ನವದೆಹಲಿ: ರಾಷ್ಟ್ರರಾಜಧಾನಿ ದೆಹಲಿಯಲ್ಲಿ ಮತ್ತೆ ಆರು ಒಮಿಕ್ರಾನ್ ಪ್ರಕರಣಗಳು ಪತ್ತೆಯಾಗುವ ಮೂಲಕ ಒಟ್ಟು ಪ್ರಕರಣಗಳ ಸಂಖ್ಯೆ 28ಕ್ಕೆ ಏರಿಕೆಯಾಗಿದೆ ಎಂದು ದೆಹಲಿ ಆರೋಗ್ಯ ಇಲಾಖೆ ಸೋಮವಾರ(ಡಿಸೆಂಬರ್ 20) ಮಾಹಿತಿ ನೀಡಿದೆ.
ಆರು ಮಂದಿಯಲ್ಲಿ ನಾಲ್ವರನ್ನು ಸಾಕೇತ್ ನ ಮ್ಯಾಕ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಎಎನ್ ಐ ನ್ಯೂಸ್ ಏಜೆನ್ಸಿ ವರದಿ ಮಾಡಿದೆ. ದೆಹಲಿಯಲ್ಲಿ ಕೋವಿಡ್ ಪ್ರಕರಣಗಳ ಹಾಗೂ ಲಸಿಕೆ ವಿತರಣೆ ಕುರಿತ ವಿಪತ್ತು ನಿರ್ವಹಣಾ ಮಂಡಳಿಯ ಸಭೆಗೂ ಮೊದಲು ಈ ಬೆಳವಣಿಗೆ ನಡೆದಿದೆ.
ಸಭೆಯಲ್ಲಿ ಡಿಡಿಎಂಎ ಸದಸ್ಯರಲ್ಲದೇ, ದೆಹಲಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ, ಆರೋಗ್ಯ ಸಚಿವ ಸತ್ಯೇಂದ್ರ ಜೈನ್, ನೀತಿ ಆಯೋಗದ ಸದಸ್ಯ, ಡಾ. ವಿಕೆ ಪೌಲ್, ಪ್ರೊ.ಬಲರಾಮ್ ಭಾರ್ಗವ್ ಹಾಗೂ ಏಮ್ಸ್ ನಿರ್ದೇಶಕ, ಡಾ.ರಣ್ ದೀಪ್ ಗುಲೇರಿಯಾ ಭಾಗವಹಿಸುವ ಸಾಧ್ಯತೆ ಇದೆ.
ಎಲ್ಲಾ ಪಾಸಿಟಿವ್ ಪ್ರಕರಣಗಳನ್ನು ಜಿನೋಸೆಮ್ ಸಿಕ್ವೆನ್ಸಿಂಗ್ ಗೆ ಕಳುಹಿಸಲಾಗುವುದು ಎಂದು ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ತಿಳಿಸಿದ್ದಾರೆ. ಬೂಸ್ಟರ್ ಡೋಸ್ ನೀಡಲು ಕೇಂದ್ರ ಸರ್ಕಾರ ಅನುಮತಿ ನೀಡಿರುವುದಾಗಿ ಈ ಸಂದರ್ಭದಲ್ಲಿ ಹೇಳಿದರು.
ದೆಹಲಿಯಲ್ಲಿ ಭಾನುವಾರ 107 ಕೋವಿಡ್ ಪ್ರಕರಣಗಳು ಪತ್ತೆಯಾಗಿದ್ದು, ಇದು ಕಳೆದ ಆರು ತಿಂಗಳ ಬಳಿಕ ಪತ್ತೆಯಾದ ಗರಿಷ್ಠ ಸಂಖ್ಯೆಯಾಗಿದೆ. ಅಲ್ಲದೇ ಕೋವಿಡ್ ನಿಂದ ಒಬ್ಬರು ಸಾವನ್ನಪ್ಪಿರುವುದಾಗಿ ವರದಿ ತಿಳಿಸಿದೆ.