಿತ್ತು. ದೆಹಲಿಯ ಘನತೆಯನ್ನು ಉಳಿಸಿಕೊಳ್ಳಲು ಮತ್ತು ಜನರ ಹಿತಾಸಕ್ತಿಯನ್ನು ರಕ್ಷಿಸಲು ಈ ಸುಗ್ರೀವಾಜ್ಞೆಯ ಅಗತ್ಯವಿತ್ತು.
– ವೀರೇಂದ್ರ ಸಚ್‌ದೇವ, ದೆಹಲಿ ಬಿಜೆಪಿ ಅಧ್ಯಕ್ಷ