ನವದೆಹಲಿ: ಕೋವಿಡ್ 19 ಸೋಂಕು ಪ್ರಕರಣ ಇಳಿಕೆಯಾದ ಹಿನ್ನೆಲೆಯಲ್ಲಿ ರಾಷ್ಟ್ರರಾಜಧಾನಿ ದೆಹಲಿಯಲ್ಲಿ ಸೋಮವಾರ(ಜೂನ್ 07)ದಿಂದ ಲಾಕ್ ಡೌನ್ ತೆರವುಗೊಳಿಸಲು ಪ್ರಾರಂಭಿಸಿದ ಪರಿಣಾಮ ಹಲವು ಪ್ರದೇಶಗಳಲ್ಲಿ ಭಾರೀ ಪ್ರಮಾಣದ ಟ್ರಾಫಿಕ್ ಜಾಮ್ ಸಂಭವಿಸಿರುವುದಾಗಿ ವರದಿ ತಿಳಿಸಿದೆ.
ಇದನ್ನೂ ಓದಿ:ಭಿಕ್ಷೆ ಬೇಡಿ ಮಂತ್ರಿಯಾದವರು ಯಡಿಯೂರಪ್ಪ ಬಗ್ಗೆ ಮಾತನಾಡುತ್ತಾರೆ: ರೇಣುಕಾಚಾರ್ಯ ಕಿಡಿ
ಕೋವಿಡ್ ಲಾಕ್ ಡೌನ್ ಸಡಿಲಿಕೆ ಮಾಡಲಾಗುತ್ತಿದೆ, ಆದರೆ ಜನರು ಕೋವಿಡ್ 19 ಸೋಂಕನ್ನು ತಡೆಗಟ್ಟುವ ನಿಟ್ಟಿನಲ್ಲಿ ಎಲ್ಲಾ ಮುನ್ನಚ್ಚರಿಕಾ ಕ್ರಮಗಳನ್ನು ತೆಗೆದುಕೊಳ್ಳಬೇಕು ಎಂದು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ಭಾನುವಾರ (ಜೂನ್ 06) ತಿಳಿಸಿದ್ದರು.
ಆರ್ಥಿಕ ಪರಿಸ್ಥಿತಿಯನ್ನು ಮತ್ತೆ ಸುಧಾರಿಸುವ ನಿಟ್ಟಿನಲ್ಲಿ ಲಾಕ್ ಡೌನ್ ತೆರವುಗೊಳಿಸಲಾಗುತ್ತಿದೆ ಎಂದು ಕೇಜ್ರಿವಾಲ್ ಹೇಳಿದರು. ಇಂದಿನಿಂದ ದೆಹಲಿಯಲ್ಲಿ ಹಲವಾರು ಚಟುವಟಿಕೆಗಳು ಆರಂಭಗೊಂಡಿದೆ. ಆದರೆ ಕೋವಿಡ್ ಸೋಂಕನ್ನು ತಡೆಗಟ್ಟುವ ನಿಟ್ಟಿನಲ್ಲಿ ಮಾಸ್ಕ್ ಕಡ್ಡಾಯವಾಗಿ ಧರಿಸಬೇಕು, ಸಾಮಾಜಿಕ ಅಂತರ ಕಾಪಾಡಿಕೊಳ್ಳಬೇಕು. ಕೈಯನ್ನು ಆಗಾಗ ತೊಳೆಯುತ್ತಿರಬೇಕು ಎಂದು ಸೂಚಿಸಿದ್ದರು.
ದೆಹಲಿ ಸರ್ಕಾರ ಮಾರುಕಟ್ಟೆಗಳು, ಮಾಲ್ಸ್ ಮತ್ತು ಸ್ವತಂತ್ರ ಅಂಗಡಿಗಳನ್ನು ತೆರೆಯಲು ಅವಕಾಶ ನೀಡಿದೆ. ಬೆಳಗ್ಗೆ 10ರಿಂದ ರಾತ್ರಿ ಎಂಟು ಗಂಟೆವರೆಗೆ ಸಮ=ಬೆಸ ಸಂಖ್ಯೆ ಆಧಾರದಲ್ಲಿ ವ್ಯಾಪಾರ ನಡೆಸಲು ಅನುಮತಿ ನೀಡಿದ್ದಾರೆ.