ಹೊಸದಿಲ್ಲಿ: ಶನಿವಾರ ಸಂಜೆ ವಾಯುವ್ಯ ದೆಹಲಿಯ ಜಹಾಂಗೀರ್‌ಪುರಿ ಪ್ರದೇಶದಲ್ಲಿ ಹನುಮಾನ್ ಜಯಂತಿ ಮೆರವಣಿಗೆಯಲ್ಲಿ ಎರಡು ಸಮುದಾಯಗಳ ನಡುವೆ ಘರ್ಷಣೆ ಸಂಭವಿಸಿದೆ. ನಂತರದ ಹಿಂಸಾಚಾರದಲ್ಲಿ ಹಲವಾರು ಪೊಲೀಸ್ ಸಿಬ್ಬಂದಿ ಗಾಯಗೊಂಡಿದ್ದಾರೆ.
ಪೊಲೀಸರ ಪ್ರಕಾರ, ಶನಿವಾರ ಸಂಜೆ 6 ಗಂಟೆ ಸುಮಾರಿಗೆ ನಡೆದ ಹಿಂಸಾಚಾರದಲ್ಲಿ ಕಲ್ಲು ತೂರಾಟ ನಡೆದಿದೆ ಮತ್ತು ಕೆಲವು ವಾಹನಗಳಿಗೆ ಬೆಂಕಿ ಹಚ್ಚಲಾಗಿದೆ. ಪರಿಸ್ಥಿತಿ ಹತೋಟಿಗೆ ತರಲು ಹೆಚ್ಚಿನ ಭದ್ರತಾ ಸಿಬ್ಬಂದಿಯನ್ನು ಸ್ಥಳಕ್ಕೆ ನಿಯೋಜಿಸಲಾಗಿದೆ.
ದೆಹಲಿ ಪೊಲೀಸರು ಶನಿವಾರ ರಾತ್ರಿ ಘಟನೆಯ ತನಿಖೆ ಪ್ರಾರಂಭಿಸಿದ್ದಾರೆ. ಎಫ್ಐಆರ್ ದಾಖಲಿಸಲಾಗಿದೆ. ಸುಮಾರು ಹದಿನೈದು ಜನರನ್ನು ವಿಚಾರಣೆಗಾಗಿ ಕಸ್ಟಡಿಗೆ ತೆಗೆದುಕೊಳ್ಳಲಾಗಿದೆ. ಸ್ಥಳೀಯ ಪೊಲೀಸರು ಘಟನೆಯ ಬಗ್ಗೆ ತನಿಖೆ ನಡೆಸುತ್ತಿದ್ದಾರೆ.
ಘಟನೆಯಲ್ಲಿ ಪ್ರಮುಖ ಆರೋಪಿಗಳನ್ನು ಪತ್ತೆ ಹಚ್ಚಲು ದೆಹಲಿ ಪೊಲೀಸರು ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸುತ್ತಿದ್ದಾರೆ. ಮನೆಗಳ ಮೇಲ್ಛಾವಣಿಯಲ್ಲಿ ಕಲ್ಲುಗಳನ್ನು ಸಂಗ್ರಹಿಸಲಾಗಿದೆಯೇ ಎಂದು ನೋಡಲು ಪೊಲೀಸರು ಡ್ರೋನ್ ದೃಶ್ಯಗಳನ್ನು ಸಹ ಬಳಸುತ್ತಿದ್ದಾರೆ.
ಕುಶಾಲ್ ಚಿತ್ರಮಂದಿರದ ಬಳಿ ಈ ಘಟನೆ ನಡೆದಿದ್ದು, ಕಲ್ಲು ತೂರಾಟದಲ್ಲಿ ಗಾಯಗೊಂಡ ಪೊಲೀಸರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
ಇದನ್ನೂ ಓದಿ:1.19 ಕೋಟಿ ರೂ. “ಇ-ಕಾರು’ ಕೊಂಡ ತೆಲುಗು ಚಿತ್ರರಂಗದ ಸೂಪರ್‌ಸ್ಟಾರ್ ಮಹೇಶ್ ಬಾಬು
“ಇದು ಸಾಂಪ್ರದಾಯಿಕ ಮೆರವಣಿಗೆಯಾಗಿದ್ದು, ಪೊಲೀಸ್ ಸಿಬ್ಬಂದಿ ಬೆಂಗಾವಲು ಪಡೆಯುತ್ತಿದ್ದರು. ಆದರೆ, ಮೆರವಣಿಗೆಯು ಕುಶಾಲ್ ಚಿತ್ರಮಂದಿರದ ಬಳಿ ತಲುಪುತ್ತಿದ್ದಂತೆ ಎರಡು ಸಮುದಾಯಗಳ ನಡುವೆ ಘರ್ಷಣೆ ಸಂಭವಿಸಿದೆ” ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.